ಬಿಜೆಪಿಯಿಂದ ಆರು ವರ್ಷ ಕಾಲ ಯತ್ನಾಳ್‌ ಉಚ್ಚಾಟನೆ: ವಿಜಯೇಂದ್ರ, ಬೊಮ್ಮಾಯಿ ಪ್ರತಿಕ್ರಿಯೆ ಏನು, ಯತ್ನಾಳ್‌ ಹೇಳಿದ್ದೇನು
ಕನ್ನಡ ಸುದ್ದಿ  /  ಕರ್ನಾಟಕ  /  ಬಿಜೆಪಿಯಿಂದ ಆರು ವರ್ಷ ಕಾಲ ಯತ್ನಾಳ್‌ ಉಚ್ಚಾಟನೆ: ವಿಜಯೇಂದ್ರ, ಬೊಮ್ಮಾಯಿ ಪ್ರತಿಕ್ರಿಯೆ ಏನು, ಯತ್ನಾಳ್‌ ಹೇಳಿದ್ದೇನು

ಬಿಜೆಪಿಯಿಂದ ಆರು ವರ್ಷ ಕಾಲ ಯತ್ನಾಳ್‌ ಉಚ್ಚಾಟನೆ: ವಿಜಯೇಂದ್ರ, ಬೊಮ್ಮಾಯಿ ಪ್ರತಿಕ್ರಿಯೆ ಏನು, ಯತ್ನಾಳ್‌ ಹೇಳಿದ್ದೇನು

ಬಿಜೆಪಿಯ ಹಿರಿಯ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿರುವ ಕುರಿತು ಪ್ರಮುಖ ನಾಯಕರ ಪ್ರತಿಕ್ರಿಯೆಗಳು ಹೇಗಿವೆ.

ಯತ್ನಾಳ್‌ ಉಚ್ಚಾಟನೆ ಬಳಿಕ ವಿಜಯೇಂದ್ರ ಅವರ ಪ್ರತಿಕ್ರಿಯೆ ಏನು
ಯತ್ನಾಳ್‌ ಉಚ್ಚಾಟನೆ ಬಳಿಕ ವಿಜಯೇಂದ್ರ ಅವರ ಪ್ರತಿಕ್ರಿಯೆ ಏನು

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿರುವ ಕುರಿತು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಇದಲ್ಲದೇ ಯತ್ನಾಳ್‌ ಕೂಡ ತಮ್ಮ ಪ್ರತಿಕ್ರಿಯೆಯನ್ನು ಹೊರ ಹಾಕಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾರು ಏನು ಮಾತನಾಡಿದರು ಎನ್ನುವ ವಿವರಗಳು ಇಲ್ಲಿವೆ.

ಶಿಸ್ತು ತ್ಯಾಗಕ್ಕೆ ಆದ್ಯತೆ, ಉಚ್ಚಾಟನೆ ಸಂಭ್ರಮಿಸಬೇಡಿ: ವಿಜಯೇಂದ್ರ

ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ.

ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ ಬಸನಗೌಡ ಪಾಟೀಲ್ ಯತ್ನಾಳ್ ರವರ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ. ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ. ಪೂಜ್ಯ ತಂದೆ ಯಡಿಯೂರಪ್ಪನವರು ಎಲ್ಲರನ್ನೂ ಸಮಚಿತ್ತ ಭಾವದಿಂದ ನೋಡಿ, ಪಕ್ಷವನ್ನು ಕುಟುಂಬದಂತೆ ಬೆಳೆಸಿದ ಮಾದರಿಯಲ್ಲಿಯೇ ನಡೆಯಬೇಕೆಂಬ ಸಂಕಲ್ಪ ಹೊತ್ತು, ಸಂಘದ ಹಿರಿಯರು ಮತ್ತು ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ.

ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ, ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ, ಸಮರ್ಪಣೆ-ತ್ಯಾಗದ ಪಾಠವನ್ನು ಹೇಳಿಕೊಡುವ ಸಂಸ್ಕಾರವಂತ ಸಂಘಟನೆಯ ವ್ಯವಸ್ಥೆಯಲ್ಲಿ ಬೆಳೆದು ಬಂದ ನಾನು ಸಹನೆ-ತಾಳ್ಮೆಯನ್ನು ಜವಾಬ್ದಾರಿ ನಿರ್ವಹಿಸುವ ನಿಟ್ಟಿನಲ್ಲಿ ಆಧಾರ ಸ್ಥಂಭವೆಂದು ಪರಿಗಣಿಸಿ ಮುನ್ನಡಿದಿದ್ದೇನೆ. ಈ ನಿಟ್ಟಿನಲ್ಲಿ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ. ವಿಶ್ವಾಸ ರಾಜಕಾರಣವನ್ನು ಎಲ್ಲರೊಡಗೂಡಿ ಮುಂದುವರೆಸಿ ಪಕ್ಷ ಸಂಘಟನೆಗೆ ಕಟ್ಟಕಡೆಯ ಕಾರ್ಯಕರ್ತರನ್ನೂ ಅಣಿಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯಲಿದ್ದೇನೆ.

ಭವಿಷ್ಯದಲ್ಲಿಯೂ ನಾನು ನಡೆಯುವ ಹಾದಿಯಲ್ಲಿ ಎಲ್ಲಾದರೂ ಎಡವಿದರೆ, ಅದನ್ನು ತಿದ್ದಿ ತೀಡುವ ಅಧಿಕಾರ ಪಕ್ಷದ ಹಿರಿಯರೆಲ್ಲರಿಗೂ ಇದ್ದೇ ಇದೆ.

ಎಲ್ಲರೂ ಸೇರಿ ರಚನಾತ್ಮಕ ಸಲಹೆಗಳನ್ನು ಸ್ವೀಕರಿಸಿ ಪಕ್ಷವನ್ನು ಮುನ್ನಡೆಸೋಣ, ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತದಲ್ಲಿ ಮುಳುಗಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಸಮೃದ್ಧ ಕರ್ನಾಟಕವನ್ನು ಕಟ್ಟುವ ನಿಟ್ಟಿನಲ್ಲಿ ವಿಕಸಿತ ಭಾರತದ ಸಂಕಲ್ಪ ಹೊತ್ತ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆಗಲು ಕೊಡೋಣ, ಪಕ್ಷದ ವರಿಷ್ಟರ ನಿರೀಕ್ಷೆಯ ಗುರಿ ತಲುಪೋಣ.

 

ಸತ್ಯವಂತರಿಗಿದು ಕಾಲವಲ್ಲ, ಹೋರಾಟ ನಿಲ್ಲೋಲ್ಲ: ಯತ್ನಾಳ್‌

ಸತ್ಯವಂತರಿಗಿದು ಕಾಲವಲ್ಲ ದುಷ್ಟ ಜನರಿಗೆ ಸುಭಿಕ್ಷ ಕಾಲ. ಕುಟುಂಬ ರಾಜಕಾರಣ, ಭ್ರಷ್ಟಾಚಾರ, ಪಕ್ಷದಲ್ಲಿ ಬದಲಾವಣೆ, ಏಕವ್ಯಕ್ತಿ ನಾಯಕತ್ವವನ್ನು ಬದಲಾವಣೆ ಮಾಡಿ ಎಂದು ಹೇಳಿದ್ದಕ್ಕೆ ಪಕ್ಷ ನನ್ನನ್ನು ಉಚ್ಛಾಟನೆ ಮಾಡಿದೆ. ಅದರೊಂದಿಗೆ ಸತ್ಯವಂತರಿಗಿದು ಕಾಲವಲ್ಲ. ವಂಶಪಾರಂಪರ್ಯ ರಾಜಕೀಯ, ಭ್ರಷ್ಟಾಚಾರ, ಪಕ್ಷದೊಳಗಿನ ಸುಧಾರಣೆಗಳ ವಿರುದ್ಧ ಮಾತನಾಡಿದ್ದಕ್ಕಾಗಿ, ಏಕವ್ಯಕ್ತಿ ದಬ್ಬಾಳಿಕೆಯನ್ನು ತೆಗೆದುಹಾಕಿ ಮತ್ತು ಉತ್ತರ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ವಿನಂತಿಸಿದ್ದಕ್ಕಾಗಿ ಪಕ್ಷವು ನನ್ನನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಿದೆ.’ಇದ್ದಿದ್ದು ಇದ್ದ ಹಾಗೆ ನಾನು ಹೇಳಿರುವ ವಿಚಾರಕ್ಕೆ’ ಪಕ್ಷವು ನನಗೆ ಪ್ರತಿಫಲ ನೀಡಿದೆ. 

ಕೆಲವು ಸ್ಥಾಪಿತ ಹಿತಾಸಕ್ತಿಗಳು ತಮ್ಮ ಕಾರ್ಯಸೂಚಿಯನ್ನು ಯಶಸ್ವಿಯಾಗಿ ಮುಂದುವರಿಸುವಲ್ಲಿ ತಮ್ಮ ಪಾತ್ರವನ್ನು ವಹಿಸಿವೆ. ನನ್ನನ್ನು ಅಮಾನತುಗೊಳಿಸುವ ನಿರ್ಧಾರವು ಭ್ರಷ್ಟಾಚಾರ, ಕುಟುಂಬ ರಾಜಕೀಯ, ಉತ್ತರ ಕರ್ನಾಟಕದ ಅಭಿವೃದ್ಧಿ ಮತ್ತು ಹಿಂದುತ್ವದ ವಿರುದ್ಧದ ನನ್ನ ಹೋರಾಟವನ್ನು ತಡೆಯುವುದಿಲ್ಲ. ನಾನು ನನ್ನ ಜನರಿಗೆ ಅದೇ ಹುರುಪು ಮತ್ತು ದೃಢತೆಯಿಂದ ಸೇವೆ ಸಲ್ಲಿಸುವುದನ್ನು ಮುಂದುವರಿಸುತ್ತೇನೆ.ಎಲ್ಲಾ ಕಾರ್ಯಕರ್ತರಿಗೆ, ಹಿತೈಷಿಗಳಿಗೆ, ಸ್ನೇಹಿತರಿಗೆ, ಪರಿಚಯಸ್ಥರಿಗೆ, ಸ್ವಾಮೀಜಿಗಳಿಗೆ, ಮಾಧ್ಯಮಗಳಿಗೆ, ಬೆಂಬಲದ ಆಧಾರಸ್ತಂಭವಾಗಿರುವ ನನ್ನ ಕುಟುಂಬಕ್ಕೆ ಮತ್ತು ಸರ್ವಶಕ್ತನಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. 

ನಾನು ಇದನ್ನು ಬರೆಯುವಾಗ, ಪುರಂದರ ದಾಸರು ಹೇಳಿದ್ದನ್ನು ನಾನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇನೆ. ಸತ್ಯವಂತರಿಗಿದು ಕಾಲವಲ್ಲ… ದುಷ್ಟಜನರಿಗೆ ಸುಭಿಕ್ಷಕಾಲ || ಉಪಕಾರ ಮಾಡಿದರೆ ಅಪಕರಿಸುವ ಕಾಲ ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ ಸತ್ಯವಂತರಿಗಿದು ಕಾಲವಲ್ಲ.

 

ಹೈಕಮಾಂಡ್ ನಿರ್ಣಯ ನಾವೆಲ್ಲ ಪಾಲಿಸಬೇಕು:ಬಸವರಾಜ ಬೊಮ್ಮಾಯಿ

ದೆಹಲಿ: ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಣಯವನ್ನು ನಾವೆಲ್ಲರೂ ಪಾಲಿಸಬೇಕಾಗುತ್ತದೆ. ಬರುವಂತಹ ದಿನಗಳಲ್ಲಿ ಪಕ್ಷಕ್ಕೆ ಯಾವುದೇ ರೀತಿಯ ನಷ್ಟವಾಗದ ರೀತಿಯಲ್ಲಿ ನಾವು ನಡೆದುಕೊಳ್ಳಬೇಕಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ವಿಷಯದ ಬಗ್ಗೆ ವರಿಷ್ಠರ ಜೊತೆ ಚರ್ಚಿಸಿ ಮಾತನಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಸಂಜೆ 6 ಗಂಟೆವರೆಗೂ ಸಂಸತ್ತಿನಲ್ಲಿ ಇದ್ದೆವು. ಅಲ್ಲಿಂದ ಹೊರಗೆ ಬಂದಾಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಚಾಟನೆಯ ಸುದ್ದಿ ಕೇಳಿ ಬಂದಿತು. ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ ತನ್ನದೇ ಆದ ನೀತಿ ನಿರ್ಧಾರಗಳನ್ನು ಹಾಕಿಕೊಂಡಿರುವ ಪಕ್ಷ. ಕರ್ನಾಟಕದ ವಿಚಾರದಲ್ಲಿ ಕಳೆದ ಒಂದು ವರ್ಷದಿಂದ ಪಕ್ಷದ ಹೈಕಮಾಂಡ್ ಎಲ್ಲರನ್ನು ಕರೆದು ಮಾತನಾಡಿಸಿ ಒಗ್ಗೂಡಿಸುವ ಪ್ರಯತ್ನ ಮಾಡಿದೆ ಎಂದು ಹೇಳಿದರು.

ಈಗ ಶಿಸ್ತು ಮುಖ್ಯ ಎಂದು ಒಂದು ಕಾಲಘಟ್ಟಕ್ಕೆ ಬಂದಿರುವುದರಿಂದ ಕೆಲವರಿಗೆ ನೊಟೀಸ್ ಕೊಟ್ಟಿದ್ದಾರೆ. ಕೆಲವರ ಮೇಲೆ ಕ್ರಮ ಕೈಗೊಂಡಿದ್ದಾರೆ. ಈ ವಿಚಾರವಾಗಿ ಏನೆಲ್ಲ ಇದೆ ಎಂದು ವರಿಷ್ಠರನ್ನು ಭೇಟಿ ಮಾಡಿಲ್ಲ. ಆದಷ್ಟು ಎಲ್ಲರನ್ನು ಒಂದುಗೂಡಿಸಿ ಕರೆದುಕೊಂಡು ಹೋಗುವುದು ಇಂದಿನ ಅನಿವಾರ್ಯತೆ ಇದೆ. ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಣಯವನ್ನು ನಾವೆಲ್ಲರೂ ಪಾಲಿಸಬೇಕಾಗುತ್ತದೆ. ಬರುವಂತಹ ದಿನಗಳಲ್ಲಿ ಪಕ್ಷಕ್ಕೆ ಯಾವುದೇ ರೀತಿಯ ನಷ್ಟವಾಗದ ರೀತಿಯಲ್ಲಿ ನಾವು ನಡೆದುಕೊಳ್ಳಬೇಕಿದೆ. ಶಾಸಕ ಬಸನಗೌಡ ಯತ್ನಾಳ ಅವರ ವಿಷಯದ ಬಗ್ಗೆ ವರಿಷ್ಠರ ಜೊತೆ ಚರ್ಚಿಸಿ ಮಾತನಾಡುತ್ತೇನೆ ಎಂದು ಹೇಳಿದರು.

ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಎರಡು ಬಾರಿ ನೊಟೀಸ್ ಕೊಟ್ಟಿದ್ದರು. ಅವರು ಅದಕ್ಕೆ ಉತ್ತರ ಕೊಟ್ಟಿದ್ದರು. ಆದರೆ, ಅವರು ಏನು ಉತ್ತರ ಕೊಟ್ಟಿದ್ದರು ಎಂದು ಗೊತ್ತಿಲ್ಲ. ಯಾವ ಕಾರಣಕ್ಕಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಕೊಳ್ಳುತ್ತೇನೆ. ಇಂತಹ ಕಾಲದಲ್ಲಿ ಒಕ್ಕಟ್ಟಾಗಿ ಹೋಗುವ ಅವಶ್ಯಕತೆ ಇದೆ ಎಂದರು.

ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಭೇಟಿ ಮಾಡಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ ಯತ್ನಾಳ್ ಅವರು ಅವರ ಸಕ್ಕರೆ ಕಾರ್ಖಾನೆ ಉದ್ಘಾಟನೆಗೆ ಆಹ್ವಾನ ನೀಡಿದ್ದರು. ಆ ಮೇಲೆ ಭೇಟಿಯಾಗಿಲ್ಲ ಎಂದರು.

ಪಕ್ಷದಲ್ಲಿ ಇನ್ನಷ್ಟು ಜನರಿಗೆ ನೊಟೀಸ್ ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಉಳಿದವರಿಗೂ ನೊಟೀಸ್ ಕೊಟ್ಟಿದ್ದು, ಅವರು ಏನು ಉತ್ತರ ಕೊಡುತ್ತಾರೆ ಎನ್ನುವುದರ ಮೇಲೆ ಶಿಸ್ತು ಸಮಿತಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತದೆ. ಪಕ್ಷದ ಶಿಸ್ತು ಸಮಿತಿಗೆ ತನ್ನದೇ ಆದ ನಿಯಮಗಳಿವೆ ಎಂದು ಹೇಳಿದರು.

 

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.
Whats_app_banner