ಕನ್ನಡ ಸುದ್ದಿ  /  Karnataka  /  Karnataka News Former Cm Basavaraj Bommai Slams Minister K Venkatesh Over Cow Slaughter Remark Mgb

Cow Slaughter: ಎಮ್ಮೆ, ಕೋಣ ಕಡಿಯೋದಾದ್ರೆ ಹಸುವನ್ನ ಯಾಕೆ ಕಡಿಬಾರ್ದು ಎಂದ ಸಚಿವ ವೆಂಕಟೇಶ್​ಗೆ ಬೊಮ್ಮಾಯಿ ತಿರುಗೇಟು

Minister K Venkatesh Remark: ನಿನ್ನೆ (ಜೂನ್​ 3, ಶನಿವಾರ) ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್, ಎಮ್ಮೆ, ಕೋಣ ಕಡಿಯೋದಾದ್ರೆ ಹಸುವನ್ನ ಯಾಕೆ ಕಡಿಬಾರ್ದು ಎಂದು ಪ್ರಶ್ನಿಸಿದ್ದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಗೋವುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಗೋವಿನೊಂದಿಗೆ ಭಾರತೀಯರಾದ ನಾವು ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿ ಗೋವನ್ನು ಪೂಜಿಸುತ್ತೇವೆ. ಸಚಿವ ಕೆ. ವೆಂಕಟೇಶ್ ಅವರು ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ, ತಮಗೆ ನೀಡಿರುವ ಖಾತೆಯನ್ನು ಬದಲಾಯಿಸಲಿ ಎಂದೋ ಅಥವಾ ಹೈ ಕಮಾಂಡ್ ಮೆಚ್ಚಿಸಲೊ ಎಂದು ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಗೋಹತ್ಯೆ ನಿಷೇಧವನ್ನು ಮೊದಲು ಪ್ರತಿಪಾದಿಸಿದ್ದು ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿ. ಅವರು ಪ್ರತಿಪಾದಿಸಿದ ಗೋಹತ್ಯೆ ನಿಷೇಧವನ್ನು 1960 ರ ದಶಕದಲ್ಲಿ ಹಲವಾರು ರಾಜ್ಯಗಳಲ್ಲಿ ಕಾನೂನು ತರಲಾಗಿದೆ. ಸಚಿವರ ಹೇಳಿಕೆಯಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗೋವುಗಳ ಕಳ್ಳ ಸಾಗಾಣಿಕೆ, ಸಾಮೂಹಿಕ ಗೋ ಹತ್ಯೆ ಮಾಡುವ ಕಾನೂನು ಬಾಹಿರ ಕಾರ್ಖಾನೆಗಳು ತಲೆ ಎತ್ತಲಿವೆ. ನಮ್ಮ ಸರ್ಕಾರದ ಅವಧಿಯಲ್ಲಿ ಕಾನೂನು ಬಾಹಿರ ಕಸಾಯಿ ಖಾನೆಗಳನ್ನು ತಡೆಗಟ್ಟಲು ಕಾನೂನು ತರಲಾಗಿದೆ. ಕರ್ನಾಟಕದಲ್ಲಿ ಹೊಸ ಕಾಯಿದೆ ತಂದಿಲ್ಲ. ಇರುವ ಕಾನೂನಿಗೆ ಬಲ ತುಂಬಿದ್ದೇವೆ‌ ಎಂದು ತಿಳಿಸಿದ್ದಾರೆ.

ಈ ರೀತಿಯ ಹೇಳಿಕೆ ನೀಡುವ ಮೊದಲು ಸಚಿವರು ಆಲೋಚನೆ ಮಾಡಬೇಕು. ಈ ಬಗ್ಗೆ ಸಿಎಂ ಸಚಿವರಿಗೆ ಸೂಕ್ತ ಸಲಹೆ ನೀಡುವುದು ಅವಶ್ಯಕತೆ ಇದೆ ಎಂದು ಬಸವರಾಜ ಬೊಮ್ಮಾಯಿ ಟ್ವೀಟ್​ ಮಾಡಿದ್ದಾರೆ.

ವರದಿ: ಎಚ್​ ಮಾರುತಿ

ಸಚಿವ ವೆಂಕಟೇಶ್ ಹೇಳಿಕೆ

ನಿನ್ನೆ (ಜೂನ್​ 3, ಶನಿವಾರ) ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್, ಎಮ್ಮೆ, ಕೋಣ ಕಡಿಯೋದಾದ್ರೆ ಹಸುವನ್ನ ಯಾಕೆ ಕಡಿಬಾರ್ದು ಎಂದು ಪ್ರಶ್ನಿಸಿದ್ದರು. ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ. ಹಾಗೆಯೇ ಗೋಶಾಲೆಗಳನ್ನು ನಿರ್ವಹಣೆ ಮಾಡಲು ಹಣದ ಕೊರತೆಯಿಲ್ಲ ಎಂದು ಹೇಳಿದ್ದರು.

ಸರ್ಕಾರ ಏನು ತೀರ್ಮಾನ ಮಾಡುತ್ತದೆ ಕಾದು ನೋಡೋಣ: ಡಿಕೆ ಸುರೇಶ್​

ಗೋ ಹತ್ಯೆ ನಿಷೇಧ ಕಾಯ್ದೆ ರದ್ದು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಸರ್ಕಾರ ಏನು ತೀರ್ಮಾನ ಮಾಡುತ್ತದೆ ಎಂದು ಕಾದು ನೋಡೋಣ. ರೈತರಿಗೆ ಅನುಪಯುಕ್ತವಾದ ಜಾನುವಾರುಗಳನ್ನು ಹಿಂದಿನಿಂದಲೂ ಬೇರೆ ಬೇರೆ ಕೆಲಸಕ್ಕೆ ಬಳಸುತ್ತಿದ್ದಾರೆ. ಈ ಬಗ್ಗೆ ವ್ಯಾಪಕ ಚರ್ಚೆ ಆಗಬೇಕು. ರೈತರ ದೃಷ್ಟಿಯಿಂದ ಮತ್ತು ಸಂಸ್ಕೃತಿ‌ ದೃಷ್ಟಿಯಿಂದ ಏನು ಮಾಡಬೇಕು ಎಂದು ಚರ್ಚೆ ಮಾಡಬೇಕಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.