ಸಿದ್ದರಾಮಯ್ಯ ಘೋಷಣೆ: ಮುಡಾ ವಿಚಾರದಲ್ಲಿ ತಪ್ಪು ಮಾಡಿಲ್ಲ, ಬಿಜೆಪಿ- ಜೆಡಿಎಸ್ ಬೆದರಿಕೆಗಳಿಗೆ ಬಗ್ಗೋಲ್ಲ, ಜಗ್ಗಲ್ಲ
CM Siddaramaiah ಮೈಸೂರಿನಲ್ಲಿ ಶುಕ್ರವಾರ ನಡೆದ ಜನಾಂದೋಲನ ಸಮಾವೇಶದಲ್ಲಿ ಸಿದ್ದರಾಮಯ್ಯ ನೀಡಿದ ಉತ್ತರ ಏನು.. ಇಲ್ಲಿದೆ ವಿವರ
ಮೈಸೂರು: ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಹಗರಣ ನಡೆದಿರುವುದು ನಿಜ. ಹಣ ಜಪ್ತಿ ಕೂಡ ಆಗಿದೆ. ಇದರಲ್ಲಿ ಹಣಕಾಸು ಇಲಾಖೆ ಪಾತ್ರವಿಲ್ಲ ಎನ್ನುವುದೂ ಸ್ಪಷ್ಟವಾಗಿದೆ. ಮತ್ತೊಂದು ಕಡೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನನ್ನ ಪತ್ನಿ ಹೆಸರಲ್ಲಿ ನಿವೇಶನ ಪಡೆದಿರುವುದು ಕಾನೂನುಬದ್ದವಾಗಿಯೇ ಇದೆ. ಇದರಲ್ಲಿ ಯಾವುದೇ ಹಗರಣ ನಡೆದಿಲ್ಲ. ಹೀಗಿದ್ದರೂ ಬಿಜೆಪಿ ಹಾಗೂ ಜೆಡಿಎಸ್ ಸೇರಿ ಮೈಸೂರು ಪಾದಯಾತ್ರೆ ನಡೆಸುವ ಮೂಲಕ, ಸದನದಲ್ಲಿ ನನ್ನ ವಿರುದ್ದ ಟೀಕಿಸುವ ಜತೆಗೆ ರಾಜ್ಯಪಾಲರ ಕಚೇರಿಯನ್ನು ದುರುಪಯೋಗಪಡಿಸಿಕೊಂಡು ನನ್ನ ವಿರುದ್ದ ರಾಜಕೀಯವಾಗಿ ಕಟ್ಟಿ ಹಾಕಲು ಪ್ರಯತ್ನಿಸುವುದಕ್ಕೆ ನಾನೂ ಹೆದರುವವನಲ್ಲ. ಅವರ ಬೆದರಿಕೆಗಳಿಗೆ ಬಗ್ಗುವುದೂ ಇಲ್ಲ, ಜಗ್ಗುವುದೂ ಇಲ್ಲ. ನಾಲ್ಕು ದಶಕಗಳ ಸ್ವಚ್ಛ ರಾಜಕಾರಣ ಮಾಡಿಕೊಂಡ ನಾನೇಕೆ ಇವರ ಬೆದರಿಕೆಗಳಿಗೆ ಹೆದರಲಿ ಹೇಳಿ. ನಿಮ್ಮ ಬೆಂಬಲವೂ ನನಗೆ ಇರುವಾಗ ತಲೆ ಕಡೆಸಿಕೊಳ್ಳುವುದೂ ಇಲ್ಲ.
ಇದು ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಹಾಗೂ ಜೆಡಿಎಸ್ನ ರಾಜಕೀಯ ಹೇಳಿಕೆಗಳು, ಹೋರಾಟ ಹಾಗೂ ಮೈಸೂರು ಚಲೋ ಪಾದಯಾತ್ರೆಗೆ ನೀಡಿದ ಉತ್ತರ. ತವರಿನ ನೆಲ ಮೈಸೂರು ಮಹಾರಾಜ ಕಾಲೇಜು ಮೈದಾನಗಳಲ್ಲಿ ನಾಲ್ಕು ದಶಕಗಳ ಕಾಲ ಹಲವಾರು ಸಮಾವೇಶಗಳಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ. ಆದರೆ ಈ ಬಾರಿ ತಮ್ಮ ವಿರುದ್ದ ಕೇಳಿಬಂದಿರುವ ಗುರುತರ ಆರೋಪಗಳ ವಿರುದ್ದ, ತಮ್ಮ ರಾಜಕೀಯ ಜೀವನದಲ್ಲಿ ಒಮ್ಮೆಯೂ ಹಗರಣದ ಪ್ರಸ್ತಾಪವೇ ಆಗದಿರುವಾಗ ಮೊದಲ ಬಾರಿ ಭಿನ್ನ ರೀತಿಯಲ್ಲಿತ್ತು ಈ ಸಮಾವೇಶ. ಇಲ್ಲಿ ತಮ್ಮ ವಿರುದ್ದ ಕೇಳಿ ಬಂದ ಆರೋಪಕ್ಕೆ ಉತ್ತರ ನೀಡುತ್ತಲೇ ಪಕ್ಷದ ಬೆಂಬಲ, ಕ್ಷೇತ್ರದವರು, ಜಿಲ್ಲೆಯವರ ಬೆಂಬಲ, ಅಭಿಪ್ರಾಯ ಆಲಿಸುವುದಕ್ಕೂ ಮಹಾರಾಜ ಕಾಲೇಜು ಮೈದಾನ ವೇದಿಕೆಯೂ ಆಯಿತು. ಭಾವನಾತ್ಮಕವಾಗಿಯೇ ಸಿದ್ದರಾಮಯ್ಯ ನಲವತ್ತು ನಿಮಿಷ ಮಾತನಾಡಿದರು.
ಸಿಎಂ ಸಿದ್ದರಾಮಯ್ಯ ಟೀಕಾಸ್ತ್ರ
- ನಾನು ಸೊನ್ನೆಯಿಂದ ರಾಜಕೀಯ ಪ್ರಾರಂಭಿಸಿದೆ. 1983 ರಲ್ಲಿ ಮೊದಲ ಚುನಾವಣೆಗೆ ಡೆಪಾಸಿಟ್ ಮಾಡಲು ನನ್ನ ಬಳಿ ಹಣ ಇರಲಿಲ್ಲ. ನನ್ನ ಕಚೇರಿ ಕ್ಲರ್ಕ್ ಆನಂದ 250ರೂ ಡೆಪಾಸಿಟ್ ಕಟ್ಟಿದರು. ಜನರೇ ಹಣ ಕೊಟ್ಟು ಚುನಾವಣೆ ಗೆಲ್ಲಿಸಿದರು. ಆ ಚುನಾವಣೆಯಲ್ಲಿ ಜನರೇ 63 ಸಾವಿರ ರೂಪಾಯಿ ಖರ್ಚು ಮಾಡಿ ನನ್ನನ್ನು ಆರಿಸಿದರು ಎಂದು ತಮ್ಮ ಸಚ್ಚಾರಿತ್ರ್ಯದ ಚರಿತ್ರೆಯನ್ನು ಬಿಚ್ಚಿಟ್ಟರು. ನನ್ನ ಒಂಬತ್ತು ಚುನಾವಣೆ ಗೆಲುವಲ್ಲೂ ಜನರೇ ಹಣ ಖರ್ಚು ಮಾಡಿ ನನ್ನನ್ನು ಗೆಲ್ಲಿಸಿದ್ದಾರೆ. ದಲಿತರು, ಶೋಷಿತರು, ಅಲ್ಪಸಂಖ್ಯಾತರ ಹಾಗೂ ಸಮಸ್ತ ಜನರ ಏಳಿಗೆಗಾಗಿ ಮಾತ್ರ ನನ್ನ ಅಧಿಕಾರ ಮುಡಿಪಾಗಿಟ್ಟಿದ್ದೇನೆ
- 15 ಬಜೆಟ್ ಮಂಡಿಸಿದವನು ನಾನು. ನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು. ಇಷ್ಟು ದಿನವಾದರೂ ನನಗೆ ಮೈಸೂರಲ್ಲಿ ಮನೆ ಇಲ್ಲ. ಈಗ ಕಟ್ಟಿಸುತ್ತಿದ್ದೇನೆ. ಹಿಂದಿದ್ದ ಮನೆ ಸಾಲ ತಗೊಂಡು ಕಟ್ಟಿಸಿದ್ದೆ. ಸಾಲ ತೀರಿಸಲಾಗದೆ ಆ ಮನೆ ಮಾರಿಬಿಟ್ಟೆ. ಬಾಡಿಗೆ ಮನೆಯಲ್ಲಿ ಇದ್ದುಕೊಂಡೇ ವಿಧಾನಸಭೆ, ಲೋಕಸಭೆ ಚುನಾವಣೆ ಮಾಡಿದೆ. ಈಗ ಕಟ್ಟುತ್ತಿರುವ ಮಬೆ ಬಿಟ್ಟು ನನ್ನ ಹೆಸರಲ್ಲಿ ಒಂದೇ ಒಂದು ಸೈಟು ಇದ್ದರೆ ತೋರಿಸಿ
- ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ ನನಗೆ ಹಣ ಮಾಡುವ ಆಸೆ ಬಂದಿಲ್ಲ, ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಲ್ಲ. ಎರಡು ಬಾರಿ ಸಿಎಂ ಆದರೂ ಪ್ರಮಾಣ ವಚನಕ್ಕೂ ಬರಲಿಲ್ಲ. ನಾವು ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ. ನಿಮ್ಮ ನಂಬಿಕೆಗೆ ದ್ರೋಹ ಎಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ.
- ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ತಪ್ಪು ಎಲ್ಲಿದೆ? ಮುಡಾದ ಯಾವ ಸದಸ್ಯರಿಗೂ ನಾನು ಕರೆ ಮಾಡಿಲ್ಲ, ಬೇಡಿಕೆ ಇಟ್ಟಿಲ್ಲ, ಶಿಫಾರಸ್ಸು ಮಾಡಿಲ್ಲ. ನಾನು ಯಾವುದಕ್ಕೂ ಸಹಿ ಹಾಕಿಲ್ಲ. ಹೀಗಿದ್ದಾಗ ಇದರಲ್ಲಿ ನನ್ನ ಪಾತ್ರ ಏನು ಹೇಳಿ? ನಾನು ತಪ್ಪು ಮಾಡಿದ್ದೀನಾ ಹೇಳಿ. ನಮ್ಮ ಜಮೀನು ಪಡೆದು ಸೈಟು, ಪಾರ್ಕು ಮಾಡಿ, ರಸ್ತೆ ಮಾಡಿ ಹಂಚಿಬಿಟ್ಟರು. ಇಲ್ಲಿ ತಪ್ಪು ಮಾಡಿರುವುದು ಮುಡಾವೇ ಹೊರತು ನಾನಲ್ಲ.
- ವಾಲ್ಮೀಕಿ ನಿಗಮದ ಪ್ರಕರಣದಲ್ಲೂ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿ ಸೋತರು. ದಾಖಲೆಗಳು ಸ್ಪಷ್ಟವಾಗಿವೆ. ಸರ್ಕಾರಕ್ಕೂ ನಿಗಮದ ಹಗರಣಕ್ಕೂ ಸಂಬಂಧ ಇಲ್ಲ ಎನ್ನುವುದು ದಾಖಲೆಗಳಲ್ಲಿದೆ. ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂದ ತಕ್ಷಣ ನಾವು SIT ರಚಿಸಿದೆವು. ತನಿಖೆ ನಡೆದು ಹಣ ವಾಪಾಸ್ ವಸೂಲಾಗಿದೆ. 50 ಕೋಟಿ ರೂಪಾಯಿಯನ್ನು SIT ರಿಕವರಿ ಮಾಡಿ ಆಗಿದೆ. 46 ಕೋಟಿ ಹಣ ಖಾಸಗಿ ಬ್ಯಾಂಕ್ ನಲ್ಲಿದ್ದು ಫ್ರೀಜ್ ಮಾಡಿದ್ದಾರೆ. ಇಷ್ಟು ಪರಿಣಾಮಕಾರಿಯಾಗಿ SIT ಯವರು ತನಿಖೆ ನಡೆಸಿದ್ದಾರೆ. ಆದರೂ ED ಯವರು ಸ್ವಯಂಸ್ಫೂರ್ತಿಯಿಂದ ಕೇಸು ದಾಖಲಿಸಿಕೊಂಡು ತನಿಖೆ ನಡೆಸಿದರೂ ಸರ್ಕಾರದ ವಿರುದ್ಧ ಏನೂ ದಾಖಲೆ ಸಿಗಲಿಲ್ಲ. ಹೀಗಾಗಿ ಹಗರಣವೇ ಅಲ್ಲದ ಮೂಡಾ ಪ್ರಕರಣಕ್ಕೆ ಹಗರಣದ ಬಣ್ಣ ಕೊಟ್ಟರು.
- ಈಗ ರಾಜಭವನವನ್ನು ದುರುಪಯೋಗಪಡಿಸಿಕೊಂಡು ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ಈ ಷಡ್ಯಂತ್ರದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಯಡಿಯೂರಪ್ಪ, ವಿಜಯೇಂದ್ರ, ಆರ್.ಅಶೋಕ್ ಸೇರಿದ್ದಾರೆ. ಕುಮಾರಸ್ವಾಮಿ ವಿರುದ್ಧ, ನಿರಾಣಿ ವಿರುದ್ಧ, ಶಶಿಕಲಾ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದರೂ ರಾಜಭವನದಿಂದ ಇದುವರೆಗೂ ನೋಟಿಸ್ ಹೋಗಿಲ್ಲ. ಆದರೆ ನನಗೆ ಮಾತ್ರ ನೋಟಿಸ್ ಬಂದಿದೆ. ಇದು ಪರಮ ದ್ರೋಹ ಅಲ್ಲವೇ
- ನನ್ನದೊಂದು ಪತ್ರ ಇಲ್ಲ, ನನ್ನದೊಂದು ಸಹಿ ಇಲ್ಲ, ಆಗ ನಮ್ಮ ಸರ್ಕಾರ ಅಧಿಕಾರದಲ್ಲೂ ಇರಲಿಲ್ಲ. ಆದರೂ ಹಗರಣ, ಹಗರಣ ಎಂದು ಬೊಬ್ಬೆ ಹಾಕುತ್ತಾ ಸುಳ್ಳು ಆರೋಪ ಹೊರಿಸುತ್ತಿದ್ದಾರೆ. ಇದಕ್ಕೆ ನೀವ್ಯಾರೂ ಸೊಪ್ಪು ಹಾಕಬೇಡಿ, ನಂಬಬೇಡಿ
- ಹಿಂದೆ ದೇವರಾಜ ಅರಸು, ಬಂಗಾರಪ್ಪ, ಮೊಯ್ಲಿ ಅವರನ್ನೂ ಇವರು ಸಹಿಸಲಿಲ್ಲ. ಈಗ ನನ್ನನ್ನೂ ಸಹಿಸುತ್ತಿಲ್ಲ. ಜೆಡಿಎಸ್ ನ ದೇವೇಗೌಡರು ಮತ್ತು ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಳ್ಳುವವರಲ್ಲ. ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ ನನ್ನ ಶವದ ಮೇಲೆ ನಡೆಸಬೇಕು ಎಂದು ದೇವೇಗೌಡರು ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದ ದೇವೇಗೌಡರೇ ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ.
- ಬಿಜೆಪಿ, ಜೆಡಿಎಸ್ ಅಧಿಕಾರಿದಲ್ಲಿ ಇದ್ದಾಗ ನಡೆಸಿದ್ದು ಒಂದಾ, ಎರಡಾ ಹಗರಣಗಳು. ಸುಪ್ರೀಕೋರ್ಟ್ ನಲ್ಲಿ ತಮ್ಮ ಹಗರಣಗಳಿಗೆ ತಡೆಯಾಜ್ಞೆ ತಂದಿದ್ದಾರೆ. ಇವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇವರಿಗೆ ನಾಚಿಕೆ ಆಗಲ್ವಾ. ಯಡಿಯೂರಪ್ಪ ಅವರು ಚೆಕ್ ನಲ್ಲಿ ಲಂಚ ಪಡೆದು ಜೈಲಿಗೆ ಹೋದರು. ಆರ್.ಅಶೋಕ್, ವಿಜಯೇಂದ್ರ ಇವರೆಲ್ಲರೂ ಜೈಲಿಗೆ ಹೋಗಬೇಕಾದವರು. ಇವರಿಗೆ ನನ್ನ ಬಗ್ಗೆ ಮಾತನಾಡುವ ಯಾವ ಯೋಗ್ಯತೆ ಇದೆ
- ಬಿಜೆಪಿ, ಜೆಡಿಎಸ್ ಒಟ್ಟಾಗಿ ಎಷ್ಟೇ ಪಾದಯಾತ್ರೆ ನಡೆಸಿದರೂ ನಾನು ಜಗ್ಗಲ್ಲ, ಬಗ್ಗಲ್ಲ. ಹಿಂದುಳಿದ ವರ್ಗಗಳಲ್ಲಿ ದೇವರಾಜ ಅರಸು ಬಿಟ್ಟರೆ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸಿದ್ದು ನಾನು ಮಾತ್ರ. ಇದನ್ನು ಬಿಜೆಪಿ, ಜೆಡಿಎಸ್ ಸಹಿಸುತ್ತಿಲ್ಲ. ಆದರೆ ಎಲ್ಲಿಯವರೆಗೂ ಸೇನಾನಿಗಳಾದ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಯಾವ ಪಾದಯಾತ್ರೆಗಳೂ ಅಳುಗಾಡಿಸಲು ಸಾಧ್ಯವಿಲ್ಲ.