ಯಲ್ಲಾಪುರ ಅಪಘಾತ: ನರೇಂದ್ರ ಮೋದಿ, ಅಮಿತ್‌ ಶಾ ಸಂತಾಪ, ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ ಪರಿಹಾರ ಘೋಷಣೆ
ಕನ್ನಡ ಸುದ್ದಿ  /  ಕರ್ನಾಟಕ  /  ಯಲ್ಲಾಪುರ ಅಪಘಾತ: ನರೇಂದ್ರ ಮೋದಿ, ಅಮಿತ್‌ ಶಾ ಸಂತಾಪ, ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ ಪರಿಹಾರ ಘೋಷಣೆ

ಯಲ್ಲಾಪುರ ಅಪಘಾತ: ನರೇಂದ್ರ ಮೋದಿ, ಅಮಿತ್‌ ಶಾ ಸಂತಾಪ, ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ ಪರಿಹಾರ ಘೋಷಣೆ

ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದ ಭೀಕರ ಅಪಘಾತದಲ್ಲಿ 10 ಜನರು ಮೃತಪಟ್ಟು, 15 ಜನರು ಗಾಯಗೊಂಡ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಪರಿಹಾರ ನಿಧಿಯಿಂದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ (PMO)

ಬೆಂಗಳೂರು: ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದ ಭೀಕರ ಅಪಘಾತದಲ್ಲಿ 10 ಜನರು ಮೃತಪಟ್ಟು, 15 ಜನರು ಗಾಯಗೊಂಡ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಪರಿಹಾರ ನಿಧಿಯಿಂದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಇದೇ ಸಮಯದಲ್ಲಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ.

"ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಹಲವು ಜನರು ಮೃತಪಟ್ಟ ಘಟನೆ ಕೇಳಿ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಆಶಿಸುತ್ತೇನೆ. ಈ ಘಟನೆಯ ಕುರಿತು ಸ್ಥಳೀಯ ಆಡಳಿತವು ಕ್ರಮಕೈಗೊಳ್ಳುತ್ತಿದೆ. ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ನಿಧಿಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು" ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದಾರೆ.

ಅಮಿತ್‌ ಶಾ ಸಂತಾಪ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದ ಅಪಘಾತಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಅಮಿತ್‌ ಶಾ ಕೂಡ ಸಂತಾಪ ಸೂಚಿಸಿದ್ದಾರೆ. ಇವರು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ. "ಉತ್ತರ ಕನ್ನಡದ ಯಲ್ಲಾಪುರದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅಮೂಲ್ಯ ಜೀವಗಳು ಬಲಿಯಾಗಿದ್ದು, ಘಟನೆಯಿಂದ ಬಹಳ ದುಃಖವಾಗಿದೆ. ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪಗಳು ಹಾಗೂ ಈ ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಅಮಿತ್‌ ಶಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಕರ್ನಾಟಕ ಸರಕಾರದಿಂದ 3 ಲಕ್ಷ ರೂಪಾಯಿ ಪರಿಹಾರ ಘೋಷಣೆ

ಕರ್ನಾಟಕ ಸರಕಾರವು ಈಗಾಗಲೇ ಅಪಘಾತದಲ್ಲಿ ಮೃತಪಟ್ಟವರಿಗೆ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. "ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು" ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.

ಯಲ್ಲಾಪುರ ಮತ್ತು ಸಿಂಧನೂರಿನಲ್ಲಿ ಎರಡು ಪ್ರತ್ಯೇಕ ಅಪಘಾತ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನರು ಮೃತಪಟ್ಟಿದ್ದಾರೆ. ಕುಮಟಾ ಸಂತೆಗೆ ವ್ಯಾಪಾರಕ್ಕೆ ಹೋಗುತ್ತಿದ್ದ ವೇಳೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಅಪಘಾತ ಸಂಭವಿಸಿದೆ. ಈ ಲಾರಿಯಲ್ಲಿ ಸವಣೂರು ತಾಲೂಕಿನ 28 ವ್ಯಾಪಾರಿಗಳು ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು. 8 ಜನ ಸ್ಥಳದಲ್ಲೇ ಮೃತಪಟ್ಟಿದ್ದರು. ಇನ್ನಿಬ್ಬರು ನಂತರ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ರಾಯಚೂರು ಜಿಲ್ಲೆ ಸಿಂಧನೂರು ಸಮೀಪ ಅರಗಿನಮರ ಕ್ಯಾಂಪ್ ಬಳಿ ಮಂಗಳವಾರ (ಜನವರಿ 21) ತಡರಾತ್ರಿ ಕ್ರೂಸರ್ ವ್ಯಾನ್‌ ಪಲ್ಪಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಚಾಲಕ ಮತ್ತು ಮೂವರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾದರು. ಮೃತರನ್ನು ಕ್ರೂಸರ್ ಚಾಲಕ ಕಂಸಾಲಿ ಶಿವ (24), ಮಂತ್ರಾಲಯದ ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳಾದ ಹಯವದನ (18), ಸುಜಯೇಂದ್ರ (22) ಹಾಗೂ ಅಭಿಲಾಷ್​(20) ಎಂದು ಗುರುತಿಸಲಾಗಿದೆ.

Whats_app_banner