Karnataka Weather: ರಾಜಧಾನಿ ಬೆಂಗಳೂರು, ಸುತ್ತಮುತ್ತ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ; ಹಲವೆಡೆ ಮಂಜು ಮುಂದುವರಿಕೆ
ಜನವರಿ 13ರ ಸೋಮವಾರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಜನವರಿ 12ರ ಇಂದಿನ ಹವಾಮಾನ ವರದಿ ಇಲ್ಲಿದೆ.

ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಕಳೆದ ಎರಡ್ಮೂರು ದಿನಗಳಿಂದ ಮೋಡ ಕವಿದ ವಾತಾವರಣ ಇದ್ದು, ಇಂದು (ಜನವರಿ 12, ಭಾನುವಾರ) ಕೂಡ ಇದೇ ಪರಿಸ್ಥಿತಿ ಮುಂದುವರಿದೆ. ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡದ ಪರಿಸ್ಥಿತಿ ಇದೆ. ಇದರ ಜೊತೆಗೆ ಅಲ್ಲಲ್ಲಿ ಮಂಜಿನ ವಾತಾವಣವೂ ಮುಂದುವರಿದಿದೆ. ಆದರೆ ಮೋಡ ಕವಿದ ವಾತಾವರಣದಿಂದಾಗಿ ಕೊರೆಯುವ ಚಳಿ ಕಡಿಮೆಯಾಗಿದೆ. ನಿನ್ನೆ (ಜನವರಿ 11, ಶನಿವಾರ) ಕರ್ನಾಟಕದ ಯಾವುದೇ ಭಾಗದಲ್ಲಿ ಮಳೆಯಾಗಿಲ್ಲ. ಒಣ ಹವೆ ಮುಂದುವರಿದಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಮಾಹಿತಿ ನೀಡಿದೆ.
ರಾಜ್ಯದಾದ್ಯಂತ ಇಂದು (ಜನವರಿ 12, ಭಾನುವಾರ) ಒಣ ಹವೆ ಇರುವ ಸಾಧ್ಯತೆ ಇದೆ. ವಿಜಯಪುರ, ಬೀದರ್, ಕಲಬುರ್ಗಿ, ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಆಳದಿಂದ ಸಾಧಾರಣ ಮಂಜಿನ ವಾತಾವರ ಇರಲಿದೆ. ಮೈಸೂರು ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮಂಜಿನ ಸಾಧ್ಯತೆ ಇರುತ್ತೆ ಎಂದು ಹವಾಮಾನ ಕೇಂದ್ರ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ.
ಕರ್ನಾಟಕದ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಅತಿ ಗಮನಾರ್ಹವಾಗಿ ಹೆಚ್ಚಳವಾಗಿದೆ. ಅಂದರೆ 5.1 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಾಗಿದೆ. ಕಳೆದ 24 ಗಂಟೆಗಳ ಹವಾಮಾನ ವರದಿಯ ಪ್ರಕಾರ, ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತಿ ಕಡಿಮೆ ಉಷ್ಣಾಂಶ 14.4 ಡಿಗ್ರಿ ಸೆಲ್ಸಿಯಸ್ ಧಾರವಾಡದಲ್ಲಿ ದಾಖಲಾಗಿದೆ.
ನಾಳೆ ಈ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ
ಜನವರಿ 13ರ ಸೋಮವಾರ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ಮಾಹಿತಿ ನೀಡಿದೆ. ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ವಿಜಯಪುರ, ಬೀದರ್, ಕಲಬುರ್ಗಿ, ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಂಜಿನ ವಾತಾವರಣ ಇರಲಿದೆ.
ಜನವರಿ 14ರ ಮಂಗಳವಾರವೂ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಹಳೆಯಾಗುವ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ಕೊಡಗು, ಹಾಸನ ಹಾಗೂ ತುಮಕೂರು ಜಿಲ್ಲೆಗಳ ಕೆಲವೊಂದು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬೆಳಗಿನ ಸಮಯದಲ್ಲಿ ಮಂಜು ಆನಂತರ ಒಣ ಹವೆ ಮುಂದುವರಿಯಲಿದೆ.
ಬೆಂಗಳೂರು ಹವಾಮಾನ
ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ವಾತಾವರಣವನ್ನು ಗಮನಿಸುವುದಾದರೆ, ಮುಂಜಾನೆ ಸಮಯದಲ್ಲಿ ಮೋಡ ಕವಿದ ವಾತಾವರಣ ಇರಲಿದೆ, ಕೆಲವು ಪ್ರದೇಶಗಳಲ್ಲಿ ಮಂಜಿನ ಪರಿಸ್ಥಿತಿ ಇರಲಿದೆ. ಗರಿಷ್ಠ 25 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 18 ಡಿಗ್ರಿ ಸಲ್ಸಿಯಸ್ ತಾಪಮಾನ ಇರುವ ನಿರೀಕ್ಷೆ ಇದೆ.
