ಕರ್ನಾಟಕ ಹವಾಮಾನ ಜೂನ್ 25: ಉಡುಪಿ ಸೇರಿ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆ ನಿರೀಕ್ಷೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು ಇಂದು ಕೂಡ ಮಳೆಯ ಅಬ್ಬರ ಜೋರಾಗಿರಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದ್ದು ಒಟ್ಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಿಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಬೆಂಗಳೂರು: ಕಳೆದ ಬಾರಿಗೆ ಹೋಲಿಸಿದರೆ ಈ ವರ್ಷ ಮುಂಗಾರು ಮಳೆ ಬಿರುಸು ಪಡೆದುಕೊಂಡಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಜೂನ್ 25 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿರುವ ಮುನ್ಸೂಚನೆ ಇದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಯಾವುದೇ ಜಿಲ್ಲೆಗಳಿಗೆ ರೆಡ್ ಅಲರ್ಟ್ ಫೋಷಣೆಯಾಗಿಲ್ಲ. ದಕ್ಷಿಣ ಹಾಗೂ ಉತ್ತರ ಒಳನಾಡಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ ಭಾರತದ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ.
ಇಂದು ಎಲ್ಲೆಲ್ಲಿ ಯೆಲ್ಲೋ ಅಲರ್ಟ್
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಭಾಗದಲ್ಲಿ ಕಳೆದೊಂದು ವಾರದಿಂದ ಭಾರಿ ಮಳೆಯಾಗುತ್ತಿದ್ದು, ಇಂದು ಕೂಡ ಮಳೆರಾಯ ತನ್ನ ಅಬ್ಬರ ತೋರಲಿದ್ದಾರೆ. ಇದರೊಂದಿಗೆ ದಕ್ಷಿಣ ಒಳನಾಡಿನ ಮಲೆನಾಡು ಭಾಗಗಳಾದ ಶಿವಮೊಗ್ಗ, ಕೊಡಗು, ಹಾಸನ, ದಾವಣಗೆರೆ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಈ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ ಬೀದರ್, ಧಾರಾವಾಡ, ಗದಗ, ಕಲಬುರಗಿ, ರಾಯಚೂರು, ಹಾವೇರಿ ಮುಂತಾದೆಡೆ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಮೈಸೂರು, ತುಮಕೂರಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಹವಾಮಾನ
ಬೆಂಗಳೂರಿನಲ್ಲಿ ಈ ಭಾರಿ ಮಳೆಯ ಪ್ರಮಾಣ ಕಡಿಮೆ ಇದೆ. ಅಲ್ಲಲ್ಲಿ ಮೋಡಗಳು ಚುದುರಿದಂತಿದ್ದರೂ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ. ಇಂದು ಕೂಡ ನಗರದಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ. ಕೆಲವಡೆ ಸಾಧಾರಣ ಮಳೆ ಬೀಳುವ ನಿರೀಕ್ಷೆ ಇದೆ.
ರಾಜ್ಯದ ಪ್ರಮುಖ ನಗರಗಳ ಹವಾಮಾನ
ಭಾರತೀಯ ಹವಾಮಾನ ಇಲಾಖೆಯ ದತ್ತಾಂಶದ ಪ್ರಕಾರ ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಜೂನ್ 23) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ಹವಾಮಾನದ ವಿವರ ಹೀಗಿದೆ.
ಬೆಂಗಳೂರು: ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಮಂಗಳೂರು: 23 ಡಿಗ್ರಿ ಸೆಲ್ಸಿಯಸ್
ಚಿತ್ರದುರ್ಗ - 22 ಡಿಗ್ರಿ ಸೆಲ್ಸಿಯಸ್
ಗದಗ - 23 ಡಿಗ್ರಿ ಸೆಲ್ಸಿಯಸ್
ಹೊನ್ನಾವರ - 23 ಡಿಗ್ರಿ ಸೆಲ್ಸಿಯಸ್
ಕಲಬುರಗಿ - 24 ಡಿಗ್ರಿ ಸೆಲ್ಸಿಯಸ್
ಬೆಳಗಾವಿ - 23 ಡಿಗ್ರಿ ಸೆಲ್ಸಿಯಸ್