ಕರ್ನಾಟಕ ಹವಾಮಾನ: ಬೆಂಗಳೂರು, ದಕ್ಷಿಣ ಕನ್ನಡ ಸೇರಿ 16 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ
ಬೆಂಗಳೂರು ಹಾಗೂ ಸುತ್ತಮುತ್ತಲಿನ ಕೆಲವು ಜಿಲ್ಲೆಗಳು ಸೇರಿದಂತೆ ರಾಜ್ಯದ 16 ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 20, ಭಾನುವಾರ) ಮಳೆಯಾಗುವ ಸಾಧ್ಯತೆ ಇದೆ. ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂಬುದರ ವರದಿ ಇಲ್ಲಿದೆ.

ಕರ್ನಾಟಕ ಹವಾಮಾನ: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಮಳೆಯಾಗುತ್ತಿದ್ದು, ಇಂದು (ಏಪ್ರಿಲ್ 20, ಭಾನುವಾರ) ಕೂಡ ಮಳೆಯಾಗುವ ಮುನ್ಸೂಚನೆ ಇದೆ. ಅಕಾಲಿಕ ಮಳೆ ಕೆಲವೆಡೆ ಜನ ಜೀವನದ ಮೇಲೆ ಪರಿಣಾಮ ಬೀರಿದೆ. ಅಲ್ಲದೆ ವಾಹನ ಸಂಚಾರಕ್ಕೂ ಅಡ್ಡಿಯುಂಟು ಮಾಡಿತು. ನಿನ್ನೆ ಕರ್ನಾಟಕದ ಎಲ್ಲೆಲ್ಲಿ ಮಳೆಯಾಗಿದೆ ಹಾಗೂ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ಇದೆ ಎಂಬುದರ ವರದಿಯನ್ನು ಇಲ್ಲಿ ನೀಡಲಾಗಿದೆ.
ಏಪ್ರಿಲ್ 19ರ ಶನಿವಾರ ಕರ್ನಾಟಕದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಿದೆ. ಧಾರವಾಡ ಜಿಲ್ಲೆಯ ಅಣ್ಣಿಗೆರೆಯಲ್ಲಿ 7 ಸೆಂಟಿ ಮೀಟರ್ ಮಳೆಯಾಗಿದೆ. ಉಳಿದಂತೆ ಬಾಗಲಕೋಟೆ ಜಿಲ್ಲೆಯ ಬಿಳಗಿಯಲ್ಲಿ 4, ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ 3, ರಾಯಚೂರು, ವಿಜಯಪುರ ಜಿಲ್ಲೆಯ ಆಲಮಟ್ಟಿ, ಚಿಕ್ಕಬಳ್ಳಾಪುರ, ವಿಜಯನಗರದ ಹರಪನಹಳ್ಳಿ, ತುಮಕೂರಿನ ಗುಬ್ಬಿ, ಕುಣಿಗಲ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ಮಂಡ್ಯ ಜಿಲ್ಲೆಯ ನಾಗಮಂಗಲ, ಬೀದರ್ ಜಿಲ್ಲೆಯ ಚಿಟಗುಪ್ಪದಲ್ಲಿ ತಲಾ 2 ಸೆಂಟಿ ಮೀಟರ್, ಕಲಬುರ್ಗಿಯ ಯೆಡ್ರಾಮಿ, ಚಿಂಚೋಳಿ, ಚಿತ್ತಾಪುರ, ಯಾದಗಿರಿ ಜಿಲ್ಲೆಯ ಸೈದಾಪುರ, ಬಾಗಲಕೋಟೆ ಜಿಲ್ಲೆ ಬಾದಾಮಿ, ಬೆಳಗಾವಿ ಜಿಲ್ಲೆಯ ಕಿತ್ತೂರು, ವಿಜಯಪುರ ಜಿಲ್ಲೆಯ ಬಾಗೇವಾಡಿ, ಚಾಮರಾಜನಗರ ಜಿಲ್ಲೆಯ ಎಂಎಂ ಹಿಲ್ಸ್, ಚಿಕ್ಕಮಗಳೂರಿನ ಅಜ್ಜಂಪುರ ಹಾಗೂ ಬೆಂಗಳೂರು ನಗರದ ಹೆಸರಘಟ್ಟದಲ್ಲಿ ತಲಾ 1 ಸೆಂಟಿ ಮೀಟರ್ ಮಳೆಯಾಗಿದೆ.
ಸತತವಾಗಿ ಮಳೆಯಾಗುತ್ತಿರುವ ಪರಿಣಾಮ ಬಿಸಿಯ ಪ್ರಮಾಣ ಕಡಿಮೆಯಾಗಿದೆ. ಅದರಲ್ಲೂ ದಕ್ಷಿಣ ಒಳನಾಡಿನ ಕೆಲವೊಂದು ಪ್ರದೇಶಗಳಲ್ಲಿ 4 ಡಿಗ್ರಿ ಸೆಲ್ಸಿಯಸ್ ನಿಂದ 2.1 ಡಿಗ್ರಿ ಸೆಲ್ಸಿಯಸ್ ಗೆ ತಾಪಮಾನ ಗಮನಾರ್ಹವಾಗಿ ಇಳಿಕೆಯಾಗಿದೆ. ರಾಜ್ಯದಲ್ಲಿ ಎಲ್ಲೂ ಕೂಡ ತಾಪಮಾನ ಏರಿಕೆಯಾಗಿರುವ ಬಗ್ಗೆ ವರದಿಯಾಗಿಲ್ಲ. ಬೆಂಗಳೂರು ಹವಾಮಾನ ಕೇಂದ್ರದ ಮಾಹಿತಿಯ ಪ್ರಕಾರ, ರಾಜ್ಯದ ಅತಿ ಹೆಚ್ಚು ಉಷ್ಣಾಂಶ 40.6 ಡಿಗ್ರಿ ಸೆಲ್ಸಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ.
ಇಂದು ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ ಇದೆ
ರಾಜ್ಯದ ಹಲವೆಡೆ ಇಂದು (ಏಪ್ರಿಲ್ 20, ಭಾನುವಾರ) ಮಳೆಯಾಗುವ ಮುನ್ಸೂಚನೆ ಇದೆ. ಕರ್ನಾಟಕದ ಕರಾವಳಿಯ ಪೈಕಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವಡೆ ಹಗುರದಿಂದ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಪೈಕಿ ಬೆಳಗಾವಿ, ಹಾವೇರಿ, ಗದಗ, ಧಾರವಾಡ ಹಾಗೂ ಬಾಗಲಕೋಟೆಯಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಇನ್ನ ದಕ್ಷಿಣ ಒಳನಾಡಿನ ಭಾಗದಲ್ಲಿ ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 5 ದಿನಗಳ ವರೆಗೆ ಅಂದರೆ ಏಪ್ರಿಲ್ 25ರ ಶುಕ್ರವಾರ ವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ವರದಿಯಾಗಿದೆ.
ರಾಜಧಾನಿ ಬೆಂಗಳೂರು ಹವಾಮಾನ ಹೇಗಿದೆ
ಸಿಲಿಕಾನ್ ಸಿಟಿ ಬೆಂಗಳೂರಿನ ಹವಾಮಾನ ವರದಿಯನ್ನು ನೋಡುವುದಾದರೆ ಮುಂದಿನ 24 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲ್ಲಿದ್ದು, ಗಾಳಿಯೊಂದಿಗೆ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.