ಕರ್ನಾಟಕ ಹವಾಮಾನ: ಇಂದು 9 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ; ಕಲಬುರ್ಗಿಯಲ್ಲಿ ಗರಿಷ್ಠ ಉಷ್ಣಾಂಶ ಮುಂದುವರಿಕೆ
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಸೇರಿದಂತೆ 9 ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 23, ಬುಧವಾರ) ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂಬುದರ ಹವಾಮಾನ ವರದಿ ಇಲ್ಲಿದೆ.

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದ್ದು, ಇಂದು (ಏಪ್ರಿಲ್ 23, ಬುಧವಾರ) ಕೂಡ ಮಳೆಯಾಗುವ ಮುನ್ಸೂಚನೆ ಇದೆ. ಸತತ ಮಳೆಯಾಗಿದ್ದಾಗಿ ಬಿಸಿ ಕೂಡ ಕಡಿಮೆಯಾಗುತ್ತಿದ್ದು, ಜನರು ನಿಟ್ಟುಸಿರು ಬಿಡುವಂತಾಗಿದೆ. ನಿನ್ನೆ (ಏಪ್ರಿಲ್ 22, ಮಂಗಳವಾರ) ಎಲ್ಲೆಲ್ಲಿ ಮಳೆಯಾಗಿತ್ತು ಹಾಗೂ ಇಂದು ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂಬುದನ್ನು ಇಲ್ಲಿ ವಿವರಿಸಲಾಗಿದೆ.
ಏಪ್ರಿಲ್ 22ರ ಮಂಗಳವಾರ ರಾಜ್ಯದ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಹಾಸನ ಜಿಲ್ಲೆಯ ಬೇಲೂರಿನಲ್ಲಿ 3 ಸೆಂಟಿ ಮೀಟರ್ ಮಳೆಯಾಗಿದೆ. ಉಳಿದಂತೆ ತುಮಕೂರು ಜಿಲ್ಲೆಯ ತಿಪಟೂರು 2, ದಕ್ಷಿಣ ಜಿಲ್ಲೆಯ ಬೆಳ್ತಂಗಡಿ, ಯಾದಗಿರಿ ಜಿಲ್ಲೆಯ ಕೆಂಭಾವಿ, ಧಾರವಾಡ ಹಾಗೂ ಕಲಬುರ್ಗಿ ಜಿಲ್ಲೆಯ ಯಡ್ರಾಮಿಯಲ್ಲಿ ತಲಾ 1 ಸೆಂಟಿ ಮೀಟರ್ ಮಳೆಯಾಗಿದೆ. ಮಳೆಯಾಗುತ್ತಿರುವ ಪ್ರದೇಶಗಳಲ್ಲಿ ಬಿಸಿಯ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಉಳಿದಂತೆ ರಾಜ್ಯಾದ್ಯಂತ ಒಣಹವೆ ಮುಂದುವರಿದಿದೆ. ರಾಜ್ಯದಲ್ಲಿ ಅತಿ ಹೆಚ್ಚು ಉಷ್ಣಾಂಶ 41.8 ಡಿಗ್ರಿ ಸೆಲ್ಸಿಯಸ್ ಕಲಬರ್ಗಿಯಲ್ಲಿ ದಾಖಲಾಗಿದೆ.
ಏಪ್ರಿಲ್ 23ರ ಬುಧವಾರ ಎಲ್ಲೆಲ್ಲಿ ಮಳೆಯ ಮುನ್ಸೂಚನೆ ಇದೆ
ಕರ್ನಾಟಕ ಕರಾವಳಿಯ ಪೈಕಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಪೈಕಿ ಬೆಳಗಾವಿ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 28ರ ಸೋಮವಾರದವರಿಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತನ್ನ ದೈನಂದಿನ ವರದಿಯಲ್ಲಿ ತಿಳಿಯಿಸಿದೆ.
ರಾಜಧಾನಿ ಬೆಂಗಳೂರು ಹವಾಮಾನ
ಮುಂದಿನ 24 ಗಂಟೆಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ಆಕಾಶ ಇರಲಿದೆ. ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.