ಕರಾವಳಿ ಜಿಲ್ಲೆಗಳು ಸೇರಿ ಕರ್ನಾಟಕದ ಹಲವು ಕಡೆ ಗುಡುಗು–ಮಿಂಚು ಸಹಿತ ಮಳೆ, ಬೆಂಗಳೂರಲ್ಲಿ ಹನಿಮಳೆ ಜತೆ ಚಳಿ ಜೋರು; ಡಿ.5ರ ಹವಾಮಾನ ವರದಿ
Karnataka Weather: ಫೆಂಗಲ್ ಚಂಡಮಾರುತದ ಪರಿಣಾಮ ಇನ್ನೂ ತಗ್ಗಿದಂತಿಲ್ಲ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು (ಡಿಸೆಂಬರ್ 5) ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇದರೊಂದಿಗೆ ಬೆಂಗಳೂರು ಸೇರಿದಂತೆ ಕೆಲವು ಕಡೆ ಚಳಿ ಪ್ರಭಾವವೂ ಜೋರಿರಲಿದೆ. ಯಾವೆಲ್ಲಾ ಜಿಲ್ಲೆಗಳಲ್ಲಿಂದು ಮಳೆಯಾಗಲಿದೆ ನೋಡಿ.
Karnataka Weather: ಸಾಮಾನ್ಯವಾಗಿ ಡಿಸೆಂಬರ್ ಎಂದರೆ ಚಳಿಗಾಲ. ಆದರೆ ಈ ಬಾರಿ ಇದು ಚಳಿಗಾಲವೋ ಮಳೆಗಾಲವೋ ಎಂಬ ಗೊಂದಲ ಮೂಡಿಸುವಂತಿದೆ ವಾತಾವರಣ. ಕಳೆದ ನಾಲ್ಕೈದು ದಿನಗಳಿಂದ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲಿ ಮಳೆ ಸುರಿಯುತ್ತಿದೆ. ಇದರೊಂದಿಗೆ ಚಳಿ ಪ್ರಭಾವವೂ ಜೋರಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತದ ಪರಿಣಾಮ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇನ್ನೂ ಎರಡು–ಮೂರು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಬಹುತೇಕ ಕಡೆ ಗುಡುಗು ಮಿಂಚು ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬೆಳೆ ಕಟಾವು ಮಾಡಲು ಬಂದಿರುವ ಈ ಸಂದರ್ಭದಲ್ಲಿ ಮಳೆ ಬೀಳುತ್ತಿದ್ದು ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಆಗುತ್ತಿದೆ. ಇದರಿಂದ ಚಳಿ, ಮಳೆಯ ವಾತಾವರಣವು ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗುತ್ತಿದೆ. ಈ ಸಂದರ್ಭದಲ್ಲಿ ಜನರು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ರಾಜ್ಯದಲ್ಲಿ ಎಂದು ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂಬ ವಿವರ ಇಲ್ಲಿದೆ.
ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಗುಡುಗು ಮಿಂಚು ಸಹಿತ ಹಗುರದಿಂದ/ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿನ್ನೆ (ಡಿಸೆಂಬರ್ 4) ಬಹುತೇಕ ಮೋಡ ಕವಿದ ವಾತಾವರಣವಿದ್ದು, ಮಳೆ ಕಡಿಮೆ ಇತ್ತು. ಕರಾವಳಿ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಕೊಂಚ ಕಡಿಮೆ ಇದೆ. ಫೆಂಗಲ್ ಚಂಡಮಾರುತದ ಪರಿಣಾಮ ಗಾಳಿಯ ಪ್ರಭಾವ ಜೋರಿದ್ದು, ಇನ್ನೂ ಎರಡು ದಿನಗಳ ಕಾಲ ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಉತ್ತರ ಒಳನಾಡಿನಲ್ಲಿ ಮಳೆ, ಒಣಹವೆ ಮುಂದುವರಿಕೆ
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಜೊತೆ ಚಳಿಯೂ ಜೋರರಲಿದೆ.
ದಕ್ಷಿಣ ಒಣನಾಡಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಬೆಂಗಳೂರಿನಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ. ಚಳಿಯಲ್ಲಿ ನಡುಗುತ್ತಿರುವ ಜನರಿಗೆ ಮಳೆ ಶಾಪವಾಗಿರುವುದು ಸುಳ್ಳಲ್ಲ. ಇದರೊಂದಿಗೆ ಬೆಂಗಳೂರಿನಲ್ಲಿ ದಾಖಲೆಯ ಮಳೆ ಸುರಿದಿದ್ದು, ಬಹುತೇಕ ಕಡೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳಲ್ಲಿ ನೀರು ತುಂಬಿಕೊಂಡು ಜನರು ಪರದಾಡುವಂತಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಇಂದು ಗುಡುಗು ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.