Karnataka Weather: ಕರ್ನಾಟಕದಲ್ಲಿ ಕಡಿಮೆಯಾದ ಚಳಿ, ಅಲ್ಲಲ್ಲಿ ಮಳೆ; ದಕ್ಷಿಣ ಕನ್ನಡದಲ್ಲಿ ಇಂದು ಕೂಡಾ ವರುಣಾಗಮನ
ಕರ್ನಾಟಕದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿದ್ದು, ಅಲ್ಲಲ್ಲಿ ಹಗುರ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನವರಿ 20ರ ಸೋಮವಾರವಾದ ಇಂದು ಕೂಡಾ ಮಳೆ ಬರುವ ಮುನ್ಸೂಚನೆ ಇದೆ.

ಬೆಂಗಳೂರು: ಕರ್ನಾಟಕದಲ್ಲಿ ಚಳಿಯ ಪ್ರಮಾಣ ತುಸು ಕಡಿಮೆಯಾಗಿದ್ದು, ಅಲ್ಲಲ್ಲಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಭಾನುವಾರ (ಜ.19) ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ಉದ್ಯಾನ ನಗರಿಯಲ್ಲಿ ಬೆಳ್ಳಂಬೆಳಗ್ಗೆಯೇ ಮಳೆಯ ಸಿಂಚನವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಸಂಜೆ ವೇಳೆ ವರುಣಾಗಮನವಾಗಿತ್ತು. ಇಂದು (ಜನವರಿ 20) ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಳನಾಡು ಮತು ಕರಾವಳಿ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿಒಣ ಹವಾಮಾನ ಇರುವ ಸಾಧ್ಯತೆ ಇದೆ. ಕರ್ನಾಟಕದ ಒಳಭಾಗದ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದಲ್ಲಿ ಮಂಜು ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಹವಾಮಾನ ಕೇಂದ್ರ ಮಾಹಿತಿ ನೀಡಿದೆ.
ಕರ್ನಾಟಕ ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಯಾಗಿಲ್ಲ. ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಂಭವವೂ ಇಲ್ಲ. ಹೀಗಾಗಿ ಮೀನುಗಾಗರರಿಗೆ ಎಚ್ಚರಿಕೆ ನೀಡಿಲ್ಲ. ಬೀದರ್, ಕಲಬುರಗಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಹೆಚ್ಚು ಚಳಿ ಇರಲಿದೆ. ಇದರ ಹೊರತಾಗಿ ಮುಂದಿನ 2 ದಿನಗಳಲ್ಲಿ ರಾಜ್ಯದಲ್ಲಿ ಯಾವುದೇ ಗಮನಾರ್ಹ ಬದಲಾವಣೆಯ ನಿರೀಕ್ಷೆ ಇಲ್ಲ.
ಮುಂದಿನ 5 ದಿನಗಳಲ್ಲಿ (ಜನವರಿ 25ರವರೆಗೆ) ಕರ್ನಾಟಕದ ಕರಾವಳಿ, ದಕ್ಷಿಣ ಒಳಭಾಗದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರದ ಜಿಲ್ಲೆಗಳಲ್ಲಿ ಶುಷ್ಕ ಗಾಳಿ ಇರಲಿದೆ.
ಬೆಂಗಳೂರು ಹವಾಮಾನ
ಬೆಂಗಳೂರು ನಗರದಲ್ಲಿ ಬಹುತೇಕ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಸಾಧಾರಣದಿಂದ ಹೆಚ್ಚು ಪ್ರಮಾಣದಲ್ಲಿ ಮಂಜು ಬೀಳುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನವು 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನವು 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಭಾನುವಾರ ನಗರದಲ್ಲಿ ಹಗುರ ಮಳೆಯಾಗಿದ್ದು, ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇಲ್ಲ. ಇದೇ ವೇಳೆ ಚಳಿ ಕೂಡಾ ದೊಡ್ಡ ಪ್ರಮಾಣದಲ್ಲಿ ಇರುವ ಸಾಧ್ಯತೆ ಇಲ್ಲ.
