ಕರ್ನಾಟಕದಲ್ಲಿ ವರುಣಾರ್ಭಟ, 6 ಜಿಲ್ಲೆಗಳಿಗೆ ರೆಡ್ ಅಲರ್ಟ್, ಇಂದು ಎಲ್ಲೆಲ್ಲಿ ಮಳೆ ಸುರಿಯಲಿದೆ; ಹವಾಮಾನ ವರದಿ
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಇಂದು (ಮೇ 26) ಕೂಡ ಮಳೆ ಜೋರಾಗಿರಲಿದ್ದು, ರೆಡ್ ಅಲರ್ಟ್ ಘೋಷಣೆಯಾಗಿದೆ. ಇಂದು ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎನ್ನುವ ವಿವರ ಇಲ್ಲಿದೆ.

ಬೆಂಗಳೂರು: ಕಳೆದೊಂದು ವಾರದಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಬಿಸಿಲಿನ ತಾಪದಿಂದ ಕಂಗೆಟ್ಟ ಜನರಿಗೆ ಮಳೆಯ ಸಿಂಚನ ಖುಷಿ ನೀಡಿತ್ತು. ಇದೀಗ ಚಂಡ ಮಾರುತ, ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಮುಂಗಾರು ಪ್ರವೇಶಕ್ಕೂ ಮುನ್ನ ಮಳೆ ಜೋರಾಗಿದೆ. ಕೆಲವಡೆ ಮಳೆ ಅತಿವೃಷ್ಟಿಯನ್ನೂ ಸೃಷ್ಟಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಅತಿಯಾದ ಮಳೆಯಿಂದಾಗಿ ಕೆಲವಡೆ ಅನಾಹುತಗಳು ಸೃಷ್ಟಿಯಾಗಿವೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಿರಂತರ ಮಳೆಯ ಜೊತೆ ಜೋರಾದ ಗಾಳಿಯೂ ಬೀಸುತ್ತಿದೆ. ಇದರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಇಂದು (ಮೇ 26) ಕೂಡ ಮಳೆ ಮುಂದುವರಿಯುವ ಸಾಧ್ಯತೆ ಇದ್ದು ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ ಬರುತ್ತೆ, ಬೆಂಗಳೂರಲ್ಲಿ ಮಳೆ ಇದ್ಯಾ ಎಂಬಿತ್ಯಾದಿ ಹವಾಮಾನ ವರದಿ ಇಲ್ಲಿದೆ.
ಕರಾವಳಿಯಲ್ಲಿ ಭಾರಿ ಮಳೆ
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಇಂದು ಭಾರಿ ಮಳೆಯಾಗಲಿದೆ. ಈ 3 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗವೂ ಹೆಚ್ಚರಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮೇ 31ರವರೆಗೆ ಜೋರಾಗಿ ಗಾಳಿ ಬೀಸಲಿದ್ದು, ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಅಲ್ಲಲ್ಲಿ ಮಳೆ
ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಗದಗ್, ವಿಜಯಪುರದಲ್ಲಿ ಮಳೆ ಜೋರಿರಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡದಲ್ಲೂ ಮಳೆ ಬೀಳುವ ಸಾಧ್ಯತೆ ಇದೆ. ಇದನ್ನು ಹೊರತು ಪಡಿಸಿ ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡಿ ಜಿಲ್ಲೆಗಳಲ್ಲೂ ಜೋರಾಗಿ ಗಾಳಿ ಬೀಸಲಿದೆ.
ದಕ್ಷಿಣ ಒಳನಾಡಿನ 3 ಜಿಲ್ಲೆಗಳಿಗೆ ರೆಡ್ ಅಲರ್ಟ್
ಕರಾವಳಿ ಜಿಲ್ಲೆಗಳಲ್ಲಿ ಮಾತ್ರವಲ್ಲ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಜೋರಾಗಿದೆ. ಈ ಜಿಲ್ಲೆಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಇಂದು ಕೂಡ ಮಳೆ ಮುಂದುವರಿಯಲಿದ್ದು ರೆಡ್ ಅಲರ್ಟ್ ಘೋಷಿಸಿದೆ ಕರ್ನಾಟಕ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ವರುಣಾರ್ಭಟ ಜೋರಿರಲಿದ್ದು, ಈ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನು ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು, ವಿಜಯನಗರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ಬೆಂಗಳೂರಿನಲ್ಲಿ ಮಳೆ ಇಲ್ಲ
ಇಂದಿನ ಹವಾಮಾನ ಇಲಾಖೆಯ ವರದಿಯ ಪ್ರಕಾರ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ. ಆದರೂ ಸಂಜೆ ವೇಳೆಗೆ ಮಳೆ ಸುರಿಯುವ ಸಾಧ್ಯತೆ ಇರುವ ಕಾರಣ ಮಳೆ, ರೈನ್‌ಕೋಟ್ ಹಿಡಿದು ಮನೆಯಿಂದ ಹೊರ ಹೋಗುವುದು ಉತ್ತಮ.