Karnataka Weather: ಬೆಂಗಳೂರಿನಲ್ಲಿ ತಗ್ಗಿದ ಚಳಿ, ನಿಧಾನವಾಗಿ ಏರುತ್ತಿರುವ ಬಿಸಿ; ಕರ್ನಾಟಕದ ಬಹುತೇಕ ಕಡೆ ಒಣ ಹವೆ ಮುಂದುವರಿಕೆ
ರಾಜ್ಯದ ಕೆಲವೆಡೆ ಚಳಿ ಕಡಿಮೆಯಾಗುತ್ತಿದೆ. ಬೆಳಗಾವಿಯಲ್ಲಿ ಕೊರೆಯುವ ಚಳಿ ಇದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಉಷ್ಣಾಂಶ 10.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೆಯುವ ಚಳಿ ಕಡಿಮೆಯಾಗುತ್ತಿದ್ದು, ನಿಧಾನವಾಗಿ ಬಿಸಿ ಏರುತ್ತಿದೆ. ಇಂದು (ಜನವರಿ 24, ಬುಧವಾರ) ಬಹುತೇಕ ಕಡೆಗಳಲ್ಲಿ ಮಂಜು ಮುಸುಕಿದ ವಾತಾವರಣ ಇಲ್ಲ. ಕರಾವಳಿ ಮತ್ತು ದಕ್ಷಿಣ ಒಳನಾಡಿಗಿಂತ ಉತ್ತರ ಒಳನಾಡಿನಲ್ಲಿ ಕೆಲವೊಂದು ಕಡೆಗಳಲ್ಲಿ ಚಳಿ ಪ್ರಭಾವ ಬೀರಿದೆ.
ಬೆಂಗಳೂರಿನ ಹವಾಮಾನ ಕೇಂದ್ರದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಎಲ್ಲಾ ಕಡೆ ಒಣಹವೆ ಮುಂದುವರಿದಿದೆ. ಭಾರಿ ಮಳೆ, ಗುಡುಗು ಮಿಂಚು ಯಾವುದೂ ಇಲ್ಲದಿರುವ ಕಾರಣ ಮೀನುಗಾರರಿಗೆ ಮುನ್ನಚ್ಚರಿಕೆ ಇರುವುದಿಲ್ಲ. ಎಂದಿನಂತೆ ಮೀನುಗಾರಿಕೆ ನಡೆಸಬಹುದು. ಮುಂದಿನ ಎರಡ್ಮೂರು ದಿನಗಳ ಕಾಲ ಇದೇ ವಾತಾವರಣ ಇರಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವೊಂದು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಾಗಿದೆ. ಅಂದರೆ 3.1 ಡಿಗ್ರಿ ಸೆಲ್ಸಿಯಸ್ನಿಂದ 5.0 ಡಿಗ್ರಿ ಸೆಲ್ಸಿಯಸ್ ವರೆಗೆ ಹೆಚ್ಚಳ ಕಂಡಿದೆ.
24 ಗಂಟೆಗಳಲ್ಲಿ ತಾಪಮಾನ ಹೆಚ್ಚಳದ ಮುನ್ಸೂಚನೆ
ರಾಜ್ಯದಲ್ಲಿ ಕಡಿಮೆ ಉಷ್ಣಾಂಶ ಬೆಳವಾಗಿ ವಿಮಾನ ನಿಲ್ದಾಣದಲ್ಲಿ 10.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಬಹುತೇಕ ಕಡೆಗಳಲ್ಲಿ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ಮಾಹಿತಿ ನೀಡಿದೆ.
ಬೆಂಗಳೂರು ಹವಾಮಾನ
ರಾಜ್ಯ ರಾಜಧಾನಿ ಬೆಂಗಳೂರಿನ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಇದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಕರ್ನಾಟಕದ ಕರಾವಳಿ ಪ್ರದೇಶಗಳಾಗಿವೆ. ಈ ಭಾಗವನ್ನು ಕೆನರಾ ಅಂತಲೂ ಕರೆಯಲಾಗುತ್ತದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿಗೆ ಬರುತ್ತವೆ. ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಇನ್ನೂ ಉತ್ತರ ಒಳನಾಡಿನ ವ್ಯಾಪ್ತಿಗೆ ಬರುತ್ತವೆ. ವಾರ್ಷಿಕ ಈ ಭಾಗದಲ್ಲಿ ಸರಾಸರಿ 711.5 ಮಿಲಿ ಮೀಟರ್ ಮಳೆಯಾಗುತ್ತದೆ.