Karnataka Weather: ಕರ್ನಾಟಕದ ಬಹುತೇಕ ಕಡೆ ಹೆಚ್ಚಿದ ಚಳಿ; ಕರಾವಳಿ, ಬೆಂಗಳೂರು, ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆಯ ಮುನ್ಸೂಚನೆ
ಕರ್ನಾಟಕದ ಕರಾವಳಿಯ ಕೆಲವು ಭಾಗಗಳು, ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೆಯುವ ಚಳಿ ಹೆಚ್ಚಾಗುತಲೇ ಇದ್ದು, ಮೈ-ಕೈ ನಡುಗಿಸುವಂತೆ ಮಾಡುತ್ತಿದೆ. ಚಳಿಯ ನಡುವೆಯೇ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇಂದು (ಜನವರಿ 7, ಭಾನುವಾರ) ಕೂಡ ಕರಾವಳಿಯ ಕೆಲವು ಭಾಗಗಳು, ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಶನಿವಾರ (ಜನವರಿ 6, ಶನಿವಾರ) ಬೆಳಗ್ಗೆ 8.30ಕ್ಕೆ ದಾಖಲಾಗಿರುವ ಮಾಹಿತಿಯ ಪ್ರಕಾರ, ಉತ್ತರ ಕನ್ನಡ ಜಿಲ್ಲೆಯ ಶಿರಾಲಿಯಲ್ಲಿ ಭಾರಿ ಮಳೆಯಾಗಿದೆ. ಬೆಂಗಳೂರು ಹವಾಮಾನ ಕೇಂದ್ರದ ದೈನಂದಿನ ಮಾಹಿತಿಯಂತೆ, ಶಿರಾಲಿಯಲ್ಲಿ 4 ಸೆಂಟಿ ಮೀಟರ್ ಮಳೆಯಾಗಿದೆ. ಉಳಿದಂತೆ ಹೊನ್ನಾವರ, ಕುಮಟಾದಲ್ಲಿ ತಲಾ 3, ಮಂಕಿ, ಗೋಕರ್ಣದಲ್ಲಿ (ಎರಡೂ ಉತ್ತರ ಕನ್ನಡ ಜಿಲ್ಲೆಗಳು) ದಕ್ಷಿಣ ಕನ್ನಡ ಜಿಲ್ಲೆಯ ಮಣಿಯಲ್ಲಿ ತಲಾ 1 ಸೆಂಟಿ ಮೀಟರ್ ಮಳೆಯಾಗಿದೆ.
ವಿಜಯಪುರದಲ್ಲಿ ಅತಿ ಕಡಿಮೆ ಉಷ್ಣಾಂಶ
ಕರಾವಳಿ, ಉತ್ತರ ಒಳನಾಡಿನ ಉಷ್ಣಾಂಶದಲ್ಲಿ ಹೆಚ್ಚಿನ ಬದಲಾವಣೆಗಳು ಆಗಿಲ್ಲ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಅತಿ ಗಮನಾರ್ಹವಾದ ಹೆಚ್ಚಳವಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತಿ ಕಡಿಮೆ 14.8 ಡಿಗ್ರಿ ಸೆಲ್ಸಿಯಸ್ ವಿಜಯಪುರದಲ್ಲಿ ದಾಖಲಾಗಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ನಾಳೆ (ಜನವರಿ 8, ಸೋಮವಾರ) ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಸಾಧಾರಣ ಮಳೆಯ ಮುನ್ಸೂಚನೆ ಇದೆ. ಆದರೆ ಭಾರಿ ಮಳೆ, ಗುಡುಗು ಮಿಂಚು ಯಾವುದೂ ಇಲ್ಲದಿರುವ ಕಾರಣ ಮೀನುಗಾರರಿಗೆ ಮುನ್ನಚ್ಚರಿಕೆ ಇರುವುದಿಲ್ಲ. ಎಂದಿನಂತೆ ಮೀನುಗಾರಿಕೆ ನಡೆಸಬಹುದು.
ಬೆಂಗಳೂರು ಹವಾಮಾನ
ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬೆಳಗಿನ ಜಾವ ಕೆಲವೆಡೆ ಮಂಜು ಮುಸುಕಿದ ವಾತಾವರಣ ಇದೆ. ಇದರ ನಡುವೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ನಗರದಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಕರ್ನಾಟಕದ ಕರಾವಳಿ ಪ್ರದೇಶಗಳಾಗಿವೆ. ಈ ಭಾಗವನ್ನು ಕೆನರಾ ಅಂತಲೂ ಕರೆಯಲಾಗುತ್ತದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿಗೆ ಬರುತ್ತವೆ. ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಇನ್ನೂ ಉತ್ತರ ಒಳನಾಡಿನ ವ್ಯಾಪ್ತಿಗೆ ಬರುತ್ತವೆ.
ವಿಭಾಗ