ಕರ್ನಾಟಕ ಹವಾಮಾನ ಮಾರ್ಚ್ 25: ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ 2 ಸೆಂಮೀ ಮಳೆ; ಕಲಬುರಗಿಯಲ್ಲಿ ಮುಂದುವರಿದ ಬಿಸಿ
Karnataka Weather: ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ 2 ಸೆಂಟಿ ಮೀಟರ್ ಮಳೆಯಾಗಿದೆ. ಬೆಳಗಾವಿಯ ಲೋಂಡಾದಲ್ಲೂ ವರುಣನ ಸಿಂಚನವಾಗಿದೆ. ಉಳಿದಂತೆ ರಾಜ್ಯದಲ್ಲಿ ಒಣಹವೆ ಮುಂದುವರಿದಿದೆ.
ಬೆಂಗಳೂರು: ಕರ್ನಾಟಕದಾದ್ಯಂತ (Karnataka Weather) ಬಿಸಿಯ ಝಳಕ್ಕೆ ಜನರು ತತ್ತರಿಸಿರುವ ನಡುವೆಯೇ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ವರುಣನ ಸಿಂಚನವಾಗಿದೆ. ಬಾಳೆಹೊನ್ನೂರಿನಲ್ಲಿ 2 ಸೆಂಟಿ ಮೀಟರ್ ಮಳೆಯಾಗಿದೆ. ಇತ್ತ ಬೆಳಗಾವಿಯ ಲೋಂಡಾದಲ್ಲಿ ಮಳೆ ಸುರಿದಿದೆ. ಉಳಿದಂತೆ ರಾಜ್ಯದಲ್ಲಿ ಒಣ ಹವೆ ಮುಂದುವರಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಮಾಹಿತಿ ನೀಡಿದೆ. ಭಾನುವಾರ (ಮಾರ್ಚ್ 24) ಬೆಳಗಿನ ವರೆಗೆ ದಾಖಲಾಗಿರುವ ಮಾಹಿತಿಯ ಪ್ರಕಾರ ಚಿಕ್ಕಮಗಳೂರು ಹಾಗೂ ಬೆಳಗಾವಿಯ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಲೋಂಡಾದಲ್ಲಿ 1 ಸೆಂಟಿ ಮೀಟರ್ ಮಳೆಯಾಗಿರುವ ವರದಿಯಾಗಿದೆ.
ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಯಾದಗರಿ ಸೇರಿದಂತೆ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಳವಾಗಿದೆ. ಅಂದರೆ 3.1 ಡಿಗ್ರಿ ಸೆಲ್ಸಿಯಸ್‌ನಿಂದ 5.0 ಡಿಗ್ರಿ ಸೆಲ್ಸಿಯಸ್ ವರೆಗೆ ಹೆಚ್ಚಳವಾಗಿದೆ. ಉಳಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಕಡಿಮೆ ದಾಖಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಕೆಲವು ಕಡೆ ಮಳೆಯಾಗುವ ನಿರೀಕ್ಷೆ ಇದೆ.
ಇಂದು (ಮಾರ್ಚ್ 25, ಸೋಮವಾರ) ದಕ್ಷಿಣ ಒಳನಾಡಿನಲ್ಲಿ ಮುಂಜಾನೆ ವೇಳೆಯಲ್ಲಿ ಸ್ವಲ್ಪ ಚಳಿಯ ವಾತಾವರಣವಿತ್ತು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ರಾಮನಗರ ಈ ಜಿಲ್ಲೆಗಳಲ್ಲಿ ಅಲ್ಪ ಬಿಸಿಯ ವಾತಾವರಣವಿದೆ. ಆದರೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಏರಿಕೆಯಾಗಿದೆ. ಬೆಳಗ್ಗೆ 10 ಗಂಟೆಯ ನಂತರ ಬಿಸಿ ಹೆಚ್ಚಾಗಲಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 39.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಮಂಡ್ಯದಲ್ಲಿ ಕನಿಷ್ಠ ಉಷ್ಣಾಂಶ 19.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಇಂದು, ನಾಳೆ ಬೆಂಗಳೂರು ಹವಾಮಾನ
ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ನಗರದಲ್ಲಿ ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಕರ್ನಾಟಕದ ಕರಾವಳಿ ಪ್ರದೇಶಗಳಾಗಿವೆ. ಈ ಭಾಗವನ್ನು ಕೆನರಾ ಅಂತಲೂ ಕರೆಯಲಾಗುತ್ತದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿಗೆ ಬರುತ್ತವೆ. ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಇನ್ನೂ ಉತ್ತರ ಒಳನಾಡಿನ ವ್ಯಾಪ್ತಿಗೆ ಬರುತ್ತವೆ. ವಾರ್ಷಿಕ ಈ ಭಾಗದಲ್ಲಿ ಸರಾಸರಿ 711.5 ಮಿಲಿ ಮೀಟರ್ ಮಳೆಯಾಗುತ್ತದೆ.