ಕರ್ನಾಟಕ ಹವಾಮಾನ ಮಾರ್ಚ್ 31: ಕಲಬುರಗಿಯಲ್ಲಿ ದಾಖಲೆಯ 41.8 ಡಿಗ್ರಿ ಸೆಲ್ಲಿಯಸ್ ಉಷ್ಣಾಂಶ; ದಕ್ಷಿಣ ಒಳನಾಡಿನಲ್ಲಿ ಕೊಂಚ ತಗ್ಗಿದ ಬಿಸಿ
Karnataka Weather: ಎರಡು ದಿನಗಳ ಹಿಂದಷ್ಟೇ ರಾಯಚೂರಿನಲ್ಲಿ ಉಷ್ಣಾಂಶ 44 ಡಿಗ್ರಿ ಸೆಲ್ಸಿಯಸ್ಸ್‌ಗೆ ಏರಿಕೆಯಾಗಿತ್ತು. ಇದೀಗ ಕಲಬುರಗಿಯಲ್ಲಿ ದಾಖಲೆಯ ಮಟ್ಟದಲ್ಲಿ ಹೆಚ್ಚಾಗುತ್ತಿದೆ. ರಾಜ್ಯದ ಹವಾಮಾನದ ವರದಿ ಇಲ್ಲಿದೆ.
ಬೆಂಗಳೂರು: ಕರ್ನಾಟಕದ ಬಹುತೇಕ ಕಡೆಗಳಲ್ಲಿ (Karnataka Weather) ರಣ ಬಿಸಿಲಿಗೆ ಜನ ಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಬಿಸಿಲ ನಾಡು ಕಲಬುರಗಿಯಲ್ಲಿ ಉಷ್ಣಾಂಶ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 41.8 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿ ಹೆಚ್ಚಾಗುತಲೇ ಇದ್ದು, ಇಂದು (ಮಾರ್ಚ್ 31, ಭಾನುವಾರ) ಕೆಲವು ಪ್ರದೇಶಗಳಲ್ಲಿ ಉಷ್ಣಾಂಶ ಹೆಚ್ಚಳವಾಗಿರಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿಸಿ ಗಮನಾರ್ಹವಾಗಿ ಇಳಿಯಾಗಿದೆ. ಆದರೆ ಕರಾವಳಿ ಮತ್ತು ಉತ್ತರ ಒಳನಾಡು ಸೇರಿದಂತೆ ಬಹುತೇಕ ಕಡೆಗಳಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ. ಬಿಸಿಲು ಇರಲಿದೆ.
ಶನಿವಾರ (ಮಾರ್ಚ್ 30) ಬೆಳಗ್ಗೆ ವರದಿಯಾಗಿರುವ ಪ್ರಕಾರ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಎಲ್ಲಾ ಕಡೆ ಒಣಹವೆ ಮುಂದುವರಿದಿದೆ. ಭಾರಿ ಮಳೆ, ಗುಡುಗು ಮಿಂಚು ಯಾವುದೂ ಇಲ್ಲದಿರುವ ಕಾರಣ ಮೀನುಗಾರರಿಗೆ ಮುನ್ನಚ್ಚರಿಕೆ ಇರುವುದಿಲ್ಲ. ಎಂದಿನಂತೆ ಮೀನುಗಾರಿಕೆ ನಡೆಸಬಹುದು. ಮುಂದಿನ ಎರಡ್ಮೂರು ದಿನಗಳ ಕಾಲ ಇದೇ ವಾತಾರಣ ಇರಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಕಡಿಮೆಯಾಗಿದೆ. ಅಂದರೆ -2.1 ಡಿಗ್ರಿ ಸೆಲ್ಸಿಯಸ್‌ನಿಂದ -4.1 ಡಿಗ್ರಿ ಸೆಲ್ಸಿಯಸ್ ವರೆಗೆ ಕಡಿಮೆಯಾಗಿದೆ. ರಾಜ್ಯದಲ್ಲಿ ಕಡಿಮೆ ಉಷ್ಣಾಂಶ ಚಾಮರಾಜನಗರದಲ್ಲಿ 18.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬಿಸಿ ಹೆಚ್ಚಳದ ಮುನ್ಸೂಚನೆ
ಮುಂದಿನ ಎರಡು ದಿನಗಳಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ. ರಾಯಚೂರು, ಕಲಬುರಗಿ, ಬೆಳಗಾವಿ, ಬೀದರ್, ವಿಜಯಪುರು, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕೊಪ್ಪಳ ಬಳ್ಳಾರಿ ಹಾಗೂ ಯಾದಗಿರಿಯಲ್ಲಿ ಈಗಾಗಲೇ ಬಿಸಿಗೆ ಜನರು ಹೈರಾಣವಾಗಿದ್ದಾರೆ. ತುಮಕೂರು ಹಾಸನ ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವೊಂದು ಭಾಗಗಳಲ್ಲೂ ಬಿಸಿ ಹೆಚ್ಚಳದ ಮುನ್ಸೂಚನೆ ಇದೆ.
ಬೆಂಗಳೂರು ಹವಾಮಾನ
ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ. ನಾಳೆಯೂ (ಏಪ್ರಿಲ್ 1, ಸೋಮವಾರ) ಇದೇ ವಾತಾವರಣ ಇರಲಿದೆ. ಮಾರ್ಚ್ 29 ರಂದು ರಾಯಚೂರಿಯಲ್ಲಿ ಬರೋಬ್ಬರಿ 44 ಡಿಗ್ರಿ ಸೆಲ್ಸಿಯಸ್ ನಷ್ಟು ಉಷ್ಣಾಂಶ ಏರಿಕೆಯಾಗಿ ಅತ್ಯಂತ ಬಿಸಿಯ ಜಿಲ್ಲೆ ಎಂಬ ಹೊಸ ದಾಖಲೆಯನ್ನು ಬರೆದಿತ್ತು.
ಬೆಂಗಳೂರು ನಗರದಲ್ಲಿ ಶುಕ್ರವಾರ (ಮಾರ್ಚ್ 29) 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದ್ದು, ಕಳೆದ ಐದು ವರ್ಷಗಳಲ್ಲಿ ಮಾರ್ಚ್ ತಿಂಗಳಲ್ಲಿ ದಾಖಲಾಗಿರುವ ಅತ್ಯಂತ ಗರಿಷ್ಠವಾಗಿದೆ. ಹಿಂದಿನ ದಾಖಲೆಗಳನ್ನು ಮುರಿದಿದೆ. ಮಾರ್ಚ್ ಕೊನೆಯ ವಾರದಲ್ಲಿ ಸಾಮಾನ್ಯ ಸರಾಸರಿ ನಿರೀಕ್ಷಿತ ತಾಪಮಾನ 34.2 ಡಿಗ್ರಿ ಸೆಲ್ಸಿಯಸ್ ಆಗಿದೆ. ಮಾರ್ಚ್ ತಿಂಗಳಲ್ಲಿ ಬೆಂಗಳೂರಿನಲ್ಲಿ ಇದುವರೆಗೆ ದಾಖಲಾದ ಗರಿಷ್ಠ ತಾಪಮಾನ 37.3 ಡಿಗ್ರಿ ಸೆಲ್ಸಿಯಸ್, ಇದು 1996 ರಲ್ಲಿ ದಾಖಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
ಶುಕ್ರವಾರ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದ್ದು, ಇದು ದಶಕದಲ್ಲಿ ಮೂರನೇ ಅತಿ ಹೆಚ್ಚು ತಾಪಮಾನದ ದಿನವಾಗಿದೆ. ಕಳೆದ 15 ವರ್ಷಗಳಲ್ಲಿ ನಾಲ್ಕನೇ ಅತಿ ಹೆಚ್ಚು ತಾಪಮಾನದ ದಿನವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಹವಾಮಾನ ಸಂಸ್ಥೆ ಈ ಹಿಂದೆ ಬೆಂಗಳೂರಿನಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಿನ ತಾಪಮಾನವನ್ನು ಮುನ್ಸೂಚನೆ ನೀಡಿತ್ತು.