ಕರ್ನಾಟಕ ಹವಾಮಾನ ಮೇ 20; ಕರಾವಳಿ, ಮಲೆನಾಡು ಪ್ರದೇಶದಲ್ಲಿ ರೆಡ್ ಅಲರ್ಟ್, ಬೆಂಗಳೂರಲ್ಲಿ ಭಾರಿ ಮಳೆ, ಇಂದಿನ ಮಳೆ ಹವಾಮಾನ ಹೀಗಿರಲಿದೆ
ಕರ್ನಾಟಕ ಹವಾಮಾನ: ಮುಂಗಾರು ಆರಂಭಕ್ಕೆ ಮೊದಲೇ ಪೂರ್ವ ಮುಂಗಾರು ಮಳೆ ಜೋರಾಗಿ ಸುರಿಯುತ್ತಿದ್ದು, ಇಂದು (ಮೇ 20) ಕರಾವಳಿ, ಮಲೆನಾಡು ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಬೆಂಗಳೂರಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು, ಕರ್ನಾಟಕದ ಇಂದಿನ ಮಳೆ ಹವಾಮಾನ ಹೀಗಿರಲಿದೆ

ಮಳೆ ಹವಾಮಾನ: ಕರ್ನಾಟಕದ ರಾಜಧಾನಿ ಬೆಂಗಳೂರು ಈಗಾಗಲೇ ತತ್ತರಿಸಿ ಹೋಗಿದೆ. ಕೇವಲ 24 ಗಂಟೆಗಳ ಅವಧಿಯಲ್ಲಿ 100ಕ್ಕೂ ಹೆಚ್ಚು ಎಂಎಂ ಮಳೆ ಸುರಿದು ಬೆಂಗಳೂರಿಗರಲ್ಲಿ ನಡುಕ ಹುಟ್ಟಿಸಿದೆ. ಕಳೆದ ಎಂಟು ಹತ್ತು ದಿನಗಳಿಂದ ಚದುರಿದಂತೆ ಬೀಳುತ್ತಿದ್ದ ಮಳೆ, ಕಳೆದ ಎರಡು ದಿನಗಳಲ್ಲಿ ತೀವ್ರತೆ ಹೆಚ್ಚಿಸಿಕೊಂಡಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಬಹುದು. ಇಂದು (ಮೇ 20) ಕರಾವಳಿ, ಮಲೆನಾಡು ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರಲ್ಲಿ ಭಾರಿ ಮಳೆ ಸಾಧ್ಯತೆ ಇದೆ ಎಂದು ಹೇಳಿದೆ.
ಕರ್ನಾಟಕ ಹವಾಮಾನ: ಇಂದು ಕರಾವಳಿ, ಮಲೆನಾಡು ಪ್ರದೇಶದಲ್ಲಿ ರೆಡ್ ಅಲರ್ಟ್
ಬಂಗಾಳದ ಉಪ ಸಾಗರದಲ್ಲಿ ಮೇಲೆ ಸುಳಿಗಾಳಿ, ರಾಜ್ಯದ ಒಳನಾಡಿನಲ್ಲಿ ಟ್ರಫ್ ನಿರ್ಮಾಣವಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದ್ದು, ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ. ಅರಬ್ಬಿ ಸಮುದ್ರದಲ್ಲಿ ಮೇ 22ರ ವೇಳೆಗೆ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ನಾಲ್ಕು ದಿನಗಳ ಕಾಲ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಕೆಲವು ಕಡೆ ರೆಡ್ ಅಲರ್ಟ್, ಇನ್ನು ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ಕರಾವಳಿ ಕರ್ನಾಟಕ ಹವಾಮಾನ ಇಂದು: ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಗುಡುಗು, ಸಿಡಿಲು ಹಾಗೂ ಗಂಟೆಗೆ 50 ರಿಂದ 60 ಕಿಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮಳೆ ಹವಾಮಾನ ಮುನ್ಸೂಚನೆ ವರದಿ ಹೇಳಿದೆ.
ಕರ್ನಾಟಕದ ಉತ್ತರ ಒಳನಾಡು ಹವಾಮಾನ: ಬೆಳಗಾವಿಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಧಾರವಾಡ, ಹಾವೇರಿಗಳಲ್ಲಿ ಆರೆಂಜ್ ಅಲರ್ಟ್,ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣಯಾಗಿದೆ. ಉಳಿದ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ವರದಿ ಹೇಳಿದೆ.
ಕರ್ನಾಟಕದ ದಕ್ಷಿಣ ಒಳನಾಡು ಹವಾಮಾನ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ,ಮಂಡ್ಯ, ಮೈಸೂರು, ರಾಮನಗರ,ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಬಹುದು ಎಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಇಂದಿನ ಹವಾಮಾನ: ಬೆಂಗಳೂರಲ್ಲಿ ಭಾರಿ ಮಳೆ ಸಾಧ್ಯತೆ
ಭಾರತೀಯ ಹವಾಮಾನ ಇಲಾಖೆ ರಾಜ್ಯದ ಉದ್ದಗಲಕ್ಕೂ ಮಳೆ ಮುನ್ಸೂಚನೆ ನೀಡಿದ್ದು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಎರಡೂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಇಂದು (ಮೇ 20) ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ಹೇಳಿದೆ.
ಬೆಂಗಳೂರು ನಗರದಲ್ಲಿ ನಿನ್ನೆ (ಮೇ 19) 24 ಗಂಟೆಗಳ ಅವಧಿಯಲ್ಲಿ 105 ಮಿಮೀ ಮಳೆಯಾಗಿದ್ದು, ನಗರ ಸಂಚಾರ ಅಸ್ತವ್ಯಸ್ತವಾಗಿತ್ತು. 50 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿ ಜನಜೀವನ ಸಂಕಷ್ಟಕ್ಕೆ ಒಳಗಾಗಿತ್ತು. ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 29.4 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 20.8 ಡಿಗ್ರಿ ಸೆಲ್ಶಿಯಸ್ ದಾಖಲಾಯಿತು. ಬೆಂಗಳೂರು ಗ್ರಾಮಾಂತರದಲ್ಲಿ 44 ಎಂಎಂ ಮಳೆಯಾಗಿದ್ದು, ಗರಿಷ್ಠ ತಾಪಮಾನ 29.8 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಶಿಯಸ್ ದಾಖಲಾಯಿತು ಎಂದು ಮಳೆ ಹವಾಮಾನ ವರದಿ ಹೇಳಿದೆ. ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಕೆಂಗೇರಿಯಲ್ಲಿ ಅತ್ಯಧಿಕ 132 ಮಿ.ಮೀ. ಮಳೆ ದಾಖಲಾಗಿದೆ.