ಕರ್ನಾಟಕ ಹವಾಮಾನ: ಕರಾವಳಿ ಜಿಲ್ಲೆಗಳ ಮಳೆ ಹವಾಮಾನ, ಬೆಂಗಳೂರು ಸೇರಿ ಉಳಿದ ಜಿಲ್ಲೆಗಳ ಇಂದಿನ ಹವಾಮಾನ ಹೀಗಿರಲಿದೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ: ಕರಾವಳಿ ಜಿಲ್ಲೆಗಳ ಮಳೆ ಹವಾಮಾನ, ಬೆಂಗಳೂರು ಸೇರಿ ಉಳಿದ ಜಿಲ್ಲೆಗಳ ಇಂದಿನ ಹವಾಮಾನ ಹೀಗಿರಲಿದೆ

ಕರ್ನಾಟಕ ಹವಾಮಾನ: ಕರಾವಳಿ ಜಿಲ್ಲೆಗಳ ಮಳೆ ಹವಾಮಾನ, ಬೆಂಗಳೂರು ಸೇರಿ ಉಳಿದ ಜಿಲ್ಲೆಗಳ ಇಂದಿನ ಹವಾಮಾನ ಹೀಗಿರಲಿದೆ

ಇಂದಿನ ಹವಾಮಾನ: ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಇಂದು (ಮೇ 13) ಮಳೆಯಾಗಬಹುದು. ಕರಾವಳಿ ಜಿಲ್ಲೆಗಳಲ್ಲಿ ಸ್ವಲ್ಪ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಮಿಶ್ರ ಹವಾಮಾನ ಅನುಭವಕ್ಕೆ ಬರಲಿದೆ. ಕೆಲವು ಕಡೆ ಒಣಹವೆ ಇರಲಿದ್ದು, ತಾಪಮಾನ ಹೆಚ್ಚಳ ಅನುಭವವಾಗಲಿದೆ. ಕರ್ನಾಟಕದ ಮಳೆ ಹವಾಮಾನ ಮತ್ತು ಹವಾಮಾನ ವರದಿ ವಿವರ ಇಲ್ಲಿದೆ.

ಕರ್ನಾಟಕ ಹವಾಮಾನ ಮೇ 13: ಕರಾವಳಿ ಜಿಲ್ಲೆಗಳ ಮಳೆ ಹವಾಮಾನ, ಬೆಂಗಳೂರು ಸೇರಿ ಉಳಿದ ಜಿಲ್ಲೆಗಳ ಇಂದಿನ ಹವಾಮಾನ ವಿವರ. (ಸಾಂಕೇತಿಕ ಚಿತ್ರ)
ಕರ್ನಾಟಕ ಹವಾಮಾನ ಮೇ 13: ಕರಾವಳಿ ಜಿಲ್ಲೆಗಳ ಮಳೆ ಹವಾಮಾನ, ಬೆಂಗಳೂರು ಸೇರಿ ಉಳಿದ ಜಿಲ್ಲೆಗಳ ಇಂದಿನ ಹವಾಮಾನ ವಿವರ. (ಸಾಂಕೇತಿಕ ಚಿತ್ರ) (Pexels)

ಇಂದಿನ ಹವಾಮಾನ: ಕರ್ನಾಟಕದ ಉದ್ದಗಲಕ್ಕೂ ಇಂದು ಮಳೆಯ ವಾತಾವರಣ ಇರಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ತುಸು ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಲಿದ್ದು, ಉಳಿದೆಡೆ ಒಣಹವೆ, ತಾಪಮಾನ ಹೆಚ್ಚಳದ ಪರಿಸ್ಥಿತಿ ಕಾಡಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ವರದಿ ಹೇಳಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಮಳೆಯಾಗಬಹುದು ಎಂದು ಮಳೆ ಹವಾಮಾನ ವರದಿ ಹೇಳಿದೆ.

ಬೆಂಗಳೂರು ಇಂದಿನ ಹವಾಮಾನ

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಅಥವಾ ಗುಡುಗು ಸಹಿತ ಗಂಟೆಗೆ 30 ರಿಂದ 40 ಕಿಮೀ ವೇಗದ ಗಾಳಿಯೊಂದಿಗೆ ಮಳೆಯಾಗಬಹುದು. ಬೆಂಗಳೂರಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಬೆಂಗಳೂರು ನಗರದಲ್ಲಿ ನಿನ್ನೆ (ಮೇ 12) ಗರಿಷ್ಠ ತಾಪಮಾನ 33.7 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 22.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಗರಿಷ್ಠ ತಾಪಮಾನ 33.5 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 21.5 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವಿಜ್ಞಾನಿ ಲತಾ ಶ್ರೀಧರ್ ತಿಳಿಸಿದ್ದಾರೆ.

ಕರ್ನಾಟಕ ಹವಾಮಾನ; ಈ ದಿನದ ಮಳೆ ಹವಾಮಾನ

ಕರಾವಳಿ ಕರ್ನಾಟಕ ಹವಾಮಾನ ಇಂದು: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಮಧ್ಯಮ ಮಳೆಯಾಗಬಹುದು ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳು ಇವೆ ಎಂದು ಹವಾಮಾನ ವರದಿ ಹೇಳಿದೆ

ಕರ್ನಾಟಕದ ಉತ್ತರ ಒಳನಾಡು ಹವಾಮಾನ: ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಅಥವಾ ಅಲ್ಲಲ್ಲಿ ಗಂಟೆಗೆ 40 ರಿಂದ 50 ಕಿಮೀ ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗಬಹುದು ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ಸೂಚನೆ ತಿಳಿಸಿದೆ.

ಅದೇ ರೀತಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಳಗಾವಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಪ್ರಮಾಣದ ಮಳೆಯಾಗಬಹುದು ಅಥವಾ ಗಂಟೆಗೆ 40 ರಿಂದ 50 ಕಿಮೀ ವೇಗದ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕ ದಕ್ಷಿಣ ಒಳನಾಡು ಹವಾಮಾನ: ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆ/ ಗುಡುಗು ಸಹಿತ ಗಂಟೆಗೆ 40 ರಿಂದ 50 ಕಿಮೀ ವೇಗದ ಬಿರುಗಾಳಿಯೊಂದಿಗೆ ಮಳೆಯಾಗಬಹುದು. ಇದೇ ರೀತಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ 40 ರಿಂದ 50 ಕಿಮೀ ವೇಗದ ಬಿರುಗಾಳಿಯೊಂದಿಗೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವಿಜ್ಞಾನಿ ಡಾ ಎನ್ ಪುವಿಯರಸನ್ ತಿಳಿಸಿದ್ದಾರೆ.

ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.