Karnataka Weather: ಕರಾವಳಿ, ಉತ್ತರ ಕರ್ನಾಟಕದಲ್ಲಿ ತಗ್ಗಿದ ಮಳೆ ಪ್ರಮಾಣ, ಇಂದು ಸಾಧಾರಣ ಮಳೆ ನಿರೀಕ್ಷೆ; ಬೆಂಗಳೂರು ಹವಾಮಾನ ಹೇಗಿದೆ
ಕರ್ನಾಟಕದಲ್ಲಿ ಮೂರ್ನಾಲ್ಕು ದಿನದಿಂದ ಇದ್ದಂತಹ ಭಾರೀ ಮಳೆ ಸನ್ನಿವೇಶ ಕಡಿಮೆಯಾಗಿದ್ದು, ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು.
ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಗುರುವಾರವೂ ಮಳೆಯಾಗುವ ಮುನ್ಸೂಚನೆಯಿದೆ.ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಿಡಿಲಿನಿಂದ ಕೂಡಿದ್ದು ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ನಾಲ್ಕೈದು ದಿನಗಳಿಂದ ಆಗುತ್ತಿದ್ದು, ಗುರುವಾರವೂ ಮುಂದುವರಿಯಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಮಾಹಿತಿ ನೀಡಿದೆ. ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸೂಚನೆಗಳಿವೆ.
ಎಲ್ಲೆಲ್ಲಿ ಮಳೆಯಾಗಬಹುದು
ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 3 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಯಾದಗಿರಿ, ಕಲಬುರಗಿ, ರಾಯಚೂರು ಸಹಿತ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸೆಪ್ಟೆಂಬರ್ 26 ರವರೆಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಮತ್ತು ಸೆಪ್ಟೆಂಬರ್ 29 ರಿಂದ ಮಳೆ ಚಟುವಟಿಕೆಯು ಪುನಶ್ಚೇತನಗೊಳ್ಳುವ ನಿರೀಕ್ಷೆಯಿದೆ.
ಕಾವೇರಿ ಜಲಾನಯನ ಪ್ರದೇಶದ ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ, ಹಾಸನ ಜಿಲ್ಲೆಗಳಲ್ಲಿ ಸಹಿತ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 3 ರವರೆಗೆ ಮಳೆ ಮುನ್ಸೂಚನೆ ಇದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಸೆಪ್ಟೆಂಬರ್ 28 ರವರೆಗೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಬಹುದು., ಸೆಪ್ಟೆಂಬರ್ 29 ರಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ
ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 3 ರವರೆಗೆ ಕರ್ನಾಟಕ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಸೆಪ್ಟೆಂಬರ್ 26 ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆ ಆಗಬಹುದು. ಸೆಪ್ಟೆಂಬರ್ 29 ರಿಂದ ಮಳೆ ಚಟುವಟಿಕೆಯು ಪುನಶ್ಚೇತನಗೊಳ್ಳುವ ನಿರೀಕ್ಷೆಯಿದೆ.
ಉತ್ತರ ಒಳನಾಡು ಜಿಲ್ಲೆಗಳಿಗೆ ಸೆಪ್ಟೆಂಬರ್ 2 ರವರೆಗೆ ಚದುರಿದದ ವ್ಯಾಪಕವಾಗಿ ಸಾಧಾರಣ ಮಳೆಯಾಗಬಹುದು. ಸೆಪ್ಟೆಂಬರ್ 29 ರಿಂದ ಮಳೆ ಚಟುವಟಿಕೆಯು ಪುನಶ್ಚೇತನಗೊಳ್ಳುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಸೆಪ್ಟೆಂಬರ್ 28 ರವರೆಗೆ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆ, ಸೆಪ್ಟೆಂಬರ್ 29 ರಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಮಾಹಿತಿಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ತಿಳಿಸಿದೆ.
ಬೆಂಗಳೂರು ಹವಾಮಾನ
ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳು ಅಧಿಕ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶವು 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 20 ಡಿಗ್ರಿ ಸೆಲ್ಸಿಯಸ್ ದಾಖಲಾಗಬಹುದು.
ಬೀದರ್ ಜಿಲ್ಲೆಯಲ್ಲಿ ಉತ್ತಮ ಮಳೆ
ಬುಧವಾರ ಬೀದರ್ ಜಿಲ್ಲೆಯಲ್ಲಿ ಉತ್ತಮ ಮಳೆ ಸುರಿದಿದೆ. ಬ್ಯಾಲರಹಳ್ಳಿಯಲ್ಲಿ 53.5 ಮಿ.ಮೀ, ದುಮ್ಮನಸೂರು, ಮನ್ನಹಳ್ಳಿ, ನಂದಗಾಂವ್‌ನಲ್ಲಿ ಉತ್ತಮ ಮಳೆಯಾಗಿದೆ.
ಅದೇ ರೀರಿ ಕಲಬುರಗಿ, ವಿಜಯಪುರ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆಯಾದ ವರದಿಯಾಗಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಬುಧವಾರವೂ ಮಳೆಯಾಗಿದೆ.