Kodagu News: ಕೊಡಗಿನ ಕೆಲವು ಭಾಗಗಳಲ್ಲಿ ನಾಳೆ ಮದ್ಯ ಮಾರಾಟ ಇರೋಲ್ಲ, ಸಂತೆ, ಜಾತ್ರೆಯೂ ನಿಷೇಧ; ಏನು ಕಾರಣ
ಕೊಡಗು ಜಿಲ್ಲೆಯ ನಾನಾ ಭಾಗಗಳಲ್ಲಿ ನವೆಂಬರ್ 23ರ ಶನಿವಾರ ಮದ್ಯ ಮಾರಾಟ ಇರುವುದಿಲ್ಲ. ಜಾತ್ರೆ ಹಾಗೂ ಸಂತೆಗಳನ್ನು ನಿಷೇಧಿಸಿ ಕೊಡಗು ಡಿಸಿ ವೆಂಕಟರಾಜಾ ಆದೇಶಿಸಿದ್ದಾರೆ.
ಮಡಿಕೇರಿ: ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು 1967 ರ ನಿಯಮ 10-ಬಿ ಅಡಿಯಲ್ಲಿ ಪ್ರತ್ಯಾಯೋಜಿತವಾಗಿರುವ ಅಧಿಕಾರದಂತೆ ನವೆಂಬರ್, 23 ರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ನಿಡ್ತ, ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಮತ್ತು ಚೆಟ್ಟಳ್ಳಿ, ಪೊನ್ನಂಪೇಟೆ ತಾಲ್ಲೂಕಿನ ಟಿ.ಶೆಟ್ಟಿಗೇರಿ ಮತ್ತು ಕುಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಎಲ್ಲಾ ವಿಧದ ಮದ್ಯ ತಯಾರಿಕೆ, ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.
ಆದೇಶದಲ್ಲಿ ಏನಿದೆ
ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ನೀತಿ ಸಂಹಿತೆಯು ಜಾರಿಯಲ್ಲಿರುವ ಪ್ರದೇಶಗಳಲ್ಲಿರುವ ಎಲ್ಲಾ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು, ಅದಿಭೋಗದಾರರು ಮತ್ತು ಸಂದರ್ಭಾನುಸಾರ ಮುಚ್ಚತಕ್ಕದ್ದು ಹಾಗೂ ಮೊಹರು ಮಾಡಿ ಕೀಯನ್ನು ಜಿಲ್ಲಾಧಿಕಾರಿಗಳಿಗೆ ಅಥವಾ ಅಧಿಕಾರ ವ್ಯಾಪ್ತಿಯುಳ್ಳ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟರಿಗೆ ಒಪ್ಪಿಸತಕ್ಕದ್ದು.
ಈ ಆದೇಶವು ಉಪ ಚುನಾವಣೆ ನಡೆಯುವ ಸಂಬಂಧಪಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನವೆಂಬರ್, 23 ರವರೆಗೆ ಅಥವಾ ನೀತಿ ಸಂಹಿತೆ ಜಾರಿಯಲ್ಲಿರುವವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮಾತ್ರ ಅನ್ವಯಿಸುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ ರಾಜಾ ಅವರು ತಿಳಿಸಿದ್ದಾರೆ.
ಸಂತೆ, ಜಾತ್ರೆಗಳ ನಿಷೇಧ
ಗ್ರಾಮ ಪಂಚಾಯಿತಿ ಉಪ ಚುನಾವಣೆ 2024 ರ ಮತದಾನವನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 36 ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರಡಿಯಲ್ಲಿ ದತ್ತವಾಗಿರುವ ಅಧಿಕಾರದಂತೆ ನೀತಿ ಸಂಹಿತೆ ಜಾರಿಯಲ್ಲಿರುವ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ನಿಡ್ತ, ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಮತ್ತು ಚೆಟ್ಟಳ್ಳಿ, ಪೊನ್ನಂಪೇಟೆ ತಾಲ್ಲೂಕಿನ ಟಿ.ಶೆಟ್ಟಿಗೇರಿ ಮತ್ತು ಕುಟ್ಟ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನವೆಂಬರ್, 22 ರ ಮಧ್ಯರಾತ್ರಿ 12 ಗಂಟೆಯಿಂದ ನವೆಂಬರ್, 23 ರ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ವಿಧದ ಸಂತೆ ಜಾತ್ರೆಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ ರಾಜಾ ಅವರು ಆದೇಶಿಸಿದ್ದಾರೆ.