Bagarhukum: ಕರ್ನಾಟಕ ರೈತರಿಗೆ ಸಿಹಿಸುದ್ದಿ: 6ತಿಂಗಳೊಳಗೆ ಅರ್ಹರಿಗೆ ಸಿಗಲಿದೆ ಬಗರ್‌ಹುಕಂ ಸಾಗುವಳಿ ಚೀಟಿ
Bagarhukum Land Issue ಕರ್ನಾಟಕದಲ್ಲಿ ಹಲವು ವರ್ಷಗಳಿಂದ ಇರುವ ಬಗರ್ ಹುಕುಂ ಭೂಮಿ ಸಾಗುವಳಿ ಗೊಂದಲವನ್ನು ಬಗೆಹರಿಸಲು ಮುಂದಾಗಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ, ಆರು ತಿಂಗಳ ಒಳಗೆ ಪತ್ರ ವಿತರಿಸುವಂತೆ ಆದೇಶಿಸಿದ್ದಾರೆ.
ಕೊಪ್ಪಳ: ಹಲವಾರು ವರ್ಷಗಳಿಂದ ಬಗರ್‌ಹುಕುಂ ಜಮೀನಿನ ಸಾಗುವಳಿ ಚೀಟಿಗೆ ಕಾದಿರುವ ಕರ್ನಾಟಕದ ರೈತರಿಗೆ ಇದು ಸಿಹಿಸುದ್ದಿ.
ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಇಲಾಖೆಯು ಮುಂದಿನ ಆರು ತಿಂಗಳಲ್ಲಿ ಅರ್ಹರಿಗೆ ಬಗರ್‌ಹುಕುಂ ಸಾಗುವಳಿ ಚೀಟಿಗಳು ತಲುಪಲಿವೆ. ಇದಕ್ಕಾಗಿ ಪ್ರತ್ಯೇಕ ಆ್ಯಪ್ ಕೂಡ ರೂಪಿಸಿದ್ದು, ಅದರಡಿ ಚಟುವಟಿಕೆಯೂ ಶುರುವಾಗಿದೆ.
ಕರ್ನಾಟಕ ಸರ್ಕಾರದಲ್ಲಿ ಚುರುಕಾಗಿ ಕೆಲಸ ಮಾಡುತ್ತಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಬಗರಹುಕುಂ ಜಮೀನಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನಗಳನ್ನು ಸರ್ಕಾರದ ಹಂತದಲ್ಲಿ ತೆಗೆದುಕೊಂಡಿದ್ದಾರೆ.
ಕೊಪ್ಪಳದಲ್ಲಿಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಕಂದಾಯ ಸಚಿವರು, ಕೃಷಿ ಜಮೀನಿಗೆ ರೈತರು ಓಡಾಡಲು ರಸ್ತೆ ಕಲ್ಪಿಸಿಕೊಡಿ, ಬಾಕಿ ಇರುವ ಬಗರ್ ಹುಕುಂ ಅರ್ಜಿಗಳ ಪೈಕಿ ಅರ್ಹ ರೈತರಿಗೆ ಮುಂದಿನ ಆರು ತಿಂಗಳ ಒಳಗಾಗಿ ಸಾಗುವಳಿ ಚೀಟಿ ನೀಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಬಗರ್ ಹುಕುಂ ಸಾಗುವಳಿ ಚೀಟಿ ನೀಡುವ ಮುನ್ನ ಅಂತಹ ಪ್ರದೇಶಗಳಲ್ಲೂ ಕೃಷಿ ಭೂಮಿಗೆ ರಸ್ತೆ ವ್ಯವಸ್ಥೆ ಕಲ್ಪಿಸಬೇಕು. ಅಲ್ಲದೆ, ಮುಂದಿನ ಆರು ತಿಂಗಳ ಒಳಗಾಗಿ ಅರ್ಹ ಫಲಾನುಭವಿಗಳಿಗೆ ಬಗರ್ ಹುಕುಂ ಭೂಮಿಯನ್ನು ಮಂಜೂರು ಮಾಡಬೇಕು ಎಂದು ಸಚಿವರು ಸೂಚಿಸಿದರು.
ತಮ್ಮದೇ ಕೃಷಿ ಭೂಮಿಗೆ ಓಡಾಡಲು ರೈತರಿಗೆ ರಸ್ತೆ ಇಲ್ಲದೆ ಸಾಕಷ್ಟು ತಿಂದರೆಗೀಡಾಗಿದ್ದರು. ಈ ಸಮಸ್ಯೆಯನ್ನು ನೀಗಿಸುವ ಸಲುವಾಗಿಯೇ ಕಳೆದ ವಾರ ರೈತರ ಕೃಷಿ ಭೂಮಿಗೆ ರಸ್ತೆ ಒದಗಿಸಬೇಕು ಎಂದು ಹೊಸ ಸುತ್ತೋಲೆ ಹೊರಡಿಸಲಾಗಿದೆ. ಅಧಿಕಾರಿಗಳನ್ನು ಇದನ್ನು ಗಂಭೀರವಾಗಿ ಪರಿಗಣಿಸಬೇಕು, ಪ್ರಸ್ತುತ ಎಲ್ಲಾ ರೈತರ ಕೃಷಿ ಭೂಮಿಗೆ ರಸ್ತೆ ಒದಗಿಸಬೇಕು ಎಂದರು.
ಬಗರ್ ಹುಕುಂ ಅರ್ಜಿ ವಿಲೇವಾರಿ ಸಂದರ್ಭದಲ್ಲಿ ಅಧಿಕಾರಿಗಳು ಯಾವುದೇ ಪ್ರಭಾವಿಗಳ ಅಥವಾ ರಾಜಕೀಯ ಪಕ್ಷದ ನಾಯಕರಿಗೆ ಅನುಕೂಲವಾಗುವಂತೆ ವರ್ತಿಸಬಾರದು, ಬದಲಾಗಿ ಬಡ ಜನರಿಗೆ ಮತ್ತು ಅರ್ಹರಿಗೆ ನ್ಯಾಯ ಒದಗಿಸಲು ಬದ್ಧರಾಗಿರಬೇಕು. ನಿಜಕ್ಕೂ ಉಳುಮೆಯಲ್ಲಿ ತೊಡಗಿರುವ ರೈತರಿಗೆ ಮಾತ್ರ ಸಾಗುವಳಿ ಚೀಟಿ ನೀಡಬೇಕು ಎಂದು ಅವರು ಹೇಳಿದರು.
ಶೀಘ್ರ ಅಧಿಕಾರಿಗಳಿಗೆ ಬಗರ್ ಹುಕುಂ ಆ್ಯಪ್
ನಮೂನೆ 50, 53, 57ರ ಅಕ್ರಮ ಸಕ್ರಮ ಯೋಜನೆಯಡಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿರುವವರಿಗೂ ಸಹ ಸಾಗುವಳಿ ಚೀಟಿ ನೀಡುವುದು ಅಸಾಧ್ಯ. ಅಲ್ಲದೆ, ಸಾವಿರಾರು ಎಕರೆ ಸರ್ಕಾರಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗಿದ್ದು, ಪ್ರತಿಯೊಂದು ಭಾಗಕ್ಕೂ ಅಧಿಕಾರಿಗಳೇ ನೇರ ಹೋಗಿ ಕೃಷಿ ನಡೆಯುತ್ತಿದೆಯೇ? ಎಂದು ಪರಿಶೀಲಿಸುವುದು ಸಾಧ್ಯವಿಲ್ಲ. ಹೀಗಾಗಿ ಬಗರ್ ಹುಕುಂ ತಂತ್ರಾಶದ ಮೂಲಕ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದು ನ್ಯಾಯಸಮ್ಮತವಾಗಲಿದೆ. ಅಲ್ಲದೆ, ಶೀಘ್ರ ಪ್ರಕ್ರಿಯೆಗೂ ಈ ಆ್ಯಪ್ ಸಹಕಾರಿಯಾಗಲಿದೆ ಎಂದು ವಿವರಿಸಿದರು.
ಶೀಘ್ರದಲ್ಲೇ ಈ ಆ್ಯಪ್ ಅಧಿಕಾರಿಗಳ ಕೈಸೇರಲಿದೆ. ಈ ಆ್ಯಪ್ ಸಹಾಯದೊಂದಿಗೆ ಅಧಿಕಾರಿಗಳು ತ್ವರಿತಗತಿಯಲ್ಲಿ ಬಹರ್ ಹುಕುಂ ಅರ್ಜಿ ವಿಲೇವಾರಿಗೊಳಿಸಬಹುದು. ಅಲ್ಲದೆ, ಅರ್ಜಿ ವಿಲೇವಾರಿಯಾದ ನಂತರ ಅರ್ಹ ಫಲಾನುಭವಿಗಳಿಗೆ ಇ-ಸಾಗುವಳಿ ಚೀಟಿಯನ್ನೂ ತಂತ್ರಾಂಶದ ಮೂಲಕವೇ ಒದಗಿಸಬಹುದು. ಕಾವೇರಿ 2.0 ಮೂಲಕ ನೋಂದಣಿ ಮಾಡಿಸಿಕೊಟ್ಟರೆ ಜನರಿಗೂ ಅನುಕೂಲವಾಗಲಿದೆ ಎಂದು ಸಚಿವರು ತಿಳಿಸಿದರು.
ಕಂದಾಯ ಗ್ರಾಮ ಘೋಷಿಸಿ
ಕಂದಾಯ ಗ್ರಾಮಗಳನ್ನು ಶೀಘ್ರ ಘೋಷಿಸಿ ಬಡವರಿಗೆ ನೆಮ್ಮದಿಯ ಬದುಕು ಮಾಡಲು ಬಿಡಿ ಎಂದು ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ತರಾಟೆಗೆ ತೆಗೆದುಕೊಂಡರು.
ಸಭೆಯಲ್ಲಿ ಈ ಬಗ್ಗೆ ಗಮನ ಸೆಳೆದ ಸಚಿವರು, "ಕಂದಾಯ ಇಲಾಖೆಗೆ ಸೇರದ ಕಾರಣ ಕಂದಾಯೇತರ ಜನವಸತಿ ನಿವಾಸಿಗಳು ಅಭಿವೃದ್ಧಿ ಯೋಜನೆಗಳಿಂದ ವಂಚಿತರಾಗುತ್ತಿದ್ದರು ಹೀಗಾಗಿ ಕರ್ನಾಟಕ ಭೂ ಕಂದಾಯ ಕಾಯಿದೆಗೆ ತಿದ್ದುಪಡಿ ತಂದು ತಾಂಡ-ಗೊಲ್ಲರಹಟ್ಟಿ ಸೇರಿದಂತೆ ಪ್ರದೇಶಗಳನ್ನು ಕಂದಾಯ ಗ್ರಾಮ ಎಂದು ಘೋಷಿಸಲು ಅನುವುಮಾಡಿಕೊಡಲಾಗಿತ್ತು. ಸಾರ್ವಜನಿಕರ 30 ವರ್ಷಗಳ ಬೇಡಿಕೆಗೆ ಅನುಗುಣವಾಗಿ 2013ರ ಕಾಂಗ್ರೆಸ್ ಸರ್ಕಾರ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹತ್ವದ ನಿರ್ಧಾರ ತೆಗದುಕೊಂಡಿದ್ದರು. ಆದರೆ, ಕೊಪ್ಪಳದಲ್ಲಿ ಈ ಸಂಬಂಧ ಗಮನಾರ್ಹ ಕೆಲಸ ಆಗದಿರುವುದು ವಿಷಾದನೀಯ ಎಂದು ಅಸಮಾಧಾನ ಹೊರಹಾಕಿದರು.
ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 36 ಕಂದಾಯ ಗ್ರಾಮಗಳು ರಚನೆಯಾಗಬೇಕಿತ್ತು. ಆದರೆ, ಈವರೆಗೆ 27 ಗ್ರಾಮಗಳಿಗೆ ಮಾತ್ರ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಉಳಿದ ಗ್ರಾಮಗಳನ್ನು ಕಂದಾಯ ಗ್ರಾಮಗಳು ಎಂದು ಘೋಷಿಸಿ ಹಕ್ಕುಪತ್ರ ನೀಡುವುದು ಯಾವಾಗ? ಎಂದು ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ
ಕೊಪ್ಪಳ ಭಾಗದಲ್ಲಿ ಎಲ್ಲೇ ಕುಡಿಯುವ ನೀರಿನ ಸಮಸ್ಯೆ ಉಂಟಾದರೂ ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.
ಈ ವರ್ಷ ಬರಗಾಲ ಎದುರಾಗಿದೆ. ಮುಂದಿನ ಬೇಸಿಗೆ ಅಥವಾ ಅದಕ್ಕೂ ಮುನ್ನವೇ ಹಾವೇರಿ ಭಾಗದ ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುತ್ತದೆ.ಕೊಪ್ಪಳದ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಅಧಿಕಾರಿಗಳು ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ ಎಂದು ಸರ್ವೆ ನಡೆಸಿ ನೀರಿನ ಸಮಸ್ಯೆ ಕಂಡುಬರುವ ಕಡೆಗಳಲ್ಲಿ ಖಾಸಗಿ ಟ್ಯಾಂಕರ್ ಮೂಲಕ ನೀರನ್ನು ಪೂರೈಸಿ. ಯಾವ ಭಾಗದಲ್ಲೂ ಸಾರ್ವಜನಿಕರು ನೀರಿನ ಸಮಸ್ಯೆ ಎದುರಿಸದಂತೆ ನೋಡಿಕೊಳ್ಳಿ ಎಂದರು.
ರಾಜ್ಯ ಈ ವರ್ಷ ಇತಿಹಾಸ ಕಾಣದ ಬರಕ್ಕೆ ತುತ್ತಾಗಿದೆ. ಮಳೆ ಇಲ್ಲದ ಕಾರಣ ರೈತರು ಪರಿತಪಿಸುವಂತಾಗಿದೆ. ಬೆಳೆ ಕೈಸೇರದೆ ಸಂಕಷ್ಟಕ್ಕೀಡಾಗಿದ್ದಾರೆ ಇಂತಹ ಸಂದರ್ಭದಲ್ಲಿ ನಾವು ರೈತರ ಪರ ನಿಲ್ಲಬೇಕಾಗಿದೆ. ಆದರೆ, ರೈತರಿಗೆ ನ್ಯಾಯಯುತ ಪರಿಹಾರ ತಲುಪಿಸಲು ಬೆಳೆ ಸಮೀಕ್ಷೆ ಅಗತ್ಯ. ಅಧಿಕಾರಿಗಳು ಕೊಪ್ಪಳದಲ್ಲಿ ಈಗಾಗಲೇ ಶೇ.98 ರಷ್ಟು ಬೆಳೆ ಸಮೀಕ್ಷೆ ನಡೆಸಿದ್ದೀರಿ. ಆದರೆ, ರೈತರ ಎಲ್ಲಾ ಮಾಹಿತಿಯನ್ನೂ 'ಫ್ರೂಟ್ಸ್' ತಂತ್ರಾಂಶದಲ್ಲಿ ನಮೂದಿಸಿ ಈ ವಾರದೊಳಗೆ ಈ ಎಲ್ಲಾ ಕೆಲಸಗಳನ್ನು ಮುಗಿಸಿ ಎಂದು ಗಡುವು ನೀಡಿದರು.
ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಆಯುಕ್ತ ಸುನೀಲ್‌ಕುಮಾರ್,ಜಿಲ್ಲಾಧಿಕಾರಿ ನಳಿನಿ ಅತುಲ್ ಮತ್ತಿತರರು ಹಾಜರಿದ್ದರು.
============
ಇದನ್ನೂ ಓದಿರಿ
ವಿಭಾಗ