ಡಿ 31 ರಂದು ನಡೆಯಬೇಕಿದ್ದ ಕೆಎಸ್‌ಆರ್‌ಟಿಸಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ವಾಪಾಸ್;‌ ಸಂಕ್ರಾಂತಿ ನಂತರ ಸಿಎಂ ಮತ್ತೊಂದು ಸುತ್ತಿನ ಸಭೆ
ಕನ್ನಡ ಸುದ್ದಿ  /  ಕರ್ನಾಟಕ  /  ಡಿ 31 ರಂದು ನಡೆಯಬೇಕಿದ್ದ ಕೆಎಸ್‌ಆರ್‌ಟಿಸಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ವಾಪಾಸ್;‌ ಸಂಕ್ರಾಂತಿ ನಂತರ ಸಿಎಂ ಮತ್ತೊಂದು ಸುತ್ತಿನ ಸಭೆ

ಡಿ 31 ರಂದು ನಡೆಯಬೇಕಿದ್ದ ಕೆಎಸ್‌ಆರ್‌ಟಿಸಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ವಾಪಾಸ್;‌ ಸಂಕ್ರಾಂತಿ ನಂತರ ಸಿಎಂ ಮತ್ತೊಂದು ಸುತ್ತಿನ ಸಭೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಡಿ.31ರಂದು ಕರೆ ನೀಡಿದ್ದ ಸಾರಿಗೆ ಮುಷ್ಕರವನ್ನು ಹಿಂಪಡೆದಿದೆ. ಸಂಕ್ರಾತಿ ಬಳಿಕ ಅಂದರೆ, ಜನವರಿ 15ರಂದು ಮತ್ತೊಂದು ಸುತ್ತಿನ ಸಭೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಸಮಿತಿಗೆ ಭರವಸೆ ನೀಡಿದ್ದಾರೆ.

ಕೆಎಸ್‌ಆರ್‌ಟಿಸಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ವಾಪಸ್
ಕೆಎಸ್‌ಆರ್‌ಟಿಸಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ವಾಪಸ್

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ  ಡಿ.31ರಂದು ಕರೆ ನೀಡಿದ್ದ ಸಾರಿಗೆ ಮುಷ್ಕರವನ್ನು ಹಿಂಪಡೆದಿದೆ. ಭಾನುವಾರ (ಡಿ. 29) ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸ ಕಾವೇರಿಯಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳ ಜತೆ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಸಾರಿಗೆ ನೌಕರರ ಸಮಸ್ಯೆಗಳನ್ನು ಈಡೇರಿಸುವ ಭರವಸೆ ನೀಡಲಾಗಿದೆ.

ಡಿಸೆಂಬರ್‌ 31ರಿಂದ ನಡೆಯಬೇಕಿದ್ದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಹಿಂಪಡೆಯಲಾಗಿದೆ ಎಂದು ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಜನವರಿ 15ರಂದು ಮುಖ್ಯಮಂತ್ರಿಗಳು ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಇಲಾಖೆಯು ನಾಲ್ಕೂ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಅಧಿಕಾರಿಗಳು ಭಾಗಿಯಾಗಲಿದ್ದಾರೆ.

ಸಂಕ್ರಾಂತಿ ಬಳಿಕ ಸಭೆ

ನೌಕರರ ಸಮಸ್ಯೆ ಅಲಿಸಿದ ಮುಖ್ಯಮಂತ್ರಿಗಳು ಮತ್ತು ಸಚಿವರು ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಕ್ರಾತಿ ಬಳಿಕ ಜನವರಿ 15 ರಂದು ಮತ್ತೊಂದು ಸುತ್ತಿನ ಸಭೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಅವರ ಮನವಿಗೆ ಸ್ಪಂದಿಸಿ ಮುಷ್ಕರ ಹಿಂಪಡೆಯಲಾಗಿದೆ ಎಂದು ಕೆ ಎಸ್‌ ಆರ್‌ ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಎಚ್.ವಿ. ಅನಂತಸುಬ್ಬರಾವ್‌ ತಿಳಿಸಿದ್ದಾರೆ.

ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿ ಸಾರಿಗೆ ನೌಕರರ ಕಲ್ಯಾಣಕ್ಕಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಮೂಲಭೂತ ಸೌಕರ್ಯಗಳ ವಿಸ್ತರಣೆ, ಅಪಘಾತ ವಿಮೆ, ಆರೋಗ್ಯ ಯೋಜನೆ ಮತ್ತು ತ್ವರಿತವಾಗಿ 9000 ಉದ್ಯೋಗಿಗಳ ನೇಮಕಾತಿಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ. ಸಮಿತಿಯು ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಡಿ.31 ರಿಂದ ರಾಜ್ಯದಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿತ್ತು.

ಸಾರಿಗೆ ನೌಕರರು ಪ್ರತಿದಿನ ಸುಮಾರು ಒಂದು ಕೋಟಿಗೂ ಹೆಚ್ಚಿನ ಪ್ರಯಾಣಿಕರನ್ನು ರಾಜ್ಯದ ವಿವಿಧ ಭಾಗಗಳಿಗೆ ಸುರಕ್ಷಿತವಾಗಿ ತಲುಪಿಸುತ್ತಿದ್ದಾರೆ. ಶಕ್ತಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನಗೊಳಿಸುವ ಮೂಲಕ ಸರ್ಕಾರಕ್ಕೆ ಒಳ್ಳೆಯ ಹೆಸರು ತಂದುಕೊಡಲಾಗಿದೆ. ನಾಲ್ಕೂ ಸಾರಿಗೆ ನಿಗಮಗಳ ಒಂದು ಲಕ್ಷಕ್ಕೂ ಅಧಿಕ ನೌಕರರ ಬೇಡಿಕೆಗಳ ಬಗ್ಗೆ ಸರ್ಕಾರ ನಿರ್ಲಕ್ಷ್ಯ ಧೋರಣೆ ತಳೆದಿರುವುದನ್ನು ಖಂಡಿಸಿ ಮುಷ್ಕರ ಕೈಗೊಳ್ಳಲಾಗುತ್ತಿದೆ ಎಂದು ಪದಾಧಿಕಾರಿಗಳು ತಿಳಿಸಿದ್ದರು.

ನಮ್ಮ ಬೇಡಿಕೆಗಳನ್ನು ಕುರಿತು ಮುಖ್ಯಮಂತ್ರಿಗಳು, ಸಾರಿಗೆ ಸಚಿವರು ಮತ್ತು ಸಾರಿಗೆ ನಿಗಮಗಳ ಆಡಳಿತ ವರ್ಗಕ್ಕೆ ಈಗಾಗಲೇ ಹಲವಾರು ಬಾರಿ ಗಮನಕ್ಕೆ ತರಲಾಗಿತ್ತು. ಆದರೂ ಈವರೆಗೂ ಸರ್ಕಾರ ಸ್ಪಂದಿಸಿಲ್ಲ ಎಂದು ಕಿಡಿ ಕಾರಿದ್ದರು.

ಸಾರಿಗೆ ನೌಕರರ ಬೇಡಿಕೆಗಳು

  • 38 ತಿಂಗಳಿನಿಂದ ಬಾಕಿ ಉಳಿಸಿಕೊಂಡಿರುವ ಹಣವನ್ನು ಕೂಡಲೇ ಪಾವತಿಸಬೇಕು.
  • ಶಕ್ತಿ ಯೋಜನೆಯ ಸಂಪೂರ್ಣ ಅನುದಾನವನ್ನು ಸಾರಿಗೆ ನಿಗಮಗಳಿಗೆ ತಡಮಾಡದೆ ಪಾವತಿಸಬೇಕು.
  • ನೌಕರರು ಪ್ರಸ್ತುತ ಪಡೆಯುತ್ತಿರುವ ವಿವಿಧ ಭತ್ಯೆಗಳನ್ನು ಐದು ಪಟ್ಟು ಹೆಚ್ಚಳ ಮಾಡಬೇಕು.
  • ಎಲ್ಲ ನೌಕರರಿಗೆ ಪ್ರತಿ ತಿಂಗಳೂ ಹೊರ ರೋಗಿ ಚಿಕಿತ್ಸೆ ವೆಚ್ಚಕ್ಕಾಗಿ ರೂ. 2 ಸಾವಿರ ಭತ್ಯೆ ನೀಡಬೇಕು ಮತ್ತು ಉಚಿತವಾಗಿ ಔಷಧ ಪೂರೈಸಬೇಕು.
  • ಇಎಸ್‌ಐ ಮಾದರಿಯಲ್ಲಿ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಬೇಕು.
  • ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಚಾಲಕ ಮತ್ತು ತಾಂತ್ರಿಕ ಸಿಬ್ಬಂದಿಯನ್ನು ಕಾಯಂಗೊಳಿಸಬೇಕು.
  • ನಿಗಮಗಳಲ್ಲಿ ಸಿಬ್ಬಂದಿ ನೇಮಕಾತಿಯನ್ನು ಆರಂಭಿಸಬೇಕು.
  • ನೌಕರರ ಮುಂಬಡ್ತಿಗೆ ಕ್ರಮ ತೆಗೆದುಕೊಳ್ಳಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಸಾರಿಗೆ ನೌಕರರು ಮುಂದಿಟ್ಟಿದ್ದರು.

(ವರದಿ: ಮಾರುತಿ ಎಚ್‌)

                                             ------

ಹೊಸ ವರ್ಷ ಹೇಗಿರುತ್ತೆ? ಇಲ್ಲಿದೆ 2025 ರ ರಾಶಿವಾರು ಮಾಹಿತಿ

2025 ನಿಮಗೆ ಏನೆಲ್ಲಾ ಶುಭಫಲಗಳನ್ನು ನೀಡಲಿದೆ? ಹೊಸ ವರ್ಷದಲ್ಲಿ ಬದಲಾವಣೆಗಳು, ಉದ್ಯೋಗ ಪ್ರಗತಿ, ವಿದ್ಯಾಭ್ಯಾಸ, ಪ್ರೀತಿ, ದಾಂಪತ್ಯ ಸೇರಿದಂತೆ ನೀವು ತಿಳಿಯಬಯಸುವ ಸಮಗ್ರ ಮಾಹಿತಿ ಇಲ್ಲಿದೆ. ಪ್ರತಿ ರಾಶಿಯ ಸಮಗ್ರ ವಿವರ ಇಲ್ಲಿ ಲಭ್ಯ. ನೀವು ಈವರೆಗೆ ನೋಡಿಲ್ಲ ಅಂತಾದ್ರೆ ಬೇಗ ನೋಡಿ. ಈಗಾಗಲೇ ನೋಡಿದ್ದರೆ ನಿಮ್ಮ ಆಪ್ತರಿಗೂ ಈ ಬಗ್ಗೆ ತಿಳಿಸಿ. kannada.hindustantimes.com/astrology/yearly-horoscope

Whats_app_banner