ಬಿಜೆಪಿ ಅಭ್ಯರ್ಥಿಗಳಿಂದ ಮಠ, ಟೆಂಪಲ್ ರನ್ ಶುರು; ಆದಿಚುಂಚನಗಿರಿ ಮಠಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿ ಸೋಮಣ್ಣ ಭೇಟಿ
ಮಂಡ್ಯ ಜಿಲ್ಲೆ ನಾಗಮಂಗಲದ ಆದಿಚುಂಚನಗಿರಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ಭೇಟಿ ನಿರ್ಮಲಾನಂದನಾಥ ಸ್ವಾಮೀಜಿಗಳೊಂದಿಗೆ ಚರ್ಚಿಸಿದರು. ತುಮಕೂರ ಅಭ್ಯರ್ಥಿ ವಿ ಸೋಮಣ್ಣ ಕೂಡ ಶ್ರೀಗಳನ್ನ ಭೇಟಿ ಮಾಡಿದರು.
ಮುಂಬರುವ ಲೋಕಸಭಾ ಚುನಾವಣಾ (Lok Sabha Election 2024) ಕಣಕ್ಕಿಳಿಯಲು ಸಜ್ಜಾಗುತ್ತಿರುವ ಹುರಿಯಾಳುಗಳು ಮತದಾರರ ಮನಗೆಲ್ಲಲು ಕಸರತ್ತು ನಡೆಸಿರುವುದರ ಜೊತೆ ಜೊತೆಗೆ ನಾಡಿನ ಪ್ರಭಾವಿ ಮಠಾಧಿಪತಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲು ಮುಂದಾಗಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಶ್ರೀಕ್ಷೇತ್ರ ಆದಿಚುಂಚನಗಿರಿಗೆ ಇಂದು (ಮಾರ್ಚ್ 17, ಭಾನುವಾರ) ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar) ಭೇಟಿ ನೀಡಿ, ಕಾಲಭೈರವೇಶ್ವರ ಸ್ವಾಮಿಯ ದರ್ಶನ ಪಡೆದುಕೊಂಡರು. ರಾಜವಂಶಸ್ಥ ಯದುವೀರ್ ಒಡೆಯರ್ ಅವರಿಗೆ ಮಠದ ವತಿಯಿಂದ ಪೂರ್ಣ ಕುಂಭ ಸ್ವಾಗತ ನೀಡಿ ಬರ ಮಾಡಿಕೊಳ್ಳಲಾಯಿತು.
ಸ್ವತಃ ಆದಿಚುಂಚನಗಿರಿಯ ಪೀಠಾಧಿಪತಿಗಳಾಗಿರುವ ನಿರ್ಮಲಾನಂದನಾಥ ಸ್ವಾಮೀಜಿಯವರೇ ಬಂದು ಯದುವೀರ್ ಒಡೆಯರ್ ಅವರನ್ನು ಆದರದಿಂದ ಬರಮಾಡಿಕೊಂಡಿದ್ದು, ವಿಶೇಷ ಗಮನ ಸೆಳೆಯಿತು. ಆದಿಚುಂಚಗಿರಿಯ ಕ್ಷೇತ್ರಾಧಿಪತಿ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ರಾಜವಂಶಸ್ಥ ಯದುವೀರ್ ಒಡೆಯರ್ ಅವರು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶ್ರೀಕ್ಷೇತ್ರ ಆದಿಚುಂಚನಗಿರಿಯ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿಯವರ ಜೊತೆ ಕೆಲಕಾಲ ಉಭಯಕುಶಲೋಪರಿಯಾಗಿ ಯದುವೀರ್ ಚರ್ಚೆ ನಡೆಸಿದರು.
ತುಮಕೂರು ಬಿಜೆಪಿ ಅಭ್ಯರ್ಥಿಯಿಂದಲೂ ಶ್ರೀಗಳ ಭೇಟಿ
ಈ ನಡುವೆ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಮಾಜಿ ಸಚಿವ ವಿ ಸೋಮಣ್ಣ (V Somanna) ಕೂಡ ಇಂದೇ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರಲ್ಲದೇ, ನಿರ್ಮಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡು ಕೆಲ ಸಮಯ ಶ್ರೀಗಳ ಜೊತೆ ಮಾತುಕತೆ ನಡೆಸಿದರು.
ಅಂದಹಾಗೆ ಮೈಸೂರು-ಕೊಡಗು ಮತ್ತು ತುಮಕೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಕ್ಕಲಿಗ ಸಮುದಾಯದ ಮತದಾರರು ಗಣನೀಯ ಪ್ರಮಾಣದಲ್ಲಿ ಇದ್ದಾರೆ. ಹಾಗಾಗಿ ಒಕ್ಕಲಿಗ ಸಮುದಾಯದ ಗುರುಗಳಾಗಿರುವ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಬಿಜೆಪಿ ಅಭ್ಯರ್ಥಿಗಳಾಗಿರುವ ಯದುವೀರ್ ಒಡೆಯರ್ ಹಾಗು ವಿ ಸೋಮಣ್ಣ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದು ರಾಜಕೀಯವಾಗಿಯೂ ಹೆಚ್ಚಿನ ಮಹತ್ವ ಪಡೆದುಕೊಂಡಿತು.
ಏಪ್ರಿಲ್ 19 ರಿಂದ ದೇಶದಲ್ಲಿ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4ಕ್ಕೆ ಫಲಿತಾಂಶ ಹೊರಬೀಳಲಿದೆ. ಭಾರತೀಯ ಜನತಾ ಪಾರ್ಟಿ-ಬಿಜೆಪಿ ಈಗಾಗಲೇ ಕರ್ನಾಟಕದ 20 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಟಿಕೆಟ್ ನೀಡಿಲ್ಲ. ಬದಲಾಗಿ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಟಿಕೆಟ್ ಘೋಷಣೆ ಮಾಡಿತ್ತು.