ಬಾಲಕಿಯನ್ನು ಅಪಹರಿಸಿ ಅತ್ಯಾಚಾರ: ಬೆಳಗಾವಿ ಮೇಕಳಿಯ ಹಠಯೋಗಿ ಲೋಕೇಶ್ವರ ಸ್ವಾಮೀಜಿ ಬಂಧನ
ಕನ್ನಡ ಸುದ್ದಿ  /  ಕರ್ನಾಟಕ  /  ಬಾಲಕಿಯನ್ನು ಅಪಹರಿಸಿ ಅತ್ಯಾಚಾರ: ಬೆಳಗಾವಿ ಮೇಕಳಿಯ ಹಠಯೋಗಿ ಲೋಕೇಶ್ವರ ಸ್ವಾಮೀಜಿ ಬಂಧನ

ಬಾಲಕಿಯನ್ನು ಅಪಹರಿಸಿ ಅತ್ಯಾಚಾರ: ಬೆಳಗಾವಿ ಮೇಕಳಿಯ ಹಠಯೋಗಿ ಲೋಕೇಶ್ವರ ಸ್ವಾಮೀಜಿ ಬಂಧನ

ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬೆಳಗಾವಿಯ ರಾಯಬಾಗದ ಮೇಕಳಿಯ ಹಠಯೋಗಿ ಲೋಕೇಶ್ವರ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿಯ ರಾಯಬಾಗದ ಮೇಕಳಿಯ ಹಠಯೋಗಿ ಲೋಕೇಶ್ವರ ಸ್ವಾಮೀಜಿ
ಬೆಳಗಾವಿಯ ರಾಯಬಾಗದ ಮೇಕಳಿಯ ಹಠಯೋಗಿ ಲೋಕೇಶ್ವರ ಸ್ವಾಮೀಜಿ

ಬೆಳಗಾವಿ: ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬೆಳಗಾವಿಯ ರಾಯಬಾಗ ತಾಲೂಕಿನ ಮೇಕಳಿಯ ರಾಮಲಿಂಗ ಮಠದ ಹಠಯೋಗಿ ಲೋಕೇಶ್ವರ ಸ್ವಾಮೀಜಿಯನ್ನು ಪೋಕ್ಸೊ ಮತ್ತು ಅಪಹರಣ ಪ್ರಕರಣದಲ್ಲಿ ಬಂಧಿಸಲಾಗಿದೆ. ಆರೋಪಿ ಸ್ವಾಮೀಜಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

ಪ್ರಥಮ ಪಿಯುಸಿ ಓದುತ್ತಿರುವ ವಿದ್ಯಾರ್ಥಿನಿಯನ್ನು ಮೇ 13ರಂದು ಮನೆಗೆ ಡ್ರಾಪ್ ಮಾಡುವ ನೆಪದಲ್ಲಿ ಕಾರಿನಲ್ಲಿ ಹತ್ತಿಸಿಕೊಂಡು ಹೋಗಿ, ರಾಯಚೂರಿನ ಲಾಡ್ಜ್‌ನಲ್ಲಿ ಎರಡು ದಿನ ಕೂರಿಸಿಕೊಂಡು ಬಲವಂತದಿಂದ ಅತ್ಯಾಚಾರ ಎಸಗಿದ್ದಾರೆ. ಬಳಿಕ ಮೇ 15ರಂದು ಬಾಗಲಕೋಟೆಗೆ ಕರೆತಂದು ಅಲ್ಲಿನ ಲಾಡ್ಜ್ ಒಂದರಲ್ಲಿ ಕೂಡಿ ಹಾಕಿ ಅತ್ಯಾಚಾರ ಎಸಗಿದ್ದಾರೆ. ನಂತರ ಮೇ 16ರಂದು ನಾನು ಮನೆಗೆ ಹೋಗಬೇಕೆಂದು ಅಳುತ್ತಿದ್ದ ಕಾರಣ, ಮಹಾಲಿಂಗಪುರ ಪಟ್ಟಣಕ್ಕೆ ಕರೆತಂದು ಅಲ್ಲಿನ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದಾರೆ. ಅಲ್ಲದೆ, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದರು. ಹೀಗಾಗಿ ನಾನು ಹೆದರಿಕೆಯಿಂದ ಸುಮ್ಮನೆ ಇದ್ದೆ. ನಂತರ ಮನೆಗೆ ಬಂದು ತಂದೆಯ ಬಳಿ ಸ್ವಾಮೀಜಿ ಕೃತ್ಯದ ಬಗ್ಗೆ ತಿಳಿಸಿರುವುದಾಗಿ ಬಾಲಕಿ ಹೇಳಿದ್ದಾಳೆ.

ಪ್ರಕರಣಕ್ಕೆ ಸಂಬಂಧಿಸಿ ಮೇ 21ರಂದು ಸ್ವಾಮೀಜಿಯನ್ನು ಬಂಧಿಸಲಾಗಿದೆ ಎಂದು ಬೆಳಗಾವಿ ಎಸ್‌ಪಿ ಡಾ. ಭೀಮಾಶಂಕರ ಗುಳೇದ ತಿಳಿಸಿದ್ದಾರೆ. ಬಾಲಕಿ, ಮೇ 21ರಂದು ತನ್ನ ಪಾಲಕರೊಂದಿಗೆ ಬಾಗಲಕೋಟೆಯ ಮಹಿಳಾ ಠಾಣೆಗೆ ಬಂದು ದೂರು ನೀಡಿದ್ದರು. ಅಲ್ಲಿಂದ ಮೂಡಲಗಿ ಠಾಣೆಗೆ ಪ್ರಕರಣ ವರ್ಗಾವಣೆಯಾಗಿತ್ತು. ನಂತರ ಅಲ್ಲಿ ಮೂಡಲಗಿ ಪೊಲೀಸರು ಪ್ರತ್ಯೇಕ ಎಫ್ಐ‌ಆರ್‌ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿ ತನ್ನ ತಪ್ಪು ಒಪ್ಪಿಕೊಂಡಿದ್ದು, ನಂತರ ನ್ಯಾಯಾಂಗ ಬಂಧನ ವಿಧಿಸಿರುವುದರಿಂದ ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಲೋಕೇಶ್ವರ ಸ್ವಾಮೀಜಿ ಮಠದಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಈ ಹಿಂದೆಯೂ ಗ್ರಾಮಸ್ಥರು ದೂರು ನೀಡಿದ್ದರು. ಇದೀಗ ಬಾಲಕಿಯ ಅತ್ಯಾಚಾರ ಮತ್ತು ಅಪಹರಣ ಪ್ರಕರಣದಲ್ಲಿ ಸ್ವಾಮೀಜಿ ಬಂಧನಕ್ಕೊಳಗಾದ ಬಗ್ಗೆ ಗೊತ್ತಾಗುತ್ತಿದ್ದಂತೆ, ಮಠಕ್ಕೆ ನುಗ್ಗಿದ ಸ್ಥಳೀಯರು, ಅಲ್ಲಿದ್ದ ಸೊತ್ತುಗಳನ್ನು ಹೊತ್ತೊಯ್ದಿದ್ದಾರೆ ಎಂದು ವರದಿಯಾಗಿದೆ.

Kiran Kumar I G

TwittereMail
ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in