Madikeri News:ಮಡಿಕೇರಿ ರಾಜಾಸೀಟ್ ಉದ್ಯಾನವನದಲ್ಲಿ ಇಂದಿನಿಂದ ಫಲಪುಷ್ಪ ಪ್ರದರ್ಶನ, ಪುಷ್ಪದಲ್ಲಿ ಅರಳಲಿದೆ ಓಂಕಾರೇಶ್ವರ ದೇವಸ್ಥಾನ
ಕನ್ನಡ ಸುದ್ದಿ  /  ಕರ್ನಾಟಕ  /  Madikeri News:ಮಡಿಕೇರಿ ರಾಜಾಸೀಟ್ ಉದ್ಯಾನವನದಲ್ಲಿ ಇಂದಿನಿಂದ ಫಲಪುಷ್ಪ ಪ್ರದರ್ಶನ, ಪುಷ್ಪದಲ್ಲಿ ಅರಳಲಿದೆ ಓಂಕಾರೇಶ್ವರ ದೇವಸ್ಥಾನ

Madikeri News:ಮಡಿಕೇರಿ ರಾಜಾಸೀಟ್ ಉದ್ಯಾನವನದಲ್ಲಿ ಇಂದಿನಿಂದ ಫಲಪುಷ್ಪ ಪ್ರದರ್ಶನ, ಪುಷ್ಪದಲ್ಲಿ ಅರಳಲಿದೆ ಓಂಕಾರೇಶ್ವರ ದೇವಸ್ಥಾನ

ಮಡಿಕೇರಿಯ ವಾರಾಂತ್ಯ ಪ್ರವೇಶದ ವಿಶೇಷವಾಗಿ ರಾಜಾಸೀಟ್‌ ನಲ್ಲಿ ಈ ವರ್ಷದ ಫಲಪುಷ್ಪ ಪ್ರದರ್ಶನ ಶುಕ್ರವಾರ ಆರಂಭಗೊಳ್ಳಲಿದೆ. ಇದರ ವಿವರ ಇಲ್ಲಿದೆ.

ಮಡಿಕೇರಿಯಲ್ಲಿ ಫಲಪುಷ್ಪ ಪ್ರದರ್ಶನ ಶುಕ್ರವಾರ ಆರಂಭವಾಗಲಿದೆ.
ಮಡಿಕೇರಿಯಲ್ಲಿ ಫಲಪುಷ್ಪ ಪ್ರದರ್ಶನ ಶುಕ್ರವಾರ ಆರಂಭವಾಗಲಿದೆ.

ಮಡಿಕೇರಿ: ಪ್ರತೀ ವರ್ಷದಂತೆ ಈ ಬಾರಿಯೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ರಾಜಾಸೀಟ್‌ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವು ಇದೇ ಜನವರಿ, 24 ರಿಂದ 27 ರವರೆಗೆ 4 ದಿನಗಳ ಕಾಲ ನಡೆಯಲಿದೆ. ಮಕ್ಕಳಿಗೆ ಆಕರ್ಷಣೀಯವಾಗುವ ನಿಟ್ಟಿನಲ್ಲಿ ವಿವಿಧ ಕಲಾಕೃತಿಗಳ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಕೊಡಗಿನ ಪ್ರಸಿದ್ದ ಶ್ರೀ ಓಂಕಾರೇಶ್ವರ ದೇವಸ್ಥಾನದ ಕಲಾಕೃತಿಯನ್ನು 22 ಅಡಿ ಎತ್ತರದಲ್ಲಿ 30 ಅಡಿ ಉದ್ದ, 38 ಅಡಿ ಅಗಲದಲ್ಲಿ ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಟರ್ ಜಾತಿಯ ಸುಮಾರು 5 ಲಕ್ಷ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ. ವಿವಿಧ ಅಲಂಕಾರಿಕ ಗಿಡಗಳು ಬೋನ್ಸಾಯ್ ಗಿಡಗಳ ಪ್ರದರ್ಶನ, ಇಕೆಬಾನೆ ಹೂವಿನ ಜೋಡನೆಯ ಪ್ರದರ್ಶನಗಳನ್ನು ಏರ್ಪಡಿಸಲಾಗಿದೆ. ಈ ರೀತಿಯಾಗಿ ಹದಿನಾರು ವಿವಿಧ ರೀತಿಯ ಹೂವಿನ ಕಲಾಕೃತಿಗಳನ್ನು ಒಟ್ಟು 8 ರಿಂದ 10 ಲಕ್ಷ ಸಂಖ್ಯೆಯ ಹೂವು ಬಳಸಿ ನಿರ್ಮಿಸಲಾಗಿದೆ.

ಏನೇನಿದೆ ಈ ಬಾರಿ

ಫಲಪುಷ್ಪ ಪ್ರದರ್ಶನದ ಅಂಗವಾಗಿ ಈಗಾಗಲೇ ರಾಜಾಸೀಟ್ ಉದ್ಯಾನವನದಲ್ಲಿ ಸುಮಾರು 7,000 ಸಾವಿರ ಕುಂಡಗಳಲ್ಲಿ ವಿವಿಧ ಜಾತಿಯ ಹೂವುಗಳು ಹಾಗೂ ಬೆಡ್‍ಗಳಲ್ಲಿ ಸುಮಾರು 20,000 ವಿವಿಧ ಜಾತಿಯ ಹೂವುಗಳಾದ ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಡಯಾಂಥಸ್, ಇಂಪೇಷಿಯನ್ಸ್, ವಿಂಕಾ ರೋಸಿಯಾ, ಕಾಕ್ಸ್ ಕೋಂಬ್, ಡೇಲಿಯಾ, ಇತ್ಯಾದಿಗಳನ್ನು ಪಾತಿಯಲ್ಲಿ ಹಾಗೂ ಕುಂಡಗಳಲ್ಲಿ ಬೆಳೆಯಲಾಗಿದೆ.

ಹೂ ಹಾಗೂ ಜೇನು ಹುಳುವಿನ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುವುದು. ಗಣರಾಜ್ಯೋತ್ಸವದ ಅಂಗವಾಗಿ ಯೋಧ, ಫಿರಂಗಿ ಹಾಗೂ ರಾಷ್ಟ್ರದ್ವಜದ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ. ವಿಂಟೇಜ್ ಕಾರಿನ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ.

ಪ್ರವೇಶದ್ವಾರ, ಪ್ರಾಣಿ ಮುಖದ ಕಲಾಕೃತಿಯನ್ನು ಹೂವುಗಳಿಂದ ನಿರ್ಮಾಣ ಮಾಡಲಾಗುವುದು. ಮಕ್ಕಳಿಗೆ ಮನರಂಜನೆ ನೀಡುವಂತಹ ಬಾರ್ಬಿ ಡಾಲ್, ಡೊರೆಮಾನ್, ಮೋಟು ಪಟ್ಲು ಕಲಾಕೃತಿಗಳನ್ನು ವಿವಿಧ ಹೂವುಗಳಿಂದ ಅಲಂಕರಿಸಿ ಫೋಟೋ ಫ್ರೆಮ್ ಮಾದರಿಯಲ್ಲಿ ನಿರ್ಮಿಸಲಾಗುವುದು. ವಿವಿಧ ಕ್ಷೇತ್ರಗಳ ಗಣ್ಯರು ಗಳ ಕಲಾಕೃತಿಗಳನ್ನು ಹಣ್ಣು/ತರಕಾರಿಗಳಿಂದ ಕೆತ್ತನೆ ಮಾಡಿ ಪ್ರದರ್ಶಿಸಲಾಗಿದೆ.

ಶಾಲಾ ಮಕ್ಕಳಿಗೆ ಉಚಿತ ಪ್ರವೇಶ

ಸಮವಸ್ತ್ರದಲ್ಲಿ ಬರುವ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ವಯಸ್ಕರಿಗೆ 20 ರೂ. ಪ್ರವೇಶ ಶುಲ್ಕ ನಿಗದಿಮಾಡಲಾಗಿದೆ. ಫಲಪುಷ್ಪ ಪ್ರದರ್ಶನಗಳಂದು ಬೆಳಗ್ಗೆ 8 ರಿಂದ ರಾತ್ರಿ 8.30 ಗಂಟೆವರೆಗೆ ವೀಕ್ಷಣೆ ಮಾಡಬಹುದಾಗಿದೆ ಈ ಬಾರಿ ನಾಲ್ಕು ದಿನಗಳ ಕಾಲ ಫಲಪುಷ್ಪ ಪ್ರದರ್ಶನ ನಡೆಯುತ್ತಿರುವುದು ವಿಶೇಷವಾಗಿದೆ. ಫಲಪುಷ್ಪ ಪ್ರದರ್ಶನಕ್ಕೆ ಕಳೆದ ಬಾರಿ 32 ಲಕ್ಷ ರೂ. ವೆಚ್ಚವಾಗಿದ್ದು, ಈ ವರ್ಷದಲ್ಲಿ 35 ಲಕ್ಷ ರೂ. ಅಂದಾಜು ಮಾಡಲಾಗಿದೆ ಎನ್ನುತ್ತಾರೆ ಕೊಡಗು ಜಿಲ್ಲಾಧಿಕಾರಿ ವೆಂಕಟ್‌ರಾಜಾ.

ಕರ್ನಾಟಕ ಸರ್ಕಾರದ ತೋಟಗಾರಿಕೆ ಇಲಾಖೆಯಿಂದ ರಾಜ್ಯದಲ್ಲಿ ಉತ್ಪತ್ತಿಯಾಗುವ ಜೇನುತುಪ್ಪವನ್ನು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದಿಗೊಳಿಸಿ ಮಾರಾಟ ಮಾಡುವ ಉದ್ದೇಶದಿಂದ ಝೇಂಕಾರ ಬ್ರಾಂಡ್ ಅಡಿಯಲ್ಲಿ ನೊಂದಾಯಿಸಲ್ಪಟಿದ್ದು, “ಝೇಂಕಾರ ಬ್ರಾಂಡ್ ಹಾಗೂ ಕೊಡಗು ಜೇನಿನ “ಕೂರ್ಗ್ ಹನಿ” ಮಾರಾಟ ಬ್ರ್ಯಾಂಡ್ ಗಳ ವಿವಿಧ ಕಲಾಕೃತಿಗಳನ್ನು ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ.

ಪರಿಕರಗಳ ಪ್ರದರ್ಶನ

ಫಲಪುಷ್ಪ ಪ್ರದರ್ಶನ ಪ್ರಯುಕ್ತ ನಗರದ ಗಾಂಧಿ ಮೈದಾನದಲ್ಲಿ 60 ಸಂಖ್ಯೆಯ ವಿವಿಧ ಇಲಾಖೆಗಳು, ಏಜೆನ್ಸಿಗಳು, ಸಂಸ್ಥೆಗಳು ಮಳಿಗೆಯನ್ನು ನಿರ್ಮಿಸಲಾಗಿದೆ. ಇದರಲ್ಲಿ 10 ಮಳಿಗೆಯನ್ನು ತೋಟಗಾರಿಕೆ, ಕಾಫಿ ಮಂಡಳಿ, ಕೃಷಿ, ಪಶುಪಾಲನೆ, ಮೀನುಗಾರಿಕೆ, ಹಾಪ್ಸ್, ಕೈಗಾರಿಕೆ, ವಾಣಿಜ್ಯ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಕಾಯ್ದಿರಿಸಲಾಗಿದೆ. 50 ಮಳಿಗೆಯಲ್ಲಿ ನರ್ಸರಿ ಗಿಡಗಳ ಮಾರಾಟ ಮಳಿಗೆ, ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಯಂತ್ರೋಪಕರಣಗಳ ಮಾರಾಟ ಮಳಿಗೆಗಳನ್ನು ತೆರೆಯಲಾಗಿದೆ ಎನ್ನುವುದು ತೋಟಗಾರಿಕೆ ಇಲಾಖೆ ಉಪ ನಿದೇಶಕರಾದ ಎಚ್.ಆರ್.ಯೋಗೇಶ್ ನೀಡುವ ವಿವರಣೆ.

ತೋಟಗಾರಿಕೆಯಲ್ಲಿ ಆಸಕ್ತಿಯಿರುವ ಮಹಿಳೆಯರಿಗೆ ಹಾಗೂ ಸಾರ್ವಜನಿಕರಿಗೆ ಒಣ ಹೂ ಜೋಡಣೆ, ಬಿಡಿ ಹೂಗಳ ಜೋಡಣೆ, ಇಕೆಬಾನ, ರಂಗೋಲಿ ಸ್ಪರ್ಧೆಗಳನ್ನು ರಾಜಾಸೀಟಿನ ಒಳಭಾಗದಲ್ಲಿ ಆಯೋಜಿಸಲಾಗುತ್ತಿದೆ. ಆಸಕ್ತರು ಇಂದಿನಿಂದಲೇ ಅಥವಾ ನೇರವಾಗಿ ಜನವರಿ 24 ರಂದು ಬೆಳಗ್ಗೆ 8 ಗಂಟೆಯಿಂದ ರಾಜಾಸೀಟು ಉದ್ಯಾನವನದಲ್ಲಿ (ದೂರವಾಣಿ ಸಂಖ್ಯೆ: 9448613355) ಹೆಸರು ನೋಂದಾಯಿಸಿಕೊಂಡು ಸ್ಪರ್ಧೆಗಳಲ್ಲಿ ಭಾಗವಹಿಸಬಹುದು.

Whats_app_banner