ಕನ್ನಡ ಸುದ್ದಿ  /  Karnataka  /  Manday News Boycott Of Lok Sabha Election If Road Is Not Buld For Village Basavanapura Villagers Warning Rgs

Mandya News: ಗ್ರಾಮಕ್ಕೆ ರಸ್ತೆ ನಿರ್ಮಿಸದಿದ್ದರೆ ಲೋಕಸಭೆ ಚುನಾವಣೆ ಬಹಿಷ್ಕಾರ; ಮಂಡ್ಯದ ಬಸವನಪುರ ಗ್ರಾಮಸ್ಥರ ಎಚ್ಚರಿಕೆ

ಗ್ರಾಮಕ್ಕೆ ರಸ್ತೆ ನಿರ್ಮಿಸಿಕೊಡದಿದ್ದರೆ ಲೋಕಸಭಾ ಚುನಾವಣೆಗೆ ಬಹಿಷ್ಕಾರ ಹಾಕುವುದಾಗಿ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬವಸನಪುರ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. (ವರದಿ: ರಂಗಸ್ವಾಮಿ ಪಿ)

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬವಸನಪುರ ಗ್ರಾಮಸ್ಥರು ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇವರ ಗ್ರಾಮಕ್ಕೆ ರಸ್ತೆ ನಿರ್ಮಾಣ ಮಾಡದಿರುವುದೇ ಜನರ ಈ ನಿರ್ಧಾರಕ್ಕೆ ಕಾರಣವಾಗಿದೆ.
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬವಸನಪುರ ಗ್ರಾಮಸ್ಥರು ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇವರ ಗ್ರಾಮಕ್ಕೆ ರಸ್ತೆ ನಿರ್ಮಾಣ ಮಾಡದಿರುವುದೇ ಜನರ ಈ ನಿರ್ಧಾರಕ್ಕೆ ಕಾರಣವಾಗಿದೆ.

ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆ (Lok Sabha Election 2024) ಸಮೀಪಿಸುತ್ತಿರುವುದರ ನಡುವೆಯೇ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮತದಾನ ಬಹಿಷ್ಕರಿಸುತ್ತಿರುವ ಸಂಗತಿಗಳು ಅಲ್ಲಲ್ಲಿ ಬೆಳಕಿಗೆ ಬರುತ್ತಿವೆ. ಸಮರ್ಪಕ ರಸ್ತೆ, ಕುಡಿಯುವ ನೀರು, ವಿದ್ಯುತ್ ಪೂರೈಕೆ, ಚರಂಡಿ ನಿರ್ಮಾಣ, ಸಾರಿಗೆ ಬಸ್ ಗಳ ವ್ಯವಸ್ಥೆ, ಆರೋಗ್ಯ ಕೇಂದ್ರಗಳ ಸ್ಥಾಪನೆ ಸೇರಿದಂತೆ ಜನಜೀವನಕ್ಕೆ ಅತ್ಯಗತ್ಯವಾಗಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವಂತೆ ಒತ್ತಾಯಿಸಿ ಪ್ರತಿಯೊಂದು ಚುನಾವಣೆಯ ಸಂದರ್ಭದಲ್ಲೂ ಮತದಾನ ಬಹಿಷ್ಕರಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ರಾಜ್ಯದ ಹಲವೆಡೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡದಿದ್ದರೇ ಮತದಾನ ಬಹಿಷ್ಕಾರ ಮಾಡುವುದಾಗಿ ಕೆಲವು ಗ್ರಾಮಗಳ ಮತದಾರರು ಎಚ್ಚರಿಕೆ ನೀಡಿದ್ದಾರೆ.

ಸಕ್ಕರೆನಾಡು ಮಂಡ್ಯ ಜಿಲ್ಲೆಯ ಗ್ರಾಮವೊಂದರ ಜನರು ಕೂಡ ತಮ್ಮ ಗ್ರಾಮಕ್ಕೆ ಸಂಪರ್ಕ ರಸ್ತೆ ಕಲ್ಪಿಸಿಕೊಡದ ಆಡಳಿತ ವ್ಯವಸ್ಥೆಯ ನಿಲುವು ಖಂಡಿಸಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬವಸನಪುರ ಗ್ರಾಮದ ಮತದಾರರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಬಸವನಪುರ ಗ್ರಾಮ ಗೆಜ್ಜಲಗೆರೆಯ ಮನ್ ಮುಲ್ ಡೈರಿ ಎದುರಿಗಿದ್ದರೂ ಸಹ ಸಂಪರ್ಕ ರಸ್ತೆ ನಿರ್ಮಿಸಿಲ್ಲ‌.

ತಮ್ಮ ಗ್ರಾಮಕ್ಕೆ ಸಂಪರ್ಕ ರಸ್ತೆ ಕಲ್ಪಿಸಿ ಕೊಡುವಂತೆ ಕಳೆದ ‌ನಲವತ್ತು ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತಾ ಬಂದಿದ್ದರೂ ಕೂಡ ಈ ಭಾಗದ ಜನಪ್ರತಿನಿಧಿಗಳಾಗಲಿ, ಜಿಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳಾಗಲಿ ಸ್ಪಂದಿಸಿಲ್ಲ. ಹಾಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುತ್ತೇವೆಂದು ಬಸವನಪುರ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಬಸವನಪುರ ಗ್ರಾಮದಲ್ಲಿ 700 ಮತದಾರರಿದ್ದಾರೆ. ಈ ಎಲ್ಲಾ ಮತದಾರರು ಒಂದೆಡೆ ಸೇರಿ ಚರ್ಚಿಸಿದ್ದಾರೆ. ಲೋಕಸಭಾ ಚುನಾವಣೆ ದಿನಾಂಕದೊಳಗಾದರೂ ತಮ್ಮ ಗ್ರಾಮಕ್ಕೆ ಸಂಪರ್ಕ ರಸ್ತೆ ಕಲ್ಪಿಸಿಕೊಡಬೇಕು. ಇಲ್ಲದಿದ್ದರೆ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುತ್ತೇವೆಂದು ಹೇಳಿದ್ದಾರೆ.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು 1 ಕೋಟಿ ಹಣ ಜಪ್ತಿ

ಯಾವುದೆ ದಾಖಲೆಗಳಿಲ್ಲದೆ ಕೊಂಡೊಯ್ಯುತ್ತಿದ್ದ ಬರೋಬ್ಬರಿ ತೊಂಬತ್ತೊಂಬತ್ತು ಲಕ್ಷದ ಇಪ್ಪತ್ತು ಸಾವಿರ ನಗದು (99,20,000) ಹಣವನ್ನು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನಿಡಘಟ್ಟ ಚೆಕ್ ಪೋಸ್ಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ. ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಎರಡೇ ದಿನಕ್ಕೆ ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ವಶಪಡಿಸಿಕೊಂಡ ದೊಡ್ಡ ಮೊತ್ತ ಇದಾಗಿದೆ.

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ನಿಡಘಟ್ಟ ಚೆಕ್ ಪೋಸ್ಟ್ ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದ ವೇಳೆ ಇಷ್ಟೊಂದು ದೊಡ್ಡ ಮೊತ್ತದ ಹಣ ಪತ್ತೆಯಾಗಿತ್ತು. ಈ ಸಂಬಂಧ ಹಣ ಸಾಗಿಸುತ್ತಿದ್ದ ಗಿರೀಶ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಮಾರ್ಚ್ 16ರ ಶನಿವಾರ ಮುಖ್ಯ ಚುನಾವಣಾ ಆಯೋಕ್ತ ರಾಜೀವ್ ಕುಮಾರ್ ಅವರು ದೇಶದಲ್ಲಿ 7 ಹಂತಗಳ ಚುನಾವಣಾ ದಿನಾಂಕವನ್ನು ಪ್ರಕಟಿಸಿದ್ದರು. ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. (ವರದಿ: ರಂಗಸ್ವಾಮಿ ಪಿ)