ಮಂಗಳೂರಿನಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ
ಕನ್ನಡ ಸುದ್ದಿ  /  ಕರ್ನಾಟಕ  /  ಮಂಗಳೂರಿನಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

ಮಂಗಳೂರಿನಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

Mangaluru acid attack: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಅವರಣದಲ್ಲಿ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯೋರ್ವಳ ಮೇಲೆ ಕಾಲೇಜು ಆವರಣದಲ್ಲೇ ಆ್ಯಸಿಡ್​ ಎರಚಿದ್ದಾನೆ. ಈ ವೇಳೆ ಪಕ್ಕದಲ್ಲಿದ್ದ ಮತ್ತಿಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್​ ತಗುಲಿ ಗಾಯಗೊಂಡಿದ್ದಾರೆ.

ಆ್ಯಸಿಡ್ ದಾಳಿ (ಪ್ರಾತಿನಿಧಿಕ ಚಿತ್ರ)
ಆ್ಯಸಿಡ್ ದಾಳಿ (ಪ್ರಾತಿನಿಧಿಕ ಚಿತ್ರ)

ಮಂಗಳೂರು: ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಅವರಣದಲ್ಲಿ ಇಂದು (ಮಾ 4, ಸೋಮವಾರ) ಬೆಳಗ್ಗೆ ನಡೆದಿದೆ. ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯೋರ್ವಳ ಮೇಲೆ ಕಾಲೇಜು ಆವರಣದಲ್ಲೇ ಆ್ಯಸಿಡ್​ ಎರಚಿದ್ದಾನೆ. ಈ ವೇಳೆ ಪಕ್ಕದಲ್ಲಿದ್ದ ಮತ್ತಿಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್​ ತಗುಲಿದೆ. ಗಾಯಗೊಂಡಿರುವ ಮೂವರೂ ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿಯನ್ನು ಕೇರಳದ ಮಲ್ಲಪುರಂ ಜಿಲ್ಲೆಯ 23 ವರ್ಷದ ಯುವಕ ಎಂದು ಗುರುತಿಸಲಾಗಿದೆ. ಈತನನ್ನು ಇತರ ವಿದ್ಯಾರ್ಥಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಮತ್ತು ಆ್ಯಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿ ಒಂದೇ ಕೋಮಿಗೆ ಸೇರಿದವರಾಗಿದ್ದಾರೆ. ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಆರೋಪಿ ಈ ಕೃತ್ಯ ನಡೆಸಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಘಟನೆಯನ್ನು ಖಂಡಿಸಿ ಟ್ವೀಟ್​ ಮಾಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, "ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಸರ್ಕಾರಿ ಪಿಯು ಕಾಲೇಜಿನ ಹೆಣ್ಣು ಮಕ್ಕಳ ಮೇಲೆ ಆಸಿಡ್ ಎರಚಿರುವ ಘಟನೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿರುವುದಕ್ಕೆ ಕೈಗನ್ನಡಿಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಗಾಯಾಳು ಹೆಣ್ಣುಮಕ್ಕಳು ಅಪಾಯದಿಂದ ಪಾರಾಗಲಿ ಎಂದು ಪ್ರಾರ್ಥಿಸುತ್ತೇನೆ" ಎಂದಿದ್ದಾರೆ.

Whats_app_banner