Coastal Karnataka Rains: ಕರಾವಳಿಯಲ್ಲಿ ಮಳೆ ಸದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮತ್ತೆ ಮುಂಗಾರು
ಕರಾವಳಿ ಕರ್ನಾಟಕ ಭಾಗದಲ್ಲಿ ಮತ್ತೆ ಮಳೆಯ ಸಂಭ್ರಮ. ಮಳೆ ಕೊರತೆ ಕಾಡುತ್ತಿದ್ದ ಪ್ರದೇಶಗಳಲ್ಲೂ ಮಳೆಯಾಗುತ್ತಿರುವ ಕಾರಣ ಮತ್ತೆ ಮುಂಗಾರಿನ ಸಂಭ್ರಮ ಕಾಣಿಸಿಕೊಂಡಿದೆ. ಅಕ್ಟೋಬರ್ 2ರ ತನಕ ಮಳೆ ಬರುವ ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಶುಕ್ರವಾರ ಎಂದಿಗಿಂತ ಜಾಸ್ತಿಯೇ ಸುರಿಯುತ್ತಿದ್ದು, ಮುಂಗಾರು ನೆನಪಿಸುವಂಥ ಮಳೆಯಾಗುತ್ತಿದೆ.
ಟ್ರೆಂಡಿಂಗ್ ಸುದ್ದಿ
ಇನ್ನು ಉತ್ತರಕನ್ನಡ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆ ಸುರಿಯಲಾರಂಭಿಸಿದೆ. ಮುಂಜಾನೆಯಿಂದಲೇ ಗಾಳಿ ಸಹಿತ ಭಾರಿ ಮಳೆ ಆರ್ಭಟಿಸುತ್ತಿದ್ದು ಕೆಲ ತಗ್ಗು ಪ್ರದೇಶಗಳು ಜಲಾವೃತಗೊಳ್ಳತೊಡಗಿದೆ. ಕಳೆದ ನಾಲ್ಕೈದು ದಿನಗಳಿಂದ ಸಣ್ಣ ಪ್ರಮಾಣದಲ್ಲಿ ಸುರಿಯುತ್ತಿದ್ದ ಮಳೆ ಇಂದು ಮುಂಜಾನೆಯಿಂದಲೇ ಜೋರಾಗಿದೆ. ಜಿಲ್ಲೆಯ ಕರಾವಳಿ ಹಾಗೂ ಮಲೆನಾಡು ತಾಲ್ಲೂಕುಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಕಳೆದ ಮೂರು ದಿನಗಳಿಂದ ಕೆಲ ಭಾಗಗಳಲ್ಲಿ ಮಳೆಯಾಗುತ್ತಿದೆ. ಆದ್ದರಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸೇರಿ ಕರಾವಳಿ ಕರ್ನಾಟಕದಲ್ಲಿ ಆರೆಂಜ್ ಅಲರ್ಟ್ ಅನ್ನು ಭಾರತೀಯ ಹವಾಮಾನ ಇಲಾಖೆ ಘೋಷಿಸಿದೆ.
ಕರಾವಳಿ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಶುಕ್ರವಾರವೂ ಮುಂದುವರಿದಿದೆ. ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸೆಪ್ಟೆಂಬರ್ 30 ಮಧ್ಯಾಹ್ನದವರೆಗೆ ಆರೆಂಜ್ ಅಲರ್ಟ್, ಅಕ್ಟೋಬರ್ 1ರ ಭಾನುವಾರ ಮತ್ತು ಅಕ್ಟೋಬರ್ 2ರ ಸೋಮವಾರ ಹಳದಿ ಅಲರ್ಟ್ ಘೋಷಣೆಯಾಗಿದೆ.
ಅರಬ್ಬಿ ಸಮುದ್ರದಲ್ಲಿ ಕಡಿಮೆ ವಾಯುಭಾರ ಕುಸಿತದಿಂದಾಗಿ ಈ ರೀತಿಯ ಮಳೆಯಾಗುತ್ತಿದೆ. ಇದು ಕೆಲವು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ. ಇದರ ಜತೆಯಲ್ಲಿ ಗಾಳಿಯ ಒತ್ತಡ 40ರಿಂ 60 ಕಿ.ಮೀ ಸಾಗುವುದರಿಂದಲ್ಲೂ ಕೆಲವು ಭಾಗದಲ್ಲಿ ಉತ್ತಮ ಮಳೆಯ ನಿರೀಕ್ಷಿಸಬಹುದು ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.
ಆಳ ಸಮುದ್ರ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಮುನ್ನೆಚ್ಚರಿಕೆ
ಕರಾವಳಿ ಕರ್ನಾಟಕ ಭಾಗದಲ್ಲಿ ಮಳೆ ಮುನ್ಸೂಚನೆ ನೀಡಿರುವ ಭಾರತೀಯ ಹವಮಾನ ಇಲಾಖೆ, ಆಳ ಸಮುದ್ರ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಿದೆ. ಸೆ.29ರಿಂದ ಅಕ್ಟೋಬರ್ 2ರ ವರೆಗೆ ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತ ಉಂಟಾಗಿದ್ದು, ಅದು ಚಂಡ ಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ಅದು ಹೇಳಿದೆ.
ಇದೇ ವೇಳೆ, ಹವಾಮಾನ ಇಲಾಖೆ ಮುನ್ಸೂಚನೆಯನ್ನು ಉಲ್ಲೇಖಿಸಿರುವ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು, ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.