ಮುಡಾ ಕೇಸ್ ಸಿಬಿಐಗೆ ವಹಿಸುವಂತೆ ಸ್ನೇಹಮಯಿ ಕೃಷ್ಣ ಮೇಲ್ಮನವಿ ವಿಚಾರಣೆಗೆತ್ತಿಕೊಂಡ ಕರ್ನಾಟಕ ಹೈಕೋರ್ಟ್, ಸಿಎಂ ಸಿದ್ದರಾಮಯ್ಯಗೆ ನೋಟಿಸ್
ಮುಡಾ ಕೇಸ್ ಸಿಬಿಐಗೆ ವಹಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಗೆತ್ತಿಕೊಂಡ ಕರ್ನಾಟಕ ಹೈಕೋರ್ಟ್, ಸಿಎಂ ಸಿದ್ದರಾಮಯ್ಯ ಮತ್ತು ಇತರರಿಗೆ ನೋಟಿಸ್ ಜಾರಿಗೊಳಿಸಿದೆ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದ ಸೈಟು ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಮಧ್ಯಂತರ ತನಿಖಾ ವರದಿಯ ಬಿ ರಿಪೋರ್ಟ್ ವಿರುದ್ಧ ತಕರಾರು ಅರ್ಜಿಗಳನ್ನು ವಿಶೇಷ ಕೋರ್ಟ್ ಸ್ವೀಕರಿಸಿತ್ತು. ಅದರ ವಿಚಾರಣೆ ಮುಂದುವರಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿತ್ತು. ಇಂದು (ಏಪ್ರಿಲ್ 16) ಮುಡಾ ಸೈಟು ಹಂಚಿಕೆ ಅಕ್ರಮದ ಕೇಸ್ ಅನ್ನು ಸಿಬಿಐಗೆ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡ ಕರ್ನಾಟಕ ಹೈಕೋರ್ಟ್, ಸಿಎಂ ಸಿದ್ದರಾಮಯ್ಯ ಮತ್ತು ಇತರರಿಗೆ ನೋಟಿಸ್ ಜಾರಿಗೊಳಿಸಿದೆ. ವಿಚಾರಣೆಯನ್ನು ಏಪ್ರಿಲ್ 28ಕ್ಕೆ ಮುಂದೂಡಿದೆ.
ಮುಡಾ ಕೇಸ್ ಸಿಬಿಐಗೆ ವಹಿಸುವಂತೆ ಸ್ನೇಹಮಯಿ ಕೃಷ್ಣ ಮೇಲ್ಮನವಿ ವಿಚಾರಣೆಗೆತ್ತಿಕೊಂಡ ಹೈಕೋರ್ಟ್
ತಮ್ಮ ಪತ್ನಿ ಹೆಸರಿಗೆ ಅಕ್ರಮವಾಗಿ ನಿವೇಶನ ಪಡೆದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್‌ನ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡ ಹೈಕೋರ್ಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರಿಗೆ ನೋಟಿಸ್ ಜಾರಿಗೊಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರು ಆರೋಪಿಗಳಾಗಿರುವ ಮುಡಾ ಸೈಟು ಹಂಚಿಕೆ ಅಕ್ರಮದ ತನಿಖೆಯನ್ನು ಸಿಬಿಐ ಅಥವಾ ಇತರ ಸ್ವತಂತ್ರ ತನಿಖಾ ಸಂಸ್ಥೆಯಿಂದಲೇ ತನಿಖೆ ಮಾಡಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಿಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ನ್ಯಾಯಪೀಠ ಈ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿತು.
ಮುಡಾ ಕೇಸ್‌ನಲ್ಲಿ ಕೇಂದ್ರ ಸರ್ಕಾರ, ಸಿಬಿಐ, ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಜಮೀನಿನ ಮೂಲ ಮಾಲೀಕ ದೇವರಾಜು ಅವರು ಪ್ರತಿವಾದಿಗಳು. ಅವರಿಗೂ ಕೋರ್ಟ್ ನೋಟಿಸ್ ಜಾರಿಯಾಗಿದೆ.
ಏನಿದು ಮುಡಾ ಕೇಸ್, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರೋಪವೇನು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂಬರ್ 464 ರ 3 ಎಕರೆ 16 ಗುಂಟೆ ಜಮೀನಿನ ಬದಲಿಗೆ ಸುಮಾರು 56 ಕೋಟಿ ಮೌಲ್ಯದ 14 ನಿವೇಶನಗಳನ್ನು ಅಕ್ರಮವಾಗಿ ನೀಡಲಾಗಿದೆ. ಇದರಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದು, ಅಧಿಕಾರಿಗಳ ಮೇಲೆ ಪ್ರಭಾವ ಬೀರಿದ್ದಾರೆ ಎಂಬುದು ಆರೋಪ. ಈ ಸಂಬಂಧ ತನಿಖೆ/ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕು ಎಂದು ಕೋರಿ ಸ್ನೇಹಮಯಿ ಕೃಷ್ಣ ಸೇರಿದಂತೆ ಮೂವರು ಸಾಮಾಜಿಕ ಕಾರ್ಯಕರ್ತರು 2024ರ ಜೂನ್-ಜುಲೈನಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿದ ರಾಜ್ಯಪಾಲರು ಪ್ರಕರಣದ ತನಿಖೆ/ಪ್ರಾಸಿಕ್ಯೂಷನ್ಗೆ ಆಗಸ್ಟ್ 17 ರಂದು ಅನುಮತಿ ನೀಡಿದ್ದರು. ಅದನ್ನು ಪ್ರಶ್ನಿಸಿ ಮುಖ್ಯಮಂತ್ರಿಗಳು ಆಗಸ್ಟ್ 19ರಂದು ಸಲ್ಲಿಸಿದ್ದ ತಕರಾರು ಅರ್ಜಿ ತಿರಸ್ಕರಿಸಿದ ಹೈಕೋರ್ಟ್, ಸೆಪ್ಟೆಂಬರ್ 24ರಂದು ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು. ಇದರ ವಿಚಾರಣೆ ವಿಶೇಷ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಲೋಕಾಯುಕ್ತ ಪೊಲೀಸರು ಮಧ್ಯಂತರ ತನಿಖಾವರದಿ ಸಲ್ಲಿಸಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದರ ವಿಚಾರಣೆ ನಿನ್ನೆ (ಏಪ್ರಿಲ್ 15) ನಡೆದಿದ್ದು, ಲೋಕಾಯುಕ್ತ ತನಿಖೆ ಪೂರ್ಣಗೊಳಿಸಲು ಕೋರ್ಟ್ ಆದೇಶಿಸಿ ಮೇ 4ಕ್ಕೆ ಮುಂದಿನ ವಿಚಾರಣೆ ಎಂದು ಹೇಳಿತ್ತು.
ಈ ನಡುವೆ, ಲೋಕಾಯುಕ್ತ ತನಿಖೆಯ ಆದೇಶ ಹೊರಬಿದ್ದ ಕೂಡಲೇ ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಎಫ್ಐಆರ್ ದಾಖಲಾದ ದಿನವೇ ಅಂದರೆ ಸೆಪ್ಟೆಂಬರ್ 27ರಂದು ಮುಡಾ ಸೈಟು ಹಂಚಿಕೆ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಹೈಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠ, ಅದನ್ನು ವಜಾಗೊಳಿಸಿ ಆದೇಶಿಸಿತ್ತು. ಈ ಕ್ರಮ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅದು ಈಗ ವಿಚಾರಣೆಗೆ ಬಂದಿದೆ.
