ED Case Against Siddaramaiah:ಮುಡಾ ಪ್ರಕರಣ, ಸಿದ್ದರಾಮಯ್ಯ ವಿರುದ್ದ ಇಡಿ ಪ್ರಕರಣ ದಾಖಲು; ಆಸ್ತಿ ಮುಟ್ಟುಗೋಲು, ಸಮನ್ಸ್ ಜಾರಿ ಸಾಧ್ಯತೆ
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಸದ್ಯ ಕಾನೂನು ಕುಣಿಕೆಯಿಂದ ತಪ್ಪಿಸಿಕೊಳ್ಳುವ ಸಾಧ್ಯತೆ ಕಡಿಮೆ. ಏಕೆಂದರೆ ಸಿಎಂ ವಿರುದ್ದ ಈಗ ಇಡಿಯಲ್ಲೂ ಪ್ರಕರಣ ದಾಖಲಾಗಿದೆ.ವರದಿ: ಎಚ್.ಮಾರುತಿ. ಬೆಂಗಳೂರು
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ 76 ವರ್ಷದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ, ಭಾವಮೈದುನ ಸೇರಿದಂತೆ ನಾಲ್ವರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದು ಸೋಮವಾರದಿಂದ ವಿಚಾರಣೆ ಆರಂಭವಾಗಿದೆ. ಇದೇ ಮುಡಾ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಕುರಿತು ಜಾರಿ ನಿರ್ದೆಶನಾಲಯವೂ ಪ್ರಕರಣ ದಾಖಲಿಸಿಕೊಂಡಿದೆ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ.
ಜಾರಿ ನಿರ್ದೇಶನಾಲಯವೂ ಮುಖ್ಯಮಂತ್ರಿ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಿದೆ ಎನ್ನುವ ಮಾಹಿತಿ ಸಂಜೆವರೆಗೂ ಇತ್ತಾದರೂ ಸೋಮವಾರ ಸಂಜೆ ಅಧಿಕೃತವಾಗಿ ಪ್ರಕರಣ ದಾಖಲಾಗಿದೆ. ಲೋಕಾಯುಕ್ತ ಎಫ್ ಐ ಆರ್ ಆಧರಿಸಿ ಜಾರಿ ಪ್ರಕರಣ ಮಾಹಿತಿ ವರದಿ ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದದೆ. ಲೋಕಾಯುಕ್ತ ದಾಖಲಿಸಿರುವ ಎಫ್ ಐ ಆರ್ ನ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದ್ದು, ಇದೇ ಆಧಾರದಲ್ಲಿ ಪ್ರಕರಣ ದಾಖಲಿಸಕೊಂಡಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೈಸೂರು ಮುಡಾ ಪ್ರಕರಣದ ಅಕ್ರಮಗಳನ್ನು ಕುರಿತು ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ. ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯಿದೆ (ಪಿಎಂಎಲ್ ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಯಿತು ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.
ಒಮ್ಮೆ ಪ್ರಕರಣ ದಾಖಲಾದ ನಂತರ ಮುಖ್ಯಮಂತ್ರಿಗಳು ಮತ್ತು ಅವರ ಕುಟುಂಬದ ಸದಸ್ಯರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದೂ ಸೇರಿದಂತೆ ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ನಿಯಮಗಳ ಪ್ರಕಾರ ಮುಖ್ಯಮಂತ್ರಿ ಸೇರಿದಂತೆ ಎಲ್ಲ ಆರೋಪಿಗಳಿಗೆ ಸಮನ್ಸ್ ನೀಡಿ ವಿಚಾರಣೆ ನಡೆಸಲಿದೆ.
ಇದೇ ವರ್ಷದ ಆರಂಭದಲ್ಲಿ ಇಬ್ಬರು ಮುಖ್ಯಮಂತ್ರಿಗಳ ವಿರುದ್ಧವೂ ಇಡಿ ಕ್ರಮ ಕೈಗೊಂಡಿತ್ತು. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಪ್ರಕರಣ ದಾಖಲಿಸಿತ್ತು. ಜಾರಿ ನಿರ್ದೇಶನಾಲಯ ಇಬ್ಬರು ಮುಖ್ಯಮಂತ್ರಿಗಳನ್ನು ಬಂಧಿಸಿತ್ತು. ಹಲವಾರು ತಿಂಗಳ ಕಾಲ ಜೈಲಿನಲ್ಲಿದ್ದ ಇಬ್ಬರೂ ಇತ್ತೀಚೆಗೆ ಜಾಮೀನು ಪಡೆದು ಬಿಡುಗಡೆಯಾಗಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.
2021ರಲ್ಲಿ ಮುಡಾದಿಂದ ಅಕ್ರಮವಾಗಿ 14 ನಿವೇಶನಗಳನ್ನು ಪಡೆದುಕೊಂಡಿರುವ ಹಗರಣಕ್ಕೆ ಸಂಬಂಧಿಸಿದಂತೆ ಸೆಪ್ಟಂಬರ್ 27ರಂದು ಲೋಕಾಯುಕ್ತ ಎಫ್ ಐ ಆರ್ ದಾಖಲಿಸಿತ್ತು. ಶನಿವಾರ ಭಾನುವಾರ ರಜೆ ಇದ್ದ ಕಾರಣ ಇಂದಿನಿಂದ ಮೈಸೂರು ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಭಾವಮೈದುನ ಮಲ್ಲಿಕಾರ್ಜುನ ಸ್ವಾಮಿ ಮತ್ತು ಭೂ ಮಾಲೀಕ ದೇವರಾಜು ವಿರುದ್ಧ ಎಫ್ ಆರ್ ದಾಖಲಾಗಿದೆ.
ಸೆಪ್ಟಂಬರ್ 24ರಂದು ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭ್ರಷ್ಟಾಚಾರ ನಿಯಂತ್ರಣ ಕಾಯಿದೆ 17 ಎ ಅಡಿಯಲ್ಲಿ ಅನುಮತಿ ನೀಡಿದ್ದರು. ಲೋಕಾಯುಕ್ತ ಎಫ್ ಐ ಆರ್ ದಾಖಲಿಸಿದ ನಂತರ ಸ್ನೇಹಮಯಿ ಕೃಷ್ಣ ಅವರು ಜಾರಿ ನಿರ್ದೇಶನಾಲಯಕ್ಕೆ ದೂರು ಸಲ್ಲಿಸಿದ್ದರು. ಈ ದೂರಿನನ್ವಯ ಇಡಿಯು ಪ್ರಕರಣ ದಾಖಲಿಸುವ ಹಂತದಲ್ಲಿದೆ ಎಂದು ತಿಳಿದು ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಪದೇ ಪದೇ ಹೇಳುತ್ತಿದ್ದಾರೆ.
ಪ್ರತಿಪಕ್ಷ ಬಿಜೆಪಿ ಮತು ಜೆಡಿಎಸ್ ರಾಜೀನಾಮೆ ಕೇಳುವುದನ್ನು ಮುಂದುವರೆಸಿವೆ. ಇಡಿ ಪ್ರಕರಣ ದಾಖಲಿಸಕೊಂಡಿದ್ದು, ಮುಡಾ ಪ್ರಕರಣ ಯಾವ ತಿರುವ ಕಳೆದುಕೊಳ್ಳಲಿದೆ ಎಂದು ಕಾದುನೋಡಬೇಕಿದೆ.
(ವರದಿ: ಎಚ್.ಮಾರುತಿ, ಬೆಂಗಳೂರು)