ಮುಡಾ ಹಗರಣ: ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ನ. 26ಕ್ಕೆ ಮುಂದೂಡಿಕೆ; ಸಿಎಂ ಆದಿಯಾಗಿ ಎಲ್ಲರಿಗೂ ನೋಟಿಸ್ ಜಾರಿ
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದಿರುವ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಸಲ್ಲಿಸುವ ಅರ್ಜಿಯ ಆಧರಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಇತರರಿಗೆ ನೋಟಿಸ್ ನೀಡಲು ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ.ವರದಿ: ಎಚ್.ಮಾರುತಿ.ಬೆಂಗಳೂರು
ಬೆಂಗಳೂರು: ಮೈಸೂರು ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮನವಿ ಮಾಡಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ. ಈ ಪ್ರಕರಣದಲ್ಲಿ ಸಿಬಿಐ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಲು ಆದೇಶಿಸಲಾಗಿದೆ. ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕ ಸದಸ್ಯ ಪೀಠದಲ್ಲಿ ಇಂದು ವಿಚಾರಣೆ ನಡೆಯಿತು. ಸ್ನೇಹಮಯಿ ಕೃಷ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆಜಿ ರಾಘವನ್, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿದ್ದೇವೆ ಎಂದರು. ಈ ವೇಳೆ ಲೋಕಾಯುಕ್ತ ಪೊಲೀಸರು ತನಿಖೆ ಮಾಡುತ್ತಿಲ್ಲವೇ ಎಂದು ನ್ಯಾ. ನಾಗಪ್ರಸನ್ನ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ರಾಘವನ್, ಲೋಕಾಯುಕ್ತ ತನಿಖೆಯನ್ನು ನಂಬುವಂತಿಲ್ಲ. ಈ ಪ್ರಕರಣದ ಫಲಿತಾಂಶ ಏನೇ ಬಂದರೂ ಸಾರ್ವಜನಿಕರ ವಿಶ್ವಾಸವನ್ನು ಉಳಿಸಿಕೊಂಡು ತನಿಖೆ ನಡೆಸುವ ಅಗತ್ಯವಿದೆ. ಆದ್ದರಿಂದ ಸಾರ್ವಜನಿಕರ ನಂಬಿಕೆ ಉಳಿಯುವಂತೆ ಮಾಡಲು ಸಿಬಿಐಗೆ ವಹಿಸಲು ಆದೇಶ ನೀಡಬೇಕು ಎಂದು ಕೋರಿದರು.
ಈ ನಡುವೆ ರಾಜ್ಯ ಅಭಿಯೋಜಕ ಜಗದೀಶ್ ಎರಡು ವಾರ ಕಾಲಾವಕಾಶ ಕೋರಿದರು. ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನ್ಯಾಯಮೂರ್ತಿಗಳು ನ. 26ಕ್ಕೆ ಮುಂದೂಡಿದರು. ಹಾಗೆಯೇ ನವೆಂಬರ್ 25ರವರೆಗೆ ನಡೆದಿರುವ ತನಿಖೆ ವಿವರ ಒದಗಿಸಲು ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿದರು.
ಪ್ರಕರಣದ ಪ್ರತಿವಾದಿಗಳಾದ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ, ಸಿಬಿಐ ನಿರ್ದೇಶಕ, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ವಿಜಯನಗರ ಪೊಲೀಸ್ ಠಾಣಾಧಿಕಾರಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ. ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ ಮತ್ತು ಜೆ.ದೇವರಾಜು ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶ ಹೊರಡಿಸಿದೆ.
ಸಿಬಿಐ ಪರ ಪಿ. ಪ್ರಸನ್ನಕುಮಾರ್, ರಾಜ್ಯ ಸರ್ಕಾರದ ಪರವಾಗಿ ರಾಜ್ಯದ ಹೆಚ್ಚುವರಿ ಪ್ರಾಸಿಕ್ಯೂಟರ್ ಜಗದೀಶ್ ಕುಮಾರ್ ನೋಟಿಸ್ ಪಡೆದುಕೊಂಡರು. ಪ್ರಕರಣದ ಮೊದಲ ಆರೋಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿ ಉಳಿದೆಲ್ಲಾ ಆರೋಪಿಗಳಿಗೆ ತುರ್ತು ನೋಟಿಸ್ ನೀಡುವಂತೆ ನ್ಯಾಯಮೂರ್ತಿಗಳು ಆದೇಶಿಸಿದರು.
ಸಿದ್ದರಾಮಯ್ಯ ಅವರು ತಮ್ಮ ಪತ್ನಿಗೆ ಮುಡಾದಿಂದ 14 ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಲೋಕಾಯುಕ್ತ ಹಾಗೂ ಇಡಿ ತನಿಖೆ ಎದುರಿಸುತ್ತಿದ್ದಾರೆ. ಪಾರ್ವತಿ ಅವರನ್ನು ಇತ್ತೀಚೆಗೆ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದರು.
2021ರಲ್ಲಿ ಮುಡಾದಿಂದ ಅಕ್ರಮವಾಗಿ 14 ನಿವೇಶನಗಳನ್ನು ಪಡೆದುಕೊಂಡಿರುವ ಹಗರಣಕ್ಕೆ ಸಬಂಧಿಸಿದಂತೆ ಸೆಪ್ಟಂಬರ್ 27ರಂದು ಲೋಕಾಯುಕ್ತ ಎಫ್ ಐ ಆರ್ ದಾಖಲಿಸಿತ್ತು. ಆರ್ ಟಿ ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ,
ಅವರ ಪತ್ನಿ ಪಾರ್ವತಿ, ಭಾವಮೈದುನ ಮಲ್ಲಿಕಾರ್ಜುನ ಸ್ವಾಮಿ ಮತ್ತು ಭೂ ಮಾಲೀಕ ದೇವರಾಜು ವಿರುದ್ಧ ಎಫ್ ಆರ್ ದಾಖಲಾಗಿದೆ.
ಸೆಪ್ಟಂಬರ್ 24ರಂದು ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭ್ರಷ್ಟಾಚಾರ ನಿಯಂತ್ರಣ ಕಾಯಿದೆ 17 ಎ ಅಡಿಯಲ್ಲಿ ಅನುಮತಿ ನೀಡಿದ್ದರು. ಲೋಕಾಯುಕ್ತ ಎಫ್ ಐ ಆರ್ ದಾಖಲಿಸಿದ ನಂತರ ಸ್ನೇಹಮಯಿ ಕೃಷ್ಣ ಅವರು ಜಾರಿ ನಿರ್ದೇಶನಾಲಯಕ್ಕೆ ದೂರು ಸಲ್ಲಿಸಿದ್ದರು. ಈ ದೂರಿನನ್ವಯ ಇಡಿಯು ಪ್ರಕರಣ ದಾಖಲಿಸುವ ಹಂತದಲ್ಲಿದೆ ಎಂದು ತಿಳಿದು ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಪದೇ ಪದೇ ಹೇಳುತ್ತಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ತಮ್ಮ ಪತ್ನಿ ಪಾರ್ವತಿ ಅವರಿಗೆ ಬೆಳೆ ಬಾಳುವ 14 ನಿವೇಶನಗಳನ್ನು ಹಂಚಿಕೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾ ಪ್ರಬಾವ ಬೀರಿದ್ದಾರೆ. ಆದ್ದರಿಂದ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬೇಕು ಎಂದು ಪ್ರದೀಪ್ ಕುಮಾರ್, ಟಿ.ಜೆ.ಅಬ್ರಹಾಂ ಮತ್ತು ಸ್ನೇಹಮಯಿ ಕೃಷ್ಣ ಅವರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು.
1988ರ ಭ್ರಷ್ಟಾಚಾರ ನಿಗ್ರಹ ಕಾಯಿದೆ 17ಎ ಮತ್ತು ಭಾರತೀಯ ನ್ಯಾಯ ಸಂಹಿತೆ 2023ರ ಸೆ.218ರ ಅಡಿಯಲ್ಲಿ ರಾಜ್ಯಪಾಲರು ಆಗಸ್ಟ್ 16 ರಂದು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು.
(ವರದಿ: ಎಚ್. ಮಾರುತಿ, ಬೆಂಗಳೂರು)