ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳ ಆರೋಪ; ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ಬಲಿ, ರೈತ ಆತ್ಮಹತ್ಯೆ
ಕನ್ನಡ ಸುದ್ದಿ  /  ಕರ್ನಾಟಕ  /  ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳ ಆರೋಪ; ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ಬಲಿ, ರೈತ ಆತ್ಮಹತ್ಯೆ

ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳ ಆರೋಪ; ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ಬಲಿ, ರೈತ ಆತ್ಮಹತ್ಯೆ

ರಾಜ್ಯದಲ್ಲಿ ಮೈಕ್ರೊಫೈನಾನ್ಸ್‌ಗಳಿಗೆ ಮೂಗುದಾರ ಹಿಡಿಯಲು ರಾಜ್ಯಸರ್ಕಾರವು ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ತರಲು ಅಂತಿಮ ಹಂತದ ಸಿದ್ಧತೆಯಲ್ಲಿದೆ. ಈ ನಡುವೆ ಮೈಕ್ರೊಫೈನಾನ್ಸ್‌ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ.

ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳ ಆರೋಪ; ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ಬಲಿ (ಸಾಂದರ್ಭಿಕ ಸಂಗ್ರಹ ಚಿತ್ರ)
ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳ ಆರೋಪ; ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ಬಲಿ (ಸಾಂದರ್ಭಿಕ ಸಂಗ್ರಹ ಚಿತ್ರ)

ಮೈಸೂರು: ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಮೈಸೂರು ಜಿಲ್ಲೆಯಲ್ಲಿ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಸಾಲದ ಕಿರುಕುಳಕ್ಕೆ ಜಯರಾಮು (55) ಎಂಬವರು ಬಲಿಯಾಗಿದ್ದಾರೆ. ಮೈಸೂರು ಜಿಲ್ಲೆ ಎಚ್‌ ಡಿ ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ಘಟನೆ‌ ನಡೆದಿದ್ದು, ರಾಜ್ಯದಲ್ಲಿ ಮೈಕ್ರೋಫೈನಾನ್ಸ್‌ ಸಾಲದ ಕಿರುಕುಳಕ್ಕೆ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ನಿನ್ನೆಯವರೆಗೂ ರಾಜ್ಯದಲ್ಲಿ ಆರು ಮಂದಿ ಸಾಲದ ಕಿರಿಕಿರಿಯಿಂದ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿತ್ತು. ಇದೀಗ ಮೈಸೂರು ಜಿಲ್ಲೆಯಲ್ಲಿ ಮತ್ತೊಬ್ಬರು ಸಾವನ್ನಪ್ಪಿದ್ದಾರೆ.

ಮೃತ ರೈತ ಜಯರಾಮು ಅವರು ಇಕ್ವಿಟಾಸ್, ಜನಬ್ಯಾಂಕ್ ಮೈಕ್ರೋ ಫೈನಾನ್ಸ್‌ನಲ್ಲಿ ಸುಮಾರು 5 ಲಕ್ಷ ಪಡೆದಿದ್ದರು. ಜಮೀನು ಲೀಸ್‌ಗೆ ಪಡೆದು 2 ಎಕರೆಯಲ್ಲಿ ಶುಂಠಿ ಬೆಳೆದಿದ್ದ ಜಯರಾಮು, ಶುಂಠಿ ಬೆಳೆಯ ಬೆಲೆ ಕುಸಿತವಾದ ಹಿನ್ನೆಲೆಯಲ್ಲಿ ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಮೀನಿನಲ್ಲಿ ವಿಷ ಸೇವಿಸಿ ಬದುಕಿಗೆ ಅಂತ್ಯ ಹಾಡಿದ್ದಾರೆ.

ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿದ್ದ ಜಯರಾಮು, ಮಕ್ಕಳ ಮದುವೆ ಹಾಗೂ ಶುಂಠಿ ಬೆಳೆಗೆ ಮೈಕ್ರೋಫೈನಾನ್ಸ್‌ನಿಂದ ಸಾಲ ಪಡೆದಿದ್ದರು. ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳದಿಂದ ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೆಚ್‌ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಂಜನಗೂಡಿನಲ್ಲಿ ಇಬ್ಬರು ಸಾವು

ಇತ್ತೀಚೆಗಷ್ಟೇ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನಲ್ಲಿ ಒಂದೇ ದಿನ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದರು. ಮೈಕ್ರೋ ಫೈನಾನ್ಸ್‌ನವರು ನೀಡಿದ ಕಿರುಕುಳದಿಂದಲೇ ನಮ್ಮ ಮನೆಯ ಸದಸ್ಯರು ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಅಂಬಳೆ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಮಹಿಳೆ ಜಯಶೀಲ (53) ಆತ್ಮಹತ್ಯೆ ಮಾಡಿಕೊಂಡ ಆರೋಪ ಕೇಳಿ ಬಂದಿದೆ. ಮತ್ತೊಂದೆಡೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ಆರೋಪ ಕೇಳಿ ಬಂದಿದ್ದು, ಸಾಲ ಕಟ್ಟಲಾಗದೇ ಸಿಬ್ಬಂದಿ ಕಿರುಕುಳಕ್ಕೆ ಬೆದರಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಮಲ್ಕುಂಡಿ ಗ್ರಾಮದ ಕೃಷ್ಣಮೂರ್ತಿ (33) ಎಂದು ಗುರುತಿಸಲಾಗಿದೆ. ಈ ಸಂಬಂಧ ನಂಜನಗೂಡು ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದೆ.

ಗಮನಿಸಿ: ಖಿನ್ನತೆ, ಆತ್ಮಹತ್ಯೆಯ ಆಲೋಚನೆಗಳು ಬಾಧಿಸುತ್ತಿದ್ದರೆ ನಿಮ್ಮ ಗೆಳತಿ / ಗೆಳೆಯರೊಂದಿಗೆ, ಹೆತ್ತವರೊಂದಿಗೆ, ಸಂಬಂಧಿಕರು, ಆಪ್ತರೊಂದಿಗೆ ಮುಕ್ತವಾಗಿ ಮಾತನಾಡಿ. ಪೊಲೀಸರ, ಆಪ್ತಸಮಾಲೋಚಕರ, ವೈದ್ಯರ ನೆರವು ಪಡೆಯಿರಿ. ಕರ್ನಾಟಕದಲ್ಲಿ ಆರೋಗ್ಯ ಸಹಾಯವಾಣಿ 104, ವೃದ್ಧರ ಸಹಾಯವಾಣಿ 1090, ಮಕ್ಕಳ ಸಹಾಯವಾಣಿ 1098 ಮತ್ತು ಸ-ಮುದ್ರ ಸಹಾಯವಾಣಿ 98803 96331 ಮೂಲಕ ಟೆಲಿ ಕೌನ್ಸೆಲಿಂಗ್ ನೆರವು ಪಡೆದುಕೊಳ್ಳಿ. ಕೊನೇ ನಿರ್ಧಾರಕ್ಕೆ ಮೊದಲು ನಿಮ್ಮವರ ಬಗ್ಗೆ ಒಂದು ಕ್ಷಣ ಯೋಚಿಸಿ.

Whats_app_banner