MUDA Scam: ಸಿಎಂ ಸಿದ್ದರಾಮಯ್ಯಗೆ ಸಂಬಂಧಿಸಿದ ಮುಡಾ ಪ್ರಕರಣ: 300 ಕೋಟಿ ರೂ ಮೌಲ್ಯದ ಸ್ಥಿರಾಸ್ಥಿ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ
MUDA Scam: ಸಿಎಂ ಸಿದ್ದರಾಮಯ್ಯಗೆ ಸಂಬಂಧಿಸಿದ ಮುಡಾ ಸೈಟು ಅಕ್ರಮ ಹಂಚಿಕೆ ಪ್ರಕರಣದಲ್ಲಿ 300 ಕೋಟಿ ರೂ ಮೌಲ್ಯದ ಸ್ಥಿರಾಸ್ಥಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಇಂದು (ಜನವರಿ 17) ಜಪ್ತಿ ಮಾಡಿದೆ. ಈ ವಿದ್ಯಮಾನವು ಸಂಚಲನ ಮೂಡಿಸಿದೆ. (ವರದಿ- ಎಚ್. ಮಾರುತಿ, ಬೆಂಗಳೂರು)

MUDA Scam: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದಾರೆ ಎನ್ನಲಾದ ಮೈಸೂರು ನಗರಾಭಿವೃದ್ಧಿ ಪ್ರಾದಿಕಾರದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸುಮಾರು 300 ಕೋಟಿ ರೂ ಮೌಲ್ಯದ 140 ಸ್ಥಿರಾಸ್ಥಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಜಾರಿ ನಿರ್ದೇಶನಾಲಯವೇ ಈ ಮಾಹಿತಿಯನ್ನು ಅಧಿಕೃತವಾಗಿ ಹಂಚಿಕೊಂಡಿದೆ. ಮುಡಾ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂಬ ಆರೋಪದ ತನಿಖೆಯ ಭಾಗವಾಗಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಗಳೆಲ್ಲವೂ ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಮಧ್ಯವರ್ತಿಗಳಿಗೆ ಸೇರಿದ್ದಾಗಿವೆ ಎಂದು ಇಡಿ ತಿಳಿಸಿದೆ.
ಮುಡಾ ಸೈಟು ಹಂಚಿಕೆ ಅಕ್ರಮದ ಕೇಸ್ ಇಡಿಗೆ ಹಸ್ತಾಂತರ
ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯಿದೆ (ಪಿಎಂಎಲ್ ಎ)-2002 ರ ಅಡಿಯಲ್ಲಿ ಜಾರಿ ನಿರ್ದೇಶನಾಲಯವು ಬೆಂಗಳೂರು ವಲಯ ಈ ಮುಟ್ಟುಗೋಲು ಹಾಕಿಕೊಂಡಿದೆ. ಮೈಸೂರು ಲೋಕಾಯುಕ್ತ ಪೊಲೀಸರು ಭಾರತೀಯ ದಂಡ ಸಂಹಿತೆ 1860 ಹಾಗೂ 1988ರ ಭ್ರಷ್ಟಾಚಾರ ನಿಗ್ರಹ ಕಾಯಿದೆ 17ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡ ನಂತರ ಜಾರಿ ನಿರ್ದೇಶನಾಲಯ ತನಿಖೆಯನ್ನು ಆರಂಭಿಸಿತ್ತು.
ಸಿದ್ದರಾಮಯ್ಯ ಅವರು ತಮ್ಮ ಪತ್ನಿಗೆ ಮುಡಾದಿಂದ 14 ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಲೋಕಾಯುಕ್ತ ಹಾಗೂ ಇಡಿ ತನಿಖೆ ಎದುರಿಸುತ್ತಿದ್ದಾರೆ. ಮುಡಾ ಸ್ವಾಧೀನಪಡಿಸಿಕೊಂಡ 3 ಎಕರೆ 16 ಗುಂಟೆ ಭೂಮಿಗೆ ಬದಲಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರಬಾವ ಬಳಸಿ ಪತ್ನಿ ಬಿ.ಎಂ. ಪಾರ್ವತಿ ಅವರ ಹೆಸರಿಗೆ ಪ್ರತಿಷ್ಠಿತ ಬಡಾವಣೆಯಲ್ಲಿ 14 ನಿವೇಶನಗಳ ಪರಿಹಾರವನ್ನು ಮಂಜೂರು ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮುಡಾ ಸ್ವಾಧೀನಪಡಿಸಿಕೊಂಡ ಭೂಮಿಯ ಬೆಲೆ 3,24,700 ರೂ. ಮಾತ್ರ! ಆದರೆ ಅಂದಾಜು 60 ಕೋಟಿ ರೂ. ಬೆಲೆ ಬಾಳುವ 14 ನಿವೇಶನಗಳನ್ನು ಪರಿಹಾರವಾಗಿ ನೀಡಲಾಗಿದೆ. ಈ ನಿವೇಶನ ಹಂಚಿಕೆಯಲ್ಲಿ ಮಾಜಿ ಮುಡಾ ಆಯುಕ್ತ ಡಿ.ಬಿ. ನಟೇಶ್ ಪಾತ್ರ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ.
ಮುಡಾ ಸೈಟು ಹಂಚಿಕೆ ಅಕ್ರಮ ದೊಡ್ಡ ಮಟ್ಟದ್ದು
ತನಿಖೆಯ ಸಂದರ್ಭದಲ್ಲಿ ಈ 14 ನಿವೇಶನಗಳಷ್ಟೇ ಅಲ್ಲದೆ ಇನ್ನೂ ಅನೇಕ ನಿವೇಶನಗಳನ್ನು ಪರಿಹಾರ ರೂಪದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಮಂಜೂರು ಮಾಡಲಾಗಿದೆ. ಈ ನಿವೇಶನಗಳನ್ನು ಮಾರಾಟ ಮಾಡುವ ಮೂಲಕ ಉದ್ಯಮಿಗಳು ಕಾನೂನು ಬದ್ಧವಾಗಿ ಕೋಟ್ಯಂತರ ರೂ. ಹಣ ಸಂಪಾದನೆ ಮಾಡಿದ್ದಾರೆ. ಇದು ಅಕ್ರಮ ಹಣ ವರ್ಗಾವಣೆ ವ್ಯಾಪ್ತಿಗೆ ಒಳಪಡುತ್ತದೆ ಎಂದು ಇಡಿ ಹೇಳಿದೆ. ಪ್ರಭಾವಿ ಮತ್ತು ರಿಯಲ್ ಎಸ್ಟೇಟ್ ಉದ್ಯಮಿಗಳ ಪರವಾಗಿ ಬೇನಾಮಿ ವ್ಯಕ್ತಿಗಳಿಗೂ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ತನಿಖೆಯ ಸಂದರ್ಭದಲ್ಲಿ ಇಡಿ ಈ ಎಲ್ಲ ಅಕ್ರಮಗಳನ್ನು ಪತ್ತೆ ಹಚ್ಚಿದೆ.
2021ರಲ್ಲಿ ಮುಡಾದಿಂದ ಅಕ್ರಮವಾಗಿ 14 ನಿವೇಶನಗಳನ್ನು ಪಡೆದುಕೊಂಡಿರುವ ಹಗರಣಕ್ಕೆ ಸಬಂಧಿಸಿದಂತೆ ಸೆಪ್ಟಂಬರ್ 27ರಂದು ಲೋಕಾಯುಕ್ತ ಎಫ್ ಐ ಆರ್ ದಾಖಲಿಸಿತ್ತು. ಆರ್ ಟಿ ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಭಾವಮೈದುನ ಮಲ್ಲಿಕಾರ್ಜುನ ಸ್ವಾಮಿ ಮತ್ತು ಭೂ ಮಾಲೀಕ ದೇವರಾಜು ವಿರುದ್ಧ ಎಫ್ ಆರ್ ದಾಖಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ತಮ್ಮ ಪತ್ನಿಗೆ ಬೆಲೆ ಬಾಳುವ 14 ನಿವೇಶನಗಳನ್ನು ಹಂಚಿಕೆ ಮಾಡಿಸುವಲ್ಲಿ ಪ್ರಬಾವ ಬೀರಿದ್ದಾರೆ. ಆದ್ದರಿಂದ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬೇಕು ಎಂದು ಪ್ರದೀಪ್ ಕುಮಾರ್, ಟಿ.ಜೆ.ಅಬ್ರಹಾಂ ಮತ್ತು ಸ್ನೇಹಮಯಿ ಕೃಷ್ಣ ಅವರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು. ಈ ದೂರಿನ ಆಧಾರದ ಮೇಲೆ ಮೈಸೂರು ಮುಡಾ ಕಚೇರಿ ಸೇರಿ, ಅಧಿಕಾರಿಗಳ ಮೇಲೆ ಇಡಿ ದಾಳಿ ನಡೆಸಿತ್ತು.
(ವರದಿ- ಎಚ್. ಮಾರುತಿ, ಬೆಂಗಳೂರು)
