ಮೈಸೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆಪ್ತ ಕಾ.ಪು. ಸಿದ್ದಲಿಂಗಸ್ವಾಮಿ ನಿಧನ, ಇಂದು ಸಂಜೆ ಅಂತ್ಯ ಸಂಸ್ಕಾರ
ಮೈಸೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆಪ್ತ ಕಾ.ಪು. ಸಿದ್ದಲಿಂಗಸ್ವಾಮಿ ಇಂದು ಮುಂಜಾನೆ ನಿಧನರಾದರು. ಬಹು ಅಂಗಾಂಗ ವೈಫಲ್ಯದಿಂದಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು. ಇಂದು ಸಂಜೆ ಅವರ ಅಂತ್ಯಸಂಸ್ಕಾರ ನಡೆಯಲಿದೆ.
ಮೈಸೂರು: ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಅವರ ಪರಮಾಪ್ತರಾಗಿದ್ದ ಕಾ.ಪು ಸಿದ್ದಲಿಂಗಸ್ವಾಮಿ (Ka.pu. Siddalingaswamy) ಅವರು ಇಂದು (ಜೂನ್ 6) ನಿಧನರಾದು. ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ ಮೃತಪಟ್ಟರು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಬಹುಅಂಗಾಂಗ ವೈಫಲ್ಯಕ್ಕೆ ಒಳಗಾಗಿ ಅವರು ಮೃತಪಟ್ಟರು. ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಅವರು ಬಹುದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮೈಸೂರಿನ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ಕಾ.ಪು. ಸಿದ್ದಲಿಂಗ ಸ್ವಾಮಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಲಿಂಗಾಯತ ವಿಧಿವಿಧಾನದಂತೆ ಅಂತ್ಯಕ್ರಿಯೆ ನಡೆಯಲಿದ್ದು, ಸ್ಥಳೀಯವಾಗಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭಾನುವಾರವಷ್ಟೆ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಕಾ.ಪು. ಸಿದ್ದಲಿಂಗಸ್ವಾಮಿ ಅವರ ಆರೋಗ್ಯ ವಿಚಾರಿಸಿದ್ದರು. ನಿನ್ನೆ ತುಮಕೂರು ನೂತನ ಸಂಸದ ವಿ ಸೋಮಣ್ಣ ಅವರು ಮೈಸೂರಿಗೆ ತೆರಳಿ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಸಿದ್ದಲಿಂಗಸ್ವಾಮಿ ಅವರ ಆರೋಗ್ಯ ವಿಚಾರಿಸಿದ್ದರು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ವರುಣ ಕ್ಷೇತ್ರದಲ್ಲಿ ಸೋಮಣ್ಣ ಪರ ಕಾ.ಪು. ಸಿದ್ದಲಿಂಗಸ್ವಾಮಿ ಅವರು ಕೆಲಸ ಮಾಡಿದ್ದರು.
ಇದಕ್ಕೂ ಮೊದಲು ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿ ಕೆಲವು ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು. ಅವರು 2008ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದಾಗ ಅವರ ವೈಯಕ್ತಿಕ ಕಾರ್ಯದರ್ಶಿಯಾಗಿ, ಕರ್ನಾಟಕ ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು.
(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)
ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.