ಗಣರಾಜ್ಯೋತ್ಸವ ಪ್ರಯುಕ್ತ ಬೆಳಿಗ್ಗೆ 6 ಗಂಟೆಗೆ ಮೆಟ್ರೋ ಆರಂಭ; ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ಮಾಡುವಂತಿಲ್ಲ; ಆದೇಶ
ಗಣರಾಜ್ಯೋತ್ಸವ ಅಂಗವಾಗಿ ಮೆಟ್ರೋ ರೈಲು ಸಂಚಾರ ಬೆಳಗ್ಗೆ 6 ಗಂಟೆಗೆ ಆರಂಭವಾಗಲಿದೆ. ಸರ್ಕಾರಿ ಕಚೇರಿಗಳಲ್ಲಿ ಅನುಮತಿ ಇಲ್ಲದೆ ಫೋಟೋ, ವಿಡಿಯೋ ಮಾಡುವಂತಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ. (ವರದಿ-ಎಚ್.ಮಾರುತಿ)

ಬೆಂಗಳೂರು: ಗಣರಾಜ್ಯೋತ್ಸವ ಅಂಗವಾಗಿ ಜನವರಿ 26 ರಂದು ನಮ್ಮ ಮೆಟ್ರೋ (Namma Metro) ರೈಲು ಸಂಚಾರ ಭಾನುವಾರ (ಜನವರಿ 26) ಒಂದು ಗಂಟೆ ಬೇಗ ಆರಂಭವಾಗಲಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಭಾನುವಾರ ನಮ್ಮ ಮೆಟ್ರೋ ರೈಲು ಸೇವೆಗಳು ಬೆಳಿಗ್ಗೆ 7 ಗಂಟೆಯ ಬದಲಿಗೆ ಬೆಳಿಗ್ಗೆ 6 ಗಂಟೆಯಿಂದಲೇ ಕಾರ್ಯಾರಂಭ ಮಾಡಲಿವೆ. ನಾಲ್ಕೂ ಟರ್ಮಿನಲ್ಗಳಿಂದ ಮತ್ತು ಮೆಜೆಸ್ಟಿಕ್ನಿಂದ ಮೊದಲ ರೈಲು ಬೆಳಗ್ಗೆ 6 ಗಂಟೆಗೆ ಹೊರಡಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ತಿಳಿಸಿದೆ.
ಲಾಲ್ಬಾಗ್ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ಮತ್ತು ಅಂದು ಮಾದಾವರದ ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರ (BIEC)ದಲ್ಲಿ ನಡೆಯುವ ವಿಶೇಷ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರ ಅನುಕೂಲಕ್ಕಾಗಿ ಹಸಿರು ಮತ್ತು ನೇರಳೆ ಮಾರ್ಗದಲ್ಲಿ ಹೆಚ್ಚುವರಿಯಾಗಿ 20 ರೈಲುಗಳು ಸಂಚಾರ ಮಾಡಲಿವೆ. ಈ ವೇಳೆ ಸ್ಮಾರ್ಟ್ ಕಾರ್ಡ್, ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ ಅಥವಾ ಕ್ಯೂಆರ್ ಟಿಕೆಟ್ ಬಳಸಬಹುದು ಎಂದೂ ನಮ್ಮ ಮೆಟ್ರೋ ತಿಳಿಸಿದೆ.
ಸಾರ್ವಜನಿಕರ ಅನುಕೂಲಕ್ಕಾಗಿ ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಟೋಕನ್ ಬದಲಿಗೆ ಪೇಪರ್ ಟಿಕೆಟ್ ನೀಡಲಾಗುತ್ತದೆ. ರೂ 30 ರಂತೆ ಪೇಪರ್ ಟಿಕೆಟ್ ವಿತರಣೆ ಮಾಡಲಾಗುತ್ತದೆ. ಈ ಪೇಪರ್ ಟಿಕೆಟ್ಗಳ ಮೂಲಕ ಲಾಲ್ಬಾಗ್ನಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಅವಕಾಶ ನೀಡಲಾಗುತ್ತದೆ. ಖರೀದಿಸಿದ ದಿನದಂದು ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಪೇಪರ್ ಟಿಕೆಟ್‌ಗಳು ಮಾತ್ರ ಮಾನ್ಯವಾಗಿರುತ್ತವೆ. ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ ಈ ಅವಧಿಯಲ್ಲಿ ಟೋಕನ್ ನೀಡಲಾಗುವುದಿಲ್ಲ. ನಮ್ಮ ಮೆಟ್ರೋದ ಎಲ್ಲಾ ಪ್ರಯಾಣಿಕರು, ಸುಗಮ ಪ್ರಯಾಣಕ್ಕಾಗಿ ಈ ಸೌಲಭ್ಯವನ್ನು ಬಳಸಿಕೊಳ್ಳಬೇಕೆಂದು ಬಿಎಂಆರ್‌ಸಿಎಲ್ ಕೋರಿದೆ.
ಸರ್ಕಾರಿ ಕಚೇರಿಗಳಲ್ಲಿ ಅನುಮತಿ ಇಲ್ಲದೆ ಫೋಟೋ ವಿಡಿಯೋ ಮಾಡುವಂತಿಲ್ಲ; ಆದೇಶ
ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಅನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡುವುದನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ತಾಲೂಕು ಹಾಗೂ ರಾಜ್ಯ ಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅವರ ಕೆಲಸ ಕಾರ್ಯಗಳ ನಿಮಿತ್ತ ಆಗಮಿಸುವುದು ಸರ್ವೇಸಾಮಾನ್ಯವಾಗಿದೆ. ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿ ವೇಳೆಯಲ್ಲಿ ಬಂದು ಕಚೇರಿಯ ಫೋಟೋ ಅಥವಾ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಹಾಗೂ ಇಂತಹ ಫೋಟೋ/ವಿಡಿಯೋಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಗಳಿರುತ್ತವೆ.
ಇದರಿಂದ ಸರ್ಕಾರದ ಘನತೆಗೆ ಕುಂದುಂಟಾಗುತ್ತದೆ. ಅದರಲ್ಲೂ ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆ ಉಂಟಾಗುತ್ತಿದೆ ಎಂದು ಸಂಘ ಕಳವಳ ವ್ಯಕ್ತಪಡಿಸಿತ್ತು. ಆದ್ದರಿಂದ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡುವುದನ್ನು ನಿಷೇಧಿಸುವಂತೆ ಸಂಘ ಸರ್ಕಾರಕ್ಕೆ ಮನವಿ ಮಾಡಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಅನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡುವುದನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.
