ಮಹಾರಾಷ್ಟ್ರ ಚುನಾವಣೆ ಪ್ರಚಾರ; ಮುಂಬೈನಲ್ಲಿ ಐದು ಗ್ಯಾರಂಟಿಗಳ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪರಮೇಶ್ವರ
ಕನ್ನಡ ಸುದ್ದಿ  /  ಕರ್ನಾಟಕ  /  ಮಹಾರಾಷ್ಟ್ರ ಚುನಾವಣೆ ಪ್ರಚಾರ; ಮುಂಬೈನಲ್ಲಿ ಐದು ಗ್ಯಾರಂಟಿಗಳ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪರಮೇಶ್ವರ

ಮಹಾರಾಷ್ಟ್ರ ಚುನಾವಣೆ ಪ್ರಚಾರ; ಮುಂಬೈನಲ್ಲಿ ಐದು ಗ್ಯಾರಂಟಿಗಳ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪರಮೇಶ್ವರ

Maharashtra election campaign: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಯನ್ನು ಸಹಿಸದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರದ ಗೃಹ ಸಚಿವ ಅಮಿತ್ ಶಾ ಹಾಗೂ ಇತರೆ ಬಿಜೆಪಿ ನಾಯಕರು ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ ಅವರು ತಿಳಿಸಿದ್ದಾರೆ.

ಮಹಾರಾಷ್ಟ್ರ ಚುನಾವಣೆ ಪ್ರಚಾರ; ಮುಂಬೈನಲ್ಲಿ ಐದು ಗ್ಯಾರಂಟಿಗಳ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪರಮೇಶ್ವರ
ಮಹಾರಾಷ್ಟ್ರ ಚುನಾವಣೆ ಪ್ರಚಾರ; ಮುಂಬೈನಲ್ಲಿ ಐದು ಗ್ಯಾರಂಟಿಗಳ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪರಮೇಶ್ವರ

ಮುಂಬೈ: ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟವು ಹೆಚ್ಚು ಸ್ಥಾನಗಳನ್ನು ಗೆದ್ದು, ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲಿದೆ ಎಂದು ಕರ್ನಾಟಕ ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಹೇಳಿದ್ದಾರೆ. ಕರ್ನಾಟಕದಲ್ಲಿ ಎಲ್ಲ ವರ್ಗದ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪವಾಗಿ ಅನುಷ್ಠಾನಗೊಳಿಸಿರುವುದನ್ನು ಸಹಿಸಲಾಗದ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಸರ್ಕಾರದ ವಿರುದ್ಧ ಸುಳ್ಳು ಆಪಾದನೆಗಳನ್ನು ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮುಂಬೈ ಮತ್ತು ಕೊಂಕಣ್ ಭಾಗದಲ್ಲಿ ಮುಖಂಡರೊಂದಿಗೆ ಪ್ರಚಾರ ಸಭೆಗಳನ್ನು ನಡೆಸಿದ ಬಳಿಕ ಮುಂಬೈ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮೀಕ್ಷೆಯ ಪ್ರಕಾರ ಮಹಾರಾಷ್ಟ್ರ ಚುನಾವಣೆಯಲಿ ಮಹಾವಿಕಾಸ್ ಅಘಾಡಿ ಮೈತ್ರಿಕೂಟವು 162ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ನಾವೇ ಸರ್ಕಾರ ರಚನೆ ಮಾಡಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ನಿರ್ಭಯಾ ಅನುದಾನ ಬಳಸಿಲ್ಲ’

ಏಕನಾಥ್ ಶಿಂಧೆ ಹಾಗೂ ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಹಾಳು ಮಾಡಿದ್ದಾರೆ. ಡ್ರಗ್ಸ್ ದಂಧೆ, ಮಹಿಳೆಯರ ನೇಲಿನ ದೌರ್ಜನ್ಯ, ಕೊಲೆ ಹೆಚ್ಚಾಗಿವೆ. ಮುಂಬೈ ನಗರದಲ್ಲಿ ಮಹಿಳಾ ಸುರಕ್ಷತೆಗೆ ಒತ್ತು ನೀಡಿಲ್ಲ. ಕೇಂದ್ರ ಸರ್ಕಾರ ನಿರ್ಭಯಾ ಯೋಜನೆಯಡಿ ನೀಡಿದ ಅನುದಾನವನ್ನು ಸಮರ್ಪಕವಾಗಿ ಬಳಸಿಲ್ಲ. ಹೀಗಾಗಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಮಹಾರಾಷ್ಟ್ರವನ್ನು ಎರಡನೇ ಸ್ಥಾನಕ್ಕೆ ತಂದು ನಿಲ್ಲಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬಾಬಾ ಸಿದ್ಧಿಕಿ ಹತ್ಯೆ ಪ್ರಕರಣವು ಜನರ ಸುರಕ್ಷತೆಯ ಪ್ರಶ್ನೆಯನ್ನು ಹುಟ್ಟುಹಾಕಿದೆ. ಮುಂಬೈನಲ್ಲಿ ನಡೆಯುವ ಹಿಂಸಾತ್ಮಕ ಅಪರಾಧಗಳು ಜನರಲ್ಲಿ ಆತಂಕ ಹುಟ್ಟಿಸಿದೆ. ಮಹಾರಾಷ್ಟ್ರದ ಈ ದುಸ್ಥಿತಿಗೆ ಕಾರಣರಾದ ಬಿಜೆಪಿ ನಾಯಕರು ತಕ್ಕ ಪ್ರತಿಫಲ ಅನುಭವಿಸಲಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಘೊಷಣೆಯಾದ ಬಳಿಕ ಮುಂಬೈ ಮತ್ತು ಕೊಂಕಣದಲ್ಲಿ ಪ್ರವಾಸ ಕೈಗೊಂಡು ಕೆಲವು ಅವಲೋಕನಗಳನ್ನು ಮಾಡಿದ್ದೇನೆ. ಹಿಂದಿನ ಸರ್ಕಾರವು ಮಹಾರಾಷ್ಟ್ರದ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ ಎಂಬುದು ಸ್ಥಳೀಯ ಜನರ ಮಾತಾಗಿದೆ ಎಂದರು.

ದೇವೇಂದ್ರ ಫಡ್ನವೀಸ್ ಅವರು ಆಂಬ್ಯುಲೆನ್ಸ್‌ ಖರೀದಿಗೆ 8 ಸಾವಿರ ಕೋಟಿ ರೂಪಾಯಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. 5 ಲಕ್ಷ ಯುವಕರಿಗೆ ಉದ್ಯೋಗ ನೀಡುವ ಭರವಸೆ ಈಡೇರಿಸಿಲ್ಲ. ಮಹಾರಾಷ್ಟ್ರದ ಅಭಿವೃದ್ಧಿಯ ಅನುದಾನವನ್ನು ಗುಜುರಾತ್‌ಗೆ ಸಾಗಿಸುತ್ತಿದ್ದಾರೆ. ಮಹಾರಾಷ್ಟ್ರದ ನಾಗರಿಕರ ಸುರಕ್ಷತೆಯ ಬಗ್ಗೆ ಸರ್ಕಾರಕ್ಕೆ ಕಿಂಚಿತ್ತು ಕಾಳಜಿ ಇಲ್ಲ‌‌ ಎಂದು ಕಿಡಿಕಾರಿದ್ದಾರೆ.

ಪ್ರಧಾನಿ ಮೋದಿ ಸುಳ್ಳು ಆಪಾದನೆ

2023ರ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ಮಹಿಳೆಯರು, ಬಡವರ ಅಭಿವೃದ್ಧಿಗೆ 5 ಗ್ಯಾರಂಟಿ ಯೋಜ‌ನೆಗಳನ್ನು ನೀಡುವುದಾಗಿ ಭರವಸೆ ನೀಡಿದ್ದೆವು. ಸರ್ಕಾರ ಅಸ್ಥಿತ್ವಕ್ಕೆ ಬಂದ‌ ಕೂಡಲೇ ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ 2000 ರೂ, 200 ಯೂನಿಟ್ ಉಚಿತ ವಿದ್ಯುತ್, ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ, ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ಹಾಗೂ ನಿರುದ್ಯೋಗಿ ಯುವಕರಿಗೆ ಯುವನಿಧಿ ಯೋಜನೆಯಡಿ 3 ಸಾವಿರ ರೂಪಾಯಿ ನೀಡುತ್ತಿದ್ದೇವೆ. ಕಳೆದ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ಮೀಸಲಿಟ್ಟಿದ್ದೇವೆ ಎಂದು ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ

ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ಎಲ್ಲಾ ರೀತಿಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದೇವೆ. ರಾಜ್ಯದಲ್ಲಿ ಯಾವುದೇ ರೀತಿಯ ಹಣಕಾಸಿನ ತೊಂದರೆ ಇಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಯನ್ನು ಸಹಿಸದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರದ ಗೃಹ ಸಚಿವ ಅಮಿತ್ ಶಾ ಹಾಗೂ ಇತರೆ ಬಿಜೆಪಿ ನಾಯಕರು ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕು ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Whats_app_banner