B S Yediyurappa: ಪೋಕ್ಸೋ ಪ್ರಕರಣ; ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಖುದ್ದು ಹಾಜರಾತಿಗೆ ವಿನಾಯಿತಿ ವಿಸ್ತರಿಸಿದ ಹೈಕೋರ್ಟ್
ಪೋಕ್ಸೋ ಪ್ರಕರಣ; ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರ ಖುದ್ದು ಹಾಜರಾತಿಗೆ ವಿನಾಯಿತಿ ವಿಸ್ತರಿಸಲು ಅನುಮತಿ ನೀಡಿದ್ದಾರೆ.

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪೋಕ್ಸೋ ಪ್ರಕರಣ ವಿಚಾರಣೆ ಪೂರ್ಣಗೊಳಿಸಿದ ಕರ್ನಾಟಕ ಹೈಕೋರ್ಟ್ ಖುದ್ದು ಹಾಜರಿಗೆ ನೀಡಿದ್ದ ವಿನಾಯತಿಯನ್ನು ವಿಸ್ತರಣೆ ಮಾಡಿದೆ. ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರ ಖುದ್ದು ಹಾಜರಾತಿಗೆ ವಿನಾಯಿತಿ ವಿಸ್ತರಿಸಲು ಅನುಮತಿ ನೀಡಿದ್ದಾರೆ.
ತಮ್ಮ ವಿರುದ್ಧದ ಪೋಕ್ಸೋ ಪ್ರಕರಣ ರದ್ದು ಕೋರಿ ಹಿರಿಯ ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿದ್ದು, ಆದೇಶವನ್ನು ಕಾಯ್ದಿರಿಸಿದೆ. ಈ ಪ್ರಕರಣದಲ್ಲಿ ಎಲ್ಲರ ವಾದ ಪೂರ್ಣಗೊಂಡಿದೆ. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಆದೇಶವನ್ನು ಕಾಯ್ದಿರಿಸಿದೆ.
ಯಡಿಯೂರಪ್ಪ ಪರ ವಾದ ಮಂಡಿಸಿದ ಪ್ರೊ.ರವಿವರ್ಮಕುಮಾರ್
ಇಂದು ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ ಪ್ರೊ.ರವಿವರ್ಮಕುಮಾರ್ ಅವರು ಯಡಿಯೂರಪ್ಪ ಮನೆಯ ಎಂಟ್ರಿ ರಿಜಿಸ್ಟರ್ ತಿರುಚಲಾಗಿದೆ ಎಂದು ಆರೋಪಿಸಿದ್ದಾರೆ. ಫಿರ್ಯಾದಿ, ಬಾಲಕಿ ಮತ್ತು ಶಿವಾನಂದ ತಗಡೂರು ಅವರು ಆಗಮಿಸಿದ ಸಮಯವನ್ನು ಬದಲಿಸಲಾಗಿದೆ. ಆರೋಪಿಗಳು, ದೂರುದಾರ ಮಹಿಳೆಯ ಫೇಸ್ ಬುಕ್‌ನಿಂದ ವಿಡಿಯೋ ಡಿಲೀಟ್ ಮಾಡಿಸಿದ್ದಾರೆ. ಯಡಿಯೂರಪ್ಪ ಅವರ ನಿವಾಸಕ್ಕೆ ಕರೆತಂದೇ ವಿಡಿಯೋ ಡಿಲೀಟ್ ಮಾಡಿಸಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ಮೊಬೈಲ್ ರೆಕಾಂರ್ಡಿಂಗ್‌ನಲ್ಲಿ ಯಡಿಯೂರಪ್ಪ ಅವರ ಧ್ವನಿ ಸ್ಪಷ್ಟವಾಗಿಲ್ಲ. ಯಡಿಯೂರಪ್ಪ ಅವರ ನಿವಾಸಕ್ಕೆ ದೂರುದಾರ ಮಹಿಳೆ ಪದೇ ಪದೇ ಬಂದಿದ್ದಾರೆ ಎಂದು ಹೇಳಲಾಗಿದೆ. ಘಟನೆ ನಡೆದ ನಂತರವೂ ಮತ್ತೆ ಮತ್ತೆ ಅವರ ಮನೆಗೆ ಬರಲು ಸಾಧ್ಯವೇ ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿದರು. ಪ್ರತಿವಾದ ಮಂಡಿಸಿದ ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ.ನಾಗೇಶ್, ಫಿರ್ಯಾದಿ ಈ ಹಿಂದೆ 56 ಬಾರಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಈ ದೂರನ್ನೂ ಪರಿಗಣಿಸಬೇಕು.
ಆರೋಪ ಪಟ್ಟಿಯಲ್ಲಿನ ಅಂಶಗಳೇ ಸಂಪೂರ್ಣ ಸತ್ಯವೆಂದು ಒಪ್ಪಬಾರದು ಎಂದರು. ಆ ದಿನ ಅಲ್ಲಿಏನೂ ನಡೆದಿಲ್ಲ ಎಂದು ಅಲ್ಲಿ ಹಾಜರಿದ್ದ ಶಿವಾನಂದ ತಗಡೂರು ಮತ್ತು ಆರಾಧ್ಯ ಅವರು ಹೇಳಿಕೆ ನೀಡಿದ್ದಾರೆ. ಆದರೆ ಪೊಲೀಸರು ಅದನ್ನು ತನಿಖೆಯ ಭಾಗವಾಗಿ ಪರಿಗಣಿಸಿಲ್ಲ. ಕೇವಲ ಸಂತ್ರಸ್ತೆ ಹೇಳಿಕೆಯನ್ನಷ್ಟೇ ಪರಿಗಣಿಸಿದ್ದಾರೆ. ಸತ್ಯಕ್ಕೆ ಸಾಕ್ಷ್ಯಗಳ ಅಗತ್ಯವಿದೆ. ಎಲ್ಲ ಸಾಕ್ಷಿಗಳೂ ಈ ಘಟನೆ ನಡೆದಿಲ್ಲ ಎಂದು ಹೇಳಿಕೆ ನೀಡಿದ್ದಾರೆ ಎಂದು ವಾದ ಮಂಡಿಸಿದರು.
ಯಡಿಯೂರಪ್ಪ ಅವರ ಖುದ್ದು ಹಾಜರಾತಿಗೆ ನೀಡಿದ್ದ ವಿನಾಯಿತಿಯನ್ನು ವಿಸ್ತರಿಸಲಾಗಿದೆ ಎಂದ ನ್ಯಾಯಮೂರ್ತಿಗಳು ಆದೇಶವನ್ನು ಕಾಯ್ದಿರಿಸಿದ್ದಾರೆ.
ಏನಿದು ಪ್ರಕರಣ ?
ತಮ್ಮ 17 ವರ್ಷದ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ಯಡಿಯೂರಪ್ಪ ವಿರುದ್ಧ ಮಾರ್ಚ್ 14ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಮ್ಮ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು ನ್ಯಾಯಕ್ಕಾಗಿ ಸಹಾಯ ಮಾಡುವಂತೆ ಕೋರಿ ಯಡಿಯೂರಪ್ಪ ಅವರ ಬಳಿ ಹೋಗಿದ್ದಾಗಿ ಆ ಮಹಿಳೆ ದೂರಿನಲ್ಲಿ ತಿಳಿಸಿದ್ದರು. ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ಮನೆಗೆ ತೆರಳಿ ಸಹಾಯ ಕೇಳಿದಾಗ ಅವರು ನನ್ನ ಪುತ್ರಿಯನ್ನು ಪ್ರತ್ಯೇಕ ಕೊಠಡಿಯೊಳಕ್ಕೆ ಕರೆದೊಯ್ದು ನನ್ನ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ವಿಷಯವನ್ನು ಯಾರಿಗೂ ಹೇಳದಂತೆ ಒಂದಿಷ್ಟು ಹಣ ನೀಡಿದ್ದರು ಎಂದು ಸಂತ್ರಸ್ತ ಬಾಲಕಿಯ ತಾಯಿ ಆರೋಪಿಸಿದ್ದರು.
ನಂತರ ಸದಾಶಿವ ನಗರ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಅಡಿಯಲ್ಲಿ ಎಫ್ ಐ ಆರ್ ದಾಖಲಿಸಿದ್ದರು. ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು ಯಡಿಯೂರಪ್ಪ ತಮ್ಮ ವಿರುದ್ಧ ದಾಖಲಾಗಿರುವ ದೂರು ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಹೈಕೋಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿರುವ ಅವರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋಟ್‌ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಂಡಿದೆ.
ವರದಿ: ಎಚ್. ಮಾರುತಿ
ಇದನ್ನೂ ಓದಿ: ಬೀದರ್ ಎಟಿಎಂ ವಾಹನ ದರೋಡೆ ಪ್ರಕರಣದ ಇಬ್ಬರು ಆರೋಪಿಗಳ ಗುರುತು ಪತ್ತೆ; ಖಚಿತ ಮಾಹಿತಿ ಕೊಟ್ರು ಗೃಹ ಸಚಿವ ಜಿ ಪರಮೇಶ್ವರ
