ಕನ್ನಡ ಸುದ್ದಿ  /  Karnataka  /  Political News Ex Cm Jds Leader H D Kumaraswamy Returns To Bangalore After Successful Heart Surgery Rmy

H D Kumaraswamy: ಯಶಸ್ವಿ ಹೃದಯದ ಶಸ್ತ್ರ ಚಿಕಿತ್ಸೆ ಬಳಿಕ ಬೆಂಗಳೂರಿಗೆ ವಾಪಸ್ ಆದ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಎರಡು ದಿನಗಳಲ್ಲಿ ನಿರ್ಧರಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಹೃದಯದ ಶಸ್ತ್ರ ಚಿಕಿತ್ಸೆ ಬಳಿಕ ಚೆನ್ನೈನಿಂದ ಬೆಂಗಳೂರಿಗೆ ಆಗಮಿಸಿದ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರು ಹೆಚ್‌ಎಎಲ್ ವಿಮಾನ ನಿಲ್ದಾಣ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.
ಹೃದಯದ ಶಸ್ತ್ರ ಚಿಕಿತ್ಸೆ ಬಳಿಕ ಚೆನ್ನೈನಿಂದ ಬೆಂಗಳೂರಿಗೆ ಆಗಮಿಸಿದ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರು ಹೆಚ್‌ಎಎಲ್ ವಿಮಾನ ನಿಲ್ದಾಣ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

ಬೆಂಗಳೂರು: ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆಯ ನಂತರ ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ (H D Kumaraswamy) ಇಂದು (ಮಾರ್ಚ್ 24, ಭಾನುವಾರ) ಬೆಳಿಗ್ಗೆ ಮನೆಗೆ ಮರಳಿದ್ದಾರೆ. ನಗರದ ಹೆಚ್‌ಎಎಲ್ ವಿಮಾನ ನಿಲ್ದಾಣ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ (Lok Sabha Election 2024) ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಸ್ಪರ್ಧಿಸಲಿದ್ದು, ನಾನು ಸ್ಪರ್ಧಿಸುವ ಬಗ್ಗೆ ಇನ್ನೆರಡು ದಿನಗಳಲ್ಲಿ ನಿರ್ಧರಿಸುತ್ತೇನೆ ಎಂದು ಹೇಳಿದ್ದಾರೆ. ಮಂಡ್ಯದಿಂದ ಸ್ಪರ್ಧಿಸುವಂತೆ ಪಕ್ಷದ ಸದಸ್ಯರು ಕುಮಾರಸ್ವಾಮಿ ಅವರನ್ನು ಒತ್ತಾಯಿಸುತ್ತಿದ್ದಾರೆ, ಅಂತಿಮ ನಿರ್ಧಾರವನ್ನು ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ತೆಗೆದುಕೊಳ್ಳುತ್ತಾರೆ ಎಂದು ಹೆಚ್‌ಡಿಕೆ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

"ನಿನ್ನೆ ಮೂರು ಲೋಕಸಭಾ ಕ್ಷೇತ್ರಗಳನ್ನು ಘೋಷಿಸಲಾಗಿದೆ. ನಿರೀಕ್ಷೆಯಂತೆ ಹಾಸನ, ಕೋಲಾರ ಮತ್ತು ಮಂಡ್ಯ ನಮಗೆ ಸಿಕ್ಕಿದೆ. ಇಂದು (ಮಾರ್ಚ್ 24, ಭಾನುವಾರ) ಮಂಡ್ಯದ ಜೆಡಿಎಸ್ ಕಾರ್ಯಕರ್ತರು ನಮ್ಮ ಜೆ.ಪಿ.ನಗರ ನಿವಾಸಕ್ಕೆ ಬಂದಿದ್ದರು. ನನ್ನ ತಂದೆ (ಎಚ್.ಡಿ.ಕುಮಾರಸ್ವಾಮಿ) ಈಗಷ್ಟೇ ಚೆನ್ನೈ ಅಪೋಲೋ ಆಸ್ಪತ್ರೆಯಿಂದ ಬಂದಿದ್ದಾರೆ. ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಹೀಗಾಗಿ ಅವರು ಸ್ವಲ್ಪ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಮಂಡ್ಯದಲ್ಲಿ ಸ್ಪರ್ಧೆ ಬಗ್ಗೆ ನಾವು, ನಮ್ಮ ಪಕ್ಷದ ಕಾರ್ಯಕರ್ತರು ಮತ್ತು ನಾಯಕರೊಂದಿಗೆ ಅನೇಕ ಸಭೆಗಳನ್ನು ನಡೆಸಿದ್ದೇವೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಿಂದ ಸ್ಪರ್ಧಿಸಬೇಕು ಎಂಬುದು ಎಲ್ಲರ ಅಭಿಪ್ರಾಯವಾಗಿದೆ. ಆದರೆ ಈ ನಿರ್ಧಾರವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ತೆಗೆದುಕೊಳ್ಳಲಿದ್ದಾರೆ.

ಮಂಡ್ಯ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ನೀವೇ ಆಗಬೇಕೆಂದು ಜೆಡಿಎಸ್ ಕಾರ್ಯಕರ್ತರ ಪಟ್ಟು

ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲು ಬಂದಿದ್ದ ಮಂಡ್ಯದ ಜೆಡಿಎಸ್ ಕಾರ್ಯಕರ್ತರು ಮಂಡ್ಯ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ನೀವೇ ಆಗಬೇಕು ಎಂದು ಒತ್ತಾಯ ಮಾಡಿದರು. ಜೆ.ಪಿ.ನಗರದಲ್ಲಿರುವ ಮಾಜಿ ಮುಖ್ಯಮಂತ್ರಿಗಳ ನಿವಾಸದ ಎದುರಿನ ರಸ್ತೆಯಲ್ಲಿಯೇ ಕೂತು ಘೋಷಣೆ ಕೂಗಿದ ಘಟನೆ ನಡೆಯಿತು.

ಮಂಡ್ಯದಲ್ಲಿ ನಮಗೆ ವಿಶೇಷ ಪ್ರೀತಿ ವಿಶ್ವಾಸ ಸಿಕ್ಕಿದೆ. ಅದು ನನ್ನ ಭಾಗ್ಯ. ನಾನು ಈ ಭೂಮಿಯಲ್ಲಿ ಇರುವವರೆಗೂ ಈ ಪ್ರೀತಿಯನ್ನು ಮರೆಯಲು ಸಾಧ್ಯವಿಲ್ಲ. ನನಗೆ ಈವರೆಗೆ ಮೂರು ಬಾರಿ ಹೃದಯ ಶಸ್ತ್ರಚಿಕಿತ್ಸೆ ಆಗಿದೆ. ನನ್ನ ಆರೋಗ್ಯವನ್ನು ನೋಡಿಕೊಂಡು ಪಕ್ಷದ ಕೆಲಸ, ಜನರ ಸೇವೆ ಮಾಡಬೇಕಿದೆ ಎಂದು ತಮ್ಮ ನಿವಾಸದ ಬಳ ಜಮಾಯಿಸಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಕುಮಾರಸ್ವಾಮಿ ಮಾತನಾಡಿದರು.

ನಾನು ಹುಟ್ಟಿದ್ದು ಹಾಸನ ಜಿಲ್ಲೆಯಲ್ಲಿ. ನನಗೆ ರಾಜಕೀಯ ಜನ್ಮ ಕೊಟ್ಟಿದ್ದು ರಾಮನಗರ ಜಿಲ್ಲೆ, ಜೀವಕ್ಕೆ ಜೀವವಾಗಿ ನನ್ನನ್ನು ಪೊರೆದು ಸಲಹುತ್ತಿರುವ ಜಿಲ್ಲೆ ಮಂಡ್ಯ. ಈ ನೆಲವನ್ನು, ಈ ಜನರ ಪ್ರೀತಿ ವಿಶ್ವಾಸವನ್ನು ನಾನು ಮರೆಯಲು ಸಾಧ್ಯವೇ ಇಲ್ಲ. ನಾಳೆ (ಮಾರ್ಚ್ 25, ಸೋಮವಾರ) ಚನ್ನಪಟ್ಟಣ ಕ್ಷೇತ್ರದ ಮುಖಂಡರನ್ನು ಕರೆಸಿ ಮಾತನಾಡುತ್ತೇನೆ. ನಾಳೆಯ ದಿನ ಯಾವುದೇ ಕಾರಣಕ್ಕೂ ನಿಮಗೆ ನಿರಾಸೆ ಮಾಡಲ್ಲ ಎಂದು ಮಂಡ್ಯ ಜಿಲ್ಲೆಯ ಕಾರ್ಯಕರ್ತರಿಗೆ ಕುಮಾರಸ್ವಾಮಿ ಅವರು ಭರವಸೆ ನೀಡಿದರು. ಕರ್ನಾಟಕದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿವೆ. ಬಿಜೆಪಿ ಹೈಕಮಾಂಡ್ ಕೋಲಾರ, ಹಾಸನ ಹಾಗೂ ಮಂಡ್ಯ 3 ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ.

ಲೋಕಸಭಾ ಚುನಾವಣೆ 2024 ಏಪ್ರಿಲ್ 19 ರಿಂದ ಏಳು ಹಂತಗಳಲ್ಲಿ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ.