ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌; ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್‌ಗಳ ಆರೋಪಿ
ಕನ್ನಡ ಸುದ್ದಿ  /  ಕರ್ನಾಟಕ  /  ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌; ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್‌ಗಳ ಆರೋಪಿ

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌; ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್‌ಗಳ ಆರೋಪಿ

ಹಾಸನದ ಮಾಜಿ ಸಂಸದ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್‌ಗಳ ಆರೋಪಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ. ಕರ್ನಾಟಕ ಹೈಕೋರ್ಟ್‌ ನ್ಯಾಯಪೀಠ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಎರಡು ಬಾರಿ ತಿರಸ್ಕರಿಸಿತ್ತು.

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್‌ಗಳ ಆರೋಪಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ. (ಕಡತ ಚಿತ್ರ)
ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್‌ಗಳ ಆರೋಪಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ. (ಕಡತ ಚಿತ್ರ)

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಹಾಸನದ ಮಾಜಿ ಸಂಸದ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್‌ಗಳ ಆರೋಪಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ. ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಅಕ್ಟೋಬರ್ 21 ರಂದು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ ನಂತರ ಅವರು ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಕರ್ನಾಟಕ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಹಾಸನದ ಮಾಜಿ ಸಂಸದರ ಎರಡು ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದರು.

ಪ್ರಜ್ವಲ್‌ ರೇವಣ್ಣ ವಿರುದ್ಧ 2144 ಪುಟಗಳ ಆರೋಪ ಪಟ್ಟಿ

2024ರ ಆಗಸ್ಟ್‌ನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳದ ನಾಲ್ಕು ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), 2,144 ಪುಟಗಳ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದೆ. ಈ ಆರೋಪಪಟ್ಟಿಯು ಪ್ರಜ್ವಲ್ ಮನೆಯವರಿಗೆ ಅವರ ಕುಟುಂಬಕ್ಕೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿದೆ. ಪ್ರಜ್ವಲ್‌ ರೇವಣ್ಣ ವಿರುದ್ಧ ಎರಡು ಅತ್ಯಾಚಾರ ಪ್ರಕರಣಗಳು ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಕೇಸ್‌ಗಳಿವೆ.

ಪ್ರಜ್ವಲ್ ರೇವಣ್ಣ ಅವರು ಹೊಳೆನಸರೀಪುರ ಶಾಸಕ, ಜೆಡಿಎಸ್ ನಾಯಕ ಎಚ್‌ಡಿ ರೇವಣ್ಣ ಅವರ ಪುತ್ರ. ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಅವರ ಮೊಮ್ಮಗ. ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ, ಮತದಾನಕ್ಕೆ ಮೊದಲು ಏಪ್ರಿಲ್ 26 ರಂದು ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಭಾಗಿಯಾಗಿದ್ದಾರೆ ಎನ್ನಲಾದ ಸ್ಪಷ್ಟ ವಿಡಿಯೋ ಹೊಂದಿರುವ ಪೆನ್ ಡ್ರೈವ್‌ ಬಹಿರಂಗವಾಗಿತ್ತು. ಅದರಲ್ಲಿದ್ದ ವಿಡಿಯೋ ತುಣುಕುಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿ ವೈರಲ್ ಆದ ಬಳಿಕ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್‌ಗಳು ದಾಖಲಾದವು.

ಪ್ರಜ್ವಲ್‌ ರೇವಣ್ಣ ವಿರುದ್ಧದ ಕೇಸ್‌ಗಳ ವಿವರ

ಹಾಸನದ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 28 ರಂದು ಪ್ರಜ್ವಲ್‌ ರೇವಣ್ಣ ವಿರುದ್ಧ ಮೊದಲ ಪ್ರಕರಣ ದಾಖಲಾಯಿತು. ಅದರಲ್ಲಿ 47 ವರ್ಷದ ಮಾಜಿ ಮನೆಗೆಲಸದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ರೇವಣ್ಣ ಮೇಲಿದೆ. ಈ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅವರನ್ನು ಎರಡನೇ ಆರೋಪಿಯನ್ನಾಗಿ ಮಾಡಲಾಗಿದೆ. ಅವರ ತಂದೆ ಮತ್ತು ಸ್ಥಳೀಯ ಶಾಸಕ ಹೆಚ್ ಡಿ ರೇವಣ್ಣ ಮೊದಲ ಆರೋಪಿಯಾಗಿದ್ದಾರೆ.

ಹಾಸನ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆಯೊಬ್ಬರು ಪ್ರಜ್ವಲ್ ರೇವಣ್ಣ ವಿರುದ್ಧ ಪದೇಪದೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ ಮೇ 1 ರಂದು ದೂರು ದಾಖಲಿಸಿದರು. ಆ ಮಹಿಳೆಗೆ 44 ವರ್ಷ ವಯಸ್ಸು. ಅಪರಾಧ ತನಿಖಾ ಇಲಾಖೆ (ಸಿಐಡಿ) ಈ ಎರಡನೇ ಪ್ರಕರಣ ದಾಖಲಿಸಿದೆ. ಮೂರನೇ ಪ್ರಕರಣವು ಮೈಸೂರಿನ ಕೆ ಆರ್ ನಗರ ಎಂಬಲ್ಲಿನ 60 ರ ಹರೆಯದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಕ್ಕೆ ಸಂಬಂಧಿಸಿದೆ. ಈ ಮಹಿಳೆ ಕೂಡ ಪ್ರಜ್ವಲ್ ರೇವಣ್ಣ ಮನೆಗೆಲಸಕ್ಕಿದ್ದರು.

ಸಂತ್ರಸ್ತೆಯ ಮಗ ತನ್ನ ತಾಯಿಯ ಅಪಹರಣ ಆರೋಪ ಹೊರಿಸಿ ಕೆ ಆರ್‌ ನಗರ ಪೊಲೀಸ್ ಠಾಣೆಯಲ್ಲಿ ಮೇ 2 ರಂದು ಮತ್ತೊಂದು ದೂರು ದಾಖಲಿಸಿದರು. ಈ ಪ್ರಕರಣದಲ್ಲಿ ಎಚ್‌ ಡಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಬಳಿಕ ಅವರು ಜಾಮೀನು ಪಡೆದು ಹೊರಬಂದಿದ್ದಾರೆ. ಇದೇ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ತಾಯಿ ಭವಾನಿ ರೇವಣ್ಣ ಕೂಡ ಆರೋಪಿಯಾಗಿದ್ದು, ನಿರೀಕ್ಷಣಾ ಜಾಮೀನು ಪಡೆದು ವಿಚಾರಣೆ ಎದುರಿಸಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪದಡಿ ನಾಲ್ಕನೇ ಪ್ರಕರಣವನ್ನು ಜೂನ್ 12 ರಂದು ಬೆಂಗಳೂರಿನ ಸಿಐಡಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಈ ಪ್ರಕರಣದಲ್ಲಿ ಪ್ರಜ್ವಲ್‌ ವಿರುದ್ಧ ಲೈಂಗಿಕ ಕಿರುಕುಳ, ಹಿಂಬಾಲಿಸುವುದು ಮತ್ತು ಕ್ರಿಮಿನಲ್ ಬೆದರಿಕೆ ಮತ್ತು ಐಟಿ ಕಾಯಿದೆಯಡಿ ಖಾಸಗಿತನದ ಉಲ್ಲಂಘನೆಗಾಗಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ದೂರುದಾರೆ ಮಹಿಳೆಯಾಗಿದ್ದು, ವಿಡಿಯೋ ಕಾಲ್ ಮೂಲಕ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

Whats_app_banner