ಸಂತ್ರಸ್ತೆ ಅಪಹರಣ ಆರೋಪ ಪ್ರಕರಣ; ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮೇ 29ಕ್ಕೆ ಮುಂದೂಡಿಕೆ
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನಾಳೆಗೆ (ಮೇ 29, ಬುಧವಾರ) ಮುಂದೂಡಲಾಗಿದೆ.
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ (Prajwal Revanna Sexual Assault Case) ವಿಡಿಯೊದಲ್ಲಿ ಇದ್ದವರು ಎನ್ನಲಾದ ಮಹಿಳೆಯನ್ನು ಅಪಹರಿಸಿದ ಆರೋಪ ಪ್ರಕರಣದಲ್ಲಿ ಪ್ರಜ್ವಲ್ ತಾಯಿ ಭವಾನಿ ರೇವಣ್ಣ (Bhavani Revanna) ಅವರಿಗೂ ಬಂಧನದ ಭೀತಿ ಎದುರಾಗಿದೆ. ಪ್ರಕರಣ ವಿಚಾರಣೆ ನಡೆಸುತ್ತಿರುವ ಎಸ್‌ಐಟಿ ವಿಚಾರಣೆಗೆ ಭವಾನಿ ರೇವಣ್ಣ ಹಾಜರಾಗುತ್ತಿಲ್ಲ, ಹೀಗಾಗಿ ಭವಾನಿ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸುವ ಸಾಧ್ಯತೆ ಇದೆ. ಬಂಧನದಿಂದ ಪಾರಾಗಲು ಭವಾನಿ ರೇವಣ್ಣ ತಮ್ಮ ವಕೀಲರ ಮೂಲಕ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರಿನ ಜನಪ್ರತಿನಿಧಿನಗಳ ವಿಶೇಷ ನ್ಯಾಯಾಲಯದಲ್ಲಿ ಇಂದು (ಮೇ 28, ಮಂಗಳವಾರ) ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ನಾಳೆಗೆ (ಮೇ 29, ಬುಧವಾರ) ವಿಚಾರಣೆಯನ್ನು ಮುಂದೂಡಿಕೆ ಮಾಡಲಾಗಿದೆ. ಪೊಲೀಸರಿಂದ ಅಗತ್ಯ ಮಾಹಿತಿ ಪಡೆಯಬೇಕಾಗಿದೆ. ಹೀಗಾಗಿ ಹೆಚ್ಚಿನ ಕಾಲಾವಕಾಶವನ್ನು ನೀಡಬೇಕೆಂದು ಭವಾನಿ ಅವರ ಪರ ವಕೀಲರು ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಇದನ್ನು ಪರಿಗಣಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಮೇ 29ರ ಬುಧವಾರಕ್ಕೆ ಮುಂದೂಡಿದ್ದಾರೆ.
ಸಂತ್ರಸ್ತೆಯನ್ನು ಅಪಹರಣ ಮಾಡಿಸಿದ ಆರೋಪ ಪ್ರಕರಣದಲ್ಲಿ ಮಾಜಿ ಶಾಸಕ ಹೆಚ್‌ಡಿ ರೇವಣ್ಣವನ್ನು ಎಸ್‌ಐಟಿ ಬಂಧಿಸಿ ಜೈಲಿಗೆ ಕಳುಹಿಸಿತ್ತು. ನಿರೀಕ್ಷಣಾ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಅವರು ಜೈಲಿನಿಂದ ಹೊರ ಬಂದಿದ್ದಾರೆ. ಇದೀಗ ರೇವಣ್ಣ ಪತ್ನಿ ಭವಾನಿ ಅವರಿಗೂ ಅರೆಸ್ಟ್ ಭೀತಿಯಲ್ಲಿದ್ದಾರೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರಾ ಆರೋಪಗಳನ್ನು ಎದುರಿಸುತ್ತಿದ್ದಾರೆ. ಏಪ್ರಿಲ್ 21 ರಂದು ಮೊದಲ ಬಾರಿಗೆ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ವಿಡಿಯೊ ಹೊರಬಂದಿತ್ತು. ಬಳಿಕ ಹಾಸನ ಸೇರಿದಂತೆ ಎಲ್ಲೆಡೆ ವಿಡಿಯೊಗಳು ಹರಿದಾಡಿದ್ದವು. ಏಪ್ರಿಲ್ 26 ರಂದು ಲೋಕಸಭಾ ಚುನಾವಣೆಯ ಮತದಾನ ಮಾಡಿದ್ದ ಪ್ರಜ್ವಲ್ ರೇವಣ್ಣ ಏಪ್ರಿಲ್ 27 ರಂದು ವಿದೇಶಕ್ಕೆ ತೆರಳಿ ಅಲ್ಲಿ ತಲೆಮರಿಸಿಕೊಂಡಿದ್ದರು.
ನಿನ್ನೆಯಷ್ಟೇ (ಮೇ 27, ಸೋಮವಾರ) ವಿಡಿಯೊ ಬಿಡುಗಡೆ ಮಾಡಿರುವ ಪ್ರಜ್ವಲ್ ಮೇ 31ರ ಬೆಳಗ್ಗೆ 10 ಗಂಟೆಗೆ ಎಸ್‌ಐಟಿ ಮುಂದೆ ಹಾಜರಾಗುತ್ತೇವೆ ಎಂದು ಹೇಳಿದ್ದಾರೆ. ಈ ಆರೋಪಿಯ ವಿರುದ್ಧ ಕೋರ್ಟ್ ವಾರೆಂಟ್ ಇರುವುದಿಂದ ಭಾರತದ ಯಾವುದೇ ಏರ್ಪೋರ್ಟ್‌ಗೆ ಬಂದಿಳಿದರೂ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಲಿದೆ ಎಂದು ಮೂಲಗಳು ತಿಳಿಸಿವೆ.
(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)