Rahul Gandhi: ನಾಳೆ ರಾಜ್ಯಕ್ಕೆ ರಾಹುಲ್ ಗಾಂಧಿ ಎಂಟ್ರಿ; ಬೆಳಗಾವಿಯಲ್ಲಿ ಯುವಕ್ರಾಂತಿ ಸಮಾವೇಶ ಮೂಲಕ 'ಕೈ' ಶಕ್ತಿ ಪ್ರದರ್ಶನ
ನಾಳೆ ರಾಜ್ಯಕ್ಕೆ ಆಗಮಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಳಗಾವಿಯಲ್ಲಿ ನಡೆಯಲಿರುವ ಯುವಕ್ರಾಂತಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮೂರು ದಿನಗಳ ರಾಜ್ಯ ಪ್ರವಾಸದಲ್ಲಿ ರಾಹುಲ್, ಸರಣಿ ಸಭೆಗಳನ್ನು ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು: ರಾಜ್ಯ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ಪಕ್ಷಗಳು ಅಬ್ಬರ ಪ್ರಚಾರ ಮಾಡ್ತಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ಬೆಳಗಾವಿಗೆ ಆಗಮಿಸುತ್ತಿದ್ದು, ಬೃಹತ್ ಶಕ್ತಿ ಪ್ರದರ್ಶನಕ್ಕೆ ಕೈ ನಾಯಕರು ಸಿಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
ಟ್ರೆಂಡಿಂಗ್ ಸುದ್ದಿ
ರಾಹುಲ್ ಗಾಂಧಿ ನಾಳೆಯಿಂದ ಪ್ರಾರಂಭವಾಗುವ ಸರಣಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮೂರು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.
ಮೇ ವೇಳೆಗೆ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಉತ್ತರ ಕರ್ನಾಟಕದ ಬೆಳಗಾವಿ ಮತ್ತು ತುಮಕೂರು ಜಿಲ್ಲೆಯ ಕುಣಿಗಲ್‌ನಲ್ಲಿ ಎರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ರಾಹುಲ್ ಗಾಂಧಿ ಮೊದಲು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ರಸ್ತೆ ಮಾರ್ಗವಾಗಿ ಬೆಳಗಾವಿಗೆ ತೆರಳಲಿದ್ದಾರೆ. ನಾಳೆ (ಮಾರ್ಚ್ 20, ಸೋಮವಾರ) ಮಧ್ಯಾಹ್ನ ನಡೆಯಲಿರುವ ಬೆಳಗಾವಿಯಲ್ಲಿ ‘ಯುವಕ್ರಾಂತಿ ಸಮಾವೇಶ’ದ ಸಿದ್ಧತೆಗಳ ಕುರಿತು ಸಂಸದರೂ ಆಗಿರುವ ರಾಹುಲ್ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ.
ನಂತರ ಅದೇ ದಿನ ಸಂಜೆ ಬೆಂಗಳೂರಿಗೆ ಹಾರಲಿದ್ದು, ರಾತ್ರಿ ಇಲ್ಲಿ ತಂಗಲಿದ್ದಾರೆ. ಮಂಗಳವಾರ ಕುಣಿಗಲ್‌ಗೆ ತೆರಳಲಿರುವ ‘ಪ್ರಜಾಧ್ವನಿ’ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ. ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮತ್ತೆ ಬೆಂಗಳೂರಿಗೆ ವಾಪಸಾಗಲಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಮಾರ್ಚ್ 22 ರಂದು ಪ್ರಕಟಿಸಲಾಗುವುದು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಯುಗಾದಿ ಹಬ್ಬದ ದಿನವನ್ನ ಕನ್ನಡಿಗರು ಹೊಸ ವರ್ಷವೆಂದು ಆಚರಿಸುತ್ತಾರೆ. ಅಂದೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದಿದ್ದಾರೆ.
ದೆಹಲಿಯಲ್ಲಿ ಮಾ.17 ರಂದು ನಡೆದ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣಾ ಕಾರ್ಯತಂತ್ರ ಮತ್ತು ರಾಹುಲ್ ಗಾಂಧಿ ಅವರ ರಾಜ್ಯ ಪ್ರವಾಸದ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ದೆಹಲಿ ಸಭೆಯಲ್ಲಿ ಚುನಾವಣಾ ರಣತಂತ್ರಗಳ ಬಗ್ಗೆ ಚರ್ಚೆ ನಡೆಯಿತು. ರಾಜ್ಯ ಮಟ್ಟದ ‘ಯುವಕ್ರಾಂತಿ’ ರ್‍ಯಾಲಿಯಲ್ಲಿ ಪಾಲ್ಗೊಳ್ಳಲು ರಾಹುಲ್ ಗಾಂಧಿ ಮಾರ್ಚ್ 20 ರಂದು ಬೆಳಗಾವಿಗೆ ಬರಲಿದ್ದಾರೆ. ಇದರ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದಿದ್ದಾರೆ.
ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದ ಚರ್ಚೆಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಯುಗಾದಿ ಹಬ್ಬದ ದಿನದಂದು ಅಂದರೆ ಮಾರ್ಚ್ 22 ರಂದು ಬೆಳಿಗ್ಗೆ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿಯು ದೆಹಲಿಯಲ್ಲಿ ಸಭೆ ನಡೆಸಿತ್ತು. ವರದಿಗಳ ಪ್ರಕಾರ 71 ಹಾಲಿ ಕಾಂಗ್ರೆಸ್ ಶಾಸಕರನ್ನು ಒಳಗೊಂಡಂತೆ 125 ಅಭ್ಯರ್ಥಿಗಳ ಮೊದಲ ಪಟ್ಟಿಗೆ ಚುನಾವಣಾ ಸಮತಿ ಅಂತಿಮಗೊಳಿಸಿದೆ.
ಪಕ್ಷದ ಸ್ಕ್ರೀನಿಂಗ್ ಸಮಿತಿಯು ಈ ತಿಂಗಳ ಆರಂಭದಲ್ಲಿ ಟಿಕೆಟ್ ಆಕಾಂಕ್ಷಿಗಳ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿದ್ದು, ಸಮಿತಿಯ ಅಭಿಪ್ರಾಯವನ್ನು ಅಂತಿಮ ಪರಿಶೀಲನೆಗಾಗಿ ಎಐಸಿಸಿಯ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗಿತ್ತು.
ದೆಹಲಿಯಲ್ಲಿ 3 ಗಂಟೆಗಳ ಸುದೀರ್ಘ ಸಭೆಯ ನಂತರ ಮಾಹಿತಿ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ರಾಜ್ಯ ಸ್ಕ್ರೀನಿಂಗ್ ಕಮಿಟಿ ಶಿಫಾರಸು ಮಾಡಿದ ಹೆಸರುಗಳ ಬಗ್ಗೆ ಸಿಇಸಿ ಚರ್ಚಿಸಿ ಹೆಸರುಗಳನ್ನು ಅನುಮೋದಿಸಿದ್ದು, ಎಐಸಿಸಿ ಪಟ್ಟಿಯನ್ನು ಪ್ರಕಟಿಸುತ್ತದೆ ಎಂದು ಹೇಳಿದ್ದಾರೆ. ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ಸಿಗಬಹುದು ಎಂದ ಡಿಕೆಶಿ, ಎಲ್ಲರೂ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.