ಫೆಂಗಲ್ ಚಂಡಮಾರುತ ಎಫೆಕ್ಟ್; ದಕ್ಷಿಣ ಕನ್ನಡ, ಉಡುಪಿ, ಮೈಸೂರಿನ ಶಾಲಾ-ಕಾಲೇಜುಗಳಿಗೆ ರಜೆ, ನೀರಿಗಿಳಿಯದಂತೆ ಪ್ರವಾಸಿಗರಿಗೆ ಸೂಚನೆ
School Holiday Due to Heavy Rain: ಮೈಸೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿಸೆಂಬರ್ 3ರ ಮಂಗಳವಾರ ಭಾರೀ ಮಳೆಯಾಗುವ ಮುನ್ಸೂಚನೆ ಕಾರಣದಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಫೆಂಗಲ್ ಸೈಕ್ಲೋನ್ ಎಫೆಕ್ಟ್ ಕರ್ನಾಟಕದ ಮೇಲೂ ಬಿದ್ದಿದೆ. ಬೆಂಗಳೂರು, ದಕ್ಷಿಣ ಕನ್ನಡ ಸೇರಿ 14ಕ್ಕೂ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಮಳೆಯ ಅಬ್ಬರ ಜೋರಾಗಿರುವ ಕಾರಣ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಲಾಗಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗು, ಚಾಮರಾಜನಗರ ಸೇರಿದಂತೆ ಮೈಸೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ (School collage holiday) ರಜೆ ಘೋಷಿಸಲಾಗಿದೆ.
ಕಳೆದ ಎರಡು ದಿನಗಳಿಂದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಡಿಸೆಂಬರ್ 3ರ ಮಂಗಳವಾರ ಸಹ ಮೈಸೂರು, ಉಡುಪಿ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಮುನ್ನಚ್ಚರಿಕೆ ಕ್ರಮವಾಗಿ ಯೆಲ್ಲೋ ಅಲರ್ಟ್ (Yellow Alert) ಘೋಷಿಸಿರುವ ಮೈಸೂರು ಉಡುಪಿ, ದಕ್ಷಿಣ ಕನ್ನಡ ಜಿಲ್ಲಾಡಳಿತ ಭಾರೀ ಮಳೆಯಾಗುವ ಮುನ್ನೆಚ್ಚರಿಕೆಯಿಂದ ಡಿಸೆಂಬರ್ 3ರ ಮಂಗಳವಾರದಂದು ಶಾಲಾ,ಕಾಲೇಜುಗಳಿಗೆ ರಜೆ ಘೋಷಿಸಿದೆ. ಅಲ್ಲದೆ ಕೆಲವೊಂದಿಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಸೂಚಿಸಿದೆ.
ಮೈಸೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ
ಮೈಸೂರಿನಲ್ಲಿ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( 2nd ಪಿಯುಸಿವರೆಗೆ) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ ರೆಡ್ಡಿ ಅವರು ಆದೇಶಿಸಿದ್ದಾರೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಸೂಚನೆಗಳು
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇರುವ ನದಿ, ಜಲಪಾತ, ಸಮುದ್ರ, ಜಲಾಶಯ ಪ್ರದೇಶಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು, ನೀರಿನಲ್ಲಿ ಇಳಿಯುವುದು, ಈಜುವುದು, ಸಾಹಸ ಚಟುವಟಿಕೆಗಳನ್ನು ಮಾಡುವುದನ್ನು ಡಿಸೆಂಬರ್ 4ರ ತನಕ ನಿರ್ಬಂಧ ವಿಧಿಸಲಾಗಿದೆ.
ಸಂಭವನೀಯ ನೆರೆ ಹಾವಳಿ, ಭೂ ಕುಸಿತ, ತೋಡುಗಳು, ಕಾಲು ಸಂಕ ಮತ್ತು ವಿದ್ಯುತ್ ತಂತಿಗಳಿಂದ ಹಾಗೂ ಇನ್ನಿತರ ಮೂಲಗಳಿಂದ ವಿಪತ್ತು ಸಂಭವಿಸುವ ಪ್ರದೇಶಗಳನ್ನು ಗುರುತಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಮತ್ತು ಸಂಭವನೀಯ ವಿಪತ್ತು ಪ್ರದೇಶಗಳಿಗೆ ಸಾರ್ವಜನಿಕರು ತೆರಳದಂತೆ ಸೂಚನಾ ಫಲಕಗಳನ್ನು ಅಳವಡಿಸಲು ಕ್ರಮವಹಿಸುವಂತೆ ಸೂಚಿಸಲಾಗಿದೆ.
ಗುಡ್ಡಗಾಡು ಪ್ರದೇಶದಲ್ಲಿರುವ/ಶಿಥಿಲಗೊಂಡಿರುವ, ಆವರಣಗೋಡೆಗೆ ತಾಗಿಕೊಂಡಿರುವಂತಹ ಅಪಾಯಕಾರಿ ಮನೆಗಳನ್ನು, ಅಂಗನವಾಡಿಗಳು, ಶಾಲೆಗಳು, ತೋಡುಗಳು, ಸಂಕಗಳನ್ನು ಗುರುತಿಸಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವುದು.
ಕಿಂಡಿ ಅಣೆಕಟ್ಟುಗಳನ್ನು ಸಣ್ಣ ನೀರಾವರಿ ಇಲಾಖೆಯ ಸಮನ್ವಯತೆಯಿಂದ ಪರಿಶೀಲಿಸಿ, ಗೇಟ್ಗಳಲ್ಲಿ ಸಿಲುಕಿಕೊಂಡಿರುವ ಮರದ ದಿಮ್ಮಿ, ಇತರೆ ತ್ಯಾಜ್ಯಗಳನ್ನು ತೆರವುಗೊಳಿಸಲು ಹಾಗೂ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಹಾಗೂ ನದಿ ತೀರದ ಪ್ರದೇಶಗಳಲ್ಲಿ ಸಂಭಾವ್ಯ ವಿಪತ್ತು ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು.
ಕೊಡಗಿನಲ್ಲಿ ಶಾಲೆಗಳಿಗೆ ರಜೆ
ಮಂಗಳವಾರ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗಬಹುದು ಎನ್ನುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ನೀಡಿದೆ. ಅದರಲ್ಲೂ ಸೋಮವಾರದಿಂದ ಮಂಗಳವಾರ ಬೆಳಿಗ್ಗೆವರೆಗೂ ರೆಡ್ ಅಲರ್ಟ್ ಅನ್ನೂ ಕೂಡ ನೀಡಲಾಗಿದೆ. ಭಾರೀ ಮಳೆಯಾಗುವ ಮುನ್ನೆಚ್ಚರಿಕೆಯಿಂದ ಕೊಡಗು ಜಿಲ್ಲಾಡಳಿತವು 2024ರ ಡಿಸೆಂಬರ್ 3ರ ಮಂಗಳವಾರದಂದು ಶಾಲಾ,ಕಾಲೇಜುಗಳಿಗೆ ರಜೆ ಘೋಷಿಸಿದೆ. ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಮಂಗಳವಾರ ರಜೆ ನೀಡಲಾಗಿದೆ. ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳು ಎಂದಿನಂತೆ ನಡೆಯಲಿವೆ ಎಂದು ಪ್ರಭಾರ ಜಿಲ್ಲಾಧಿಕಾರಿ ಆನಂದ್ ಪ್ರಕಾಶ್ ಮೀನಾ ತಿಳಿಸಿದ್ದಾರೆ.
ಚಾಮರಾಜನಗರದಲ್ಲೂ ರಜೆ
ಫೆಂಗಲ್ ಚಂಡಮಾರುತದ ಪರಿಣಾಮ ಮಳೆ ಮುಂದುವರೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಡಿಸೆಂಬರ್ 3 ರ ಮಂಗಳವಾರವು ಸಹ ರಜೆ ಘೋಷಿಸಲಾಗಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ. ಪರೀಕ್ಷೆ ನಡೆಯುತ್ತಿರುವ ಪದವಿ ಕಾಲೇಜುಗಳಿಗೆ ಹೊರತುಪಡಿಸಿ ರಜೆ ಘೋಷಣೆ ಮಾಡಲಾಗಿದೆ. ಸೋಮವಾರವೂ ಚಾಮರಾಜನಗರ ಜಿಲ್ಲೆಯಲ್ಲಿ ರಜೆ ಇತ್ತು