ಕನ್ನಡ ಸುದ್ದಿ  /  ಕರ್ನಾಟಕ  /  Jagadish Shettar: ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ; ರಾಜ್ಯ ಕೇಸರಿ ನಾಯಕರ ವಿರುದ್ಧ ಬೇಸರ

Jagadish Shettar: ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ; ರಾಜ್ಯ ಕೇಸರಿ ನಾಯಕರ ವಿರುದ್ಧ ಬೇಸರ

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಬಿಜೆಪಿ ನಾಯಕರು ತಮ್ಮನ್ನು ನಡೆಸಿಕೊಂಡ ರೀತಿ ಸರಿಯಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್
ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಬೆಂಗಳೂರು: ಭಾರತೀಯ ಜನತಾ ಪಾರ್ಟಿಗೆ (Bharatiya Janata Party) ಗುಡ್ ಬೈ ಹೇಳಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಕಾಂಗ್ರೆಸ್ (Congress) ಸೇರಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ನಗರದ ಕೆಪಿಸಿಸಿ ಕಚೇರಿಯಲ್ಲಿ ಇಂದು (ಏ.17, ಸೋಮವಾರ) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ಧ್ವಜವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು.

ಇದೇ ವೇಳೆ ಮಾತನಾಡಿದ ಶೆಟ್ಟರ್ , ರಾಜ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನವಡೆಸಿದ್ದಾರೆ. ಕೆಲವರ ಸ್ವಾರ್ಥ ರಾಜಕಾರದಿಂದ ನನಗೆ ಟಿಕೆಟ್ ತಪ್ಪಿಸಿದರು ಎಂದು ಆರೋಪಿಸಿದ್ದಾರೆ.

ವ್ಯಕ್ತಿ ಮುಖ್ಯವಲ್ಲ ಪಕ್ಷ ಮುಖ್ಯ ಎಂದು ಕೆಲಸ ಮಾಡಿದ್ದೆವು. ಆದರೆ ಇಂದು ಕೆಲವು ವ್ಯಕ್ತಿಗಳಿಗಾಗಿ ಪಕ್ಷವನ್ನು ಕಟ್ಟಲಾಗುತ್ತಿದೆ. ಬಿಜೆಪಿ ಕಚೇರಿಯನ್ನು ಕೆಲವು ವ್ಯಕ್ತಿಗಳು ನಿಯಂತ್ರಿಸುತ್ತಿದ್ದಾರೆ. ಈ ವಿಚಾರ ಕೇಂದ್ರದ ನಾಯಕರ ಗಮನಕ್ಕೆ ಬಂದಿಲ್ಲ. ಕೆಲವು ವ್ಯಕ್ತಿಗಳ ಹಿತಾಸಕ್ತಿಗಾಗಿ ಬೇರೆಯವರಿಗೆ ಅವಮಾನ ಮಾಡಲಾಗುತ್ತಿದೆ. ನನಗೆ ಅಪಮಾನ ಮಾಡಿದ ನಂತರ ನನಗೆ ಬೇರೆ ಹುದ್ದೆ ನೀಡುವುದಾಗಿ ಹೇಳಿದರು ಎಂದು ವಿವರಿಸಿದ್ದಾರೆ.

ನನಗೆ ಅಧಿಕಾರ ಮುಖ್ಯವಾಗಿದ್ದರೆ, ಬೊಮ್ಮಾಯಿ ಅವರ ಸರ್ಕಾರದಲ್ಲಿ ನನಗೆ ಮಂತ್ರಿ ಸ್ಥಾನ ಬೇಡ ಎಂದು ಸ್ವಯಂಕೃತವಾಗಿ ಯಾಕೆ ಹೇಳಿಕೆ ನೀಡಿದ್ದೆ? ಅಧಿಕಾರ ಬೇಕಾಗಿದ್ದರೆ ಆಗಲೇ ಹಠಮಾಡಿ ಮಂತ್ರಿಗಿರಿ ಪಡೆಯುತ್ತಿದ್ದೆ. ಕೊನೆಯದಾಗಿ ನನಗೆ ಅಪಮಾನವಾಗಿದ್ದು, ಅದನ್ನು ಸರಿಪಡಿಸಲು ಶಾಸಕ ಸ್ಥಾನಕ್ಕೆ ಸ್ಪರ್ಧಿಸುತ್ತೇನೆ.

ಆರು ತಿಂಗಳ ನಂತರ ಗೌರವಯುತವಾಗಿ ರಾಜೀನಾಮೆ ನೀಡುತ್ತೇನೆ ನಂತರ ನೀವು ಯಾರನ್ನು ಬೇಕಾದರೂ ಶಾಸಕರನ್ನಾಗಿ ಮಾಡಿಕೊಳ್ಳಿ ಎಂದು ಹೇಳಿದೆ. ಆದರೂ ಅವರ ಒಪ್ಪಲಿಲ್ಲ. ನನ್ನನ್ನು ರಾಜಕೀಯವಾಗಿ ಗೌರವಯುತವಾಗಿ ಕಳುಹಿಸಿ ಎಂದು ಕೇಳಿದರೂ ಅದಕ್ಕೆ ಅವಕಾಶ ನೀಡಲಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ.

ಇದಕ್ಕೂ ಮುನ್ನ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪಕ್ಷದ‌‌ ಸಿದ್ದಾಂತ ಶೆಟ್ಟರ್ ಗೆ ಗೊತ್ತಿದೆ. ನಮ್ಮ ಪಕ್ಷದ ಸಿದ್ದಾಂತ ಒಪ್ಪಿ ಸ್ವಾಭಿಮಾನ ಕಾಪಾಡಲು ಈ ನಿರ್ಧಾರವನ್ನು ಕೈಗೊಂಡಿದ್ದಾರೆ ಅಂತ ಹೇಳಿದ್ದಾರೆ.

ಶೆಟ್ಟರ್ ಒಬ್ಬ ಸಜ್ಜನ ರಾಜಕಾರಣಿ ಆಗಿದ್ದು, ಬಿಜೆಪಿ ಅವರಿಗೆ ಅವಕಾಶ ಮಾಡಿಕೊಟ್ಟಿರಲಿಲ್ಲ. ರಾಹುಲ್ ಗಾಂಧಿ ರಾಜ್ಯದಲ್ಲಿ 150 ಸ್ಥಾನ ಗಳಿಸಬೇಕು ಎಂಬ ಗುರಿ ನೀಡಿದ್ದಾರೆ. ಇದೀಗ ಜಗದೀಶ್ ಶೆಟ್ಟರ್ ಸೇರ್ಪಡೆ ನಂತರ ನಮಗೆ ಅದು ಸುಲಭ ಆಗಲಿದೆ ಅಂತ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಲಿಂಗಾಯತ ಸಮುದಾಯಕ್ಕೆ ಆಗುತ್ತಿರುವ ಅಪಮಾನ ಹಾಗೂ ತಮ್ಮನ್ನು ಬಿಜೆಪಿ ನಡೆಸಿಕೊಂಡ ರೀತಿಗೆ ಬೇಸತ್ತು ತಮ್ಮ ಸ್ವಾಭಿಮಾನ ರಕ್ಷಣೆಗಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ಪ್ರಮುಖ ಲಿಂಗಾಯತ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಶೆಟ್ಟರ್ ಅವರಿಗೆ ಬಿಜೆಪಿಯಿಂದ ಟಿಕೆಟ್ ಸಿಗೋದು ಅನುಮಾನ ಎಂಬುದು ಗೊತ್ತಾಗುತ್ತಿದ್ದಂತೆ ಎರಡ್ಮೂರು ದಿನಗಳಿಂದ ಹೈ ಅಲರ್ಟ್ ಆಗಿದ್ದ ಕಾಂಗ್ರೆಸ್ ನಾಯರು, ಶೆಟ್ಟರ್ ಅವರೊಂದಿಗೆ ಮಾತುಕತೆಯನ್ನು ಆರಂಂಭಿಸಿದ್ದರು. ಲಿಂಗಾಯತ ಸಮುದಾಯದವರೇ ಆದ ಶಾಮನೂರು ಶಿವಶಂಕರಪ್ಪ, ಎಂಬಿ ಪಾಟೀಲ್ ಹಾಗೂ ಇತರೆ ಕೆಲ ನಾಯಕರ ಮೂಲಕ ಶೆಟ್ಟರ್ ಅವರೊಂದಿಗೆ ಮಾತುಕತೆ ನಡೆಸಿ ಪಕ್ಷಕ್ಕೆ ಕರೆತರಲು ಯಶಸ್ವಿಯಾಗಿದ್ದಾರೆ.

ನಿನ್ನೆ (ಏ.16) ಹುಬ್ಬಳ್ಳಿಯಿಂದ ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಬಳಿಕ ಹುಬ್ಬಳ್ಳಿಗೆ ಅಲ್ಲಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿ ಕಾಂಗ್ರೆಸ್ ನಾಯಕರೊಂದಿಗೆ ತಡ ರಾತ್ರಿಯವರಿಗೆ ಮಾತುಕತೆ ನಡೆಸಿದ್ದರು.

3 ದಶಕಕ್ಕೂ ಅಧಿಕ ಕಾಲ ಬಿಜೆಪಿಯಲ್ಲಿದ್ದ ಜಗದೀಶ್ ಶೆಟ್ಟರ್ ಅವರು ಇವತ್ತು ಆ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರಿದ್ದಾರೆ. ಇವರು ಹು-ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಕೈ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

224 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಈಗಾಗಲೇ 3 ಹಂತಗಳಲ್ಲಿ 209 ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆ ಮಾಡಿದೆ. ಇನ್ನ 15 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕಿದೆ.

IPL_Entry_Point