SSLC Exam 2025: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಬಸ್ ಪ್ರಯಾಣ ಉಚಿತ, ಕೋರಿಕೆ ನಿಲುಗಡೆ ಕಡ್ಡಾಯ
SSLC Exam 2025: ಕರ್ನಾಟಕದಲ್ಲಿ ಶುಕ್ರವಾರದಿಂದ ಆರಂಭವಾಗುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ನೀಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆದೇಶ ಮಾಡಿದೆ.

SSLC Exam 2025: ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ 2025 ರ ಪರೀಕ್ಷೆಗಳು ಮಾರ್ಚ್ 21 ರಿಂದ ಆರಂಭವಾಗಲಿದ್ದು. ಎಸ್‌ಎಸ್‌ಎಲ್‌ಸಿ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಇರಲಿದೆ. ಅವರು ಮನೆಯಿಂದ ಹೊರಡುವ ಹತ್ತಿರದ ನಿಲ್ದಾಣದಿಂದ ಪರೀಕ್ಷಾ ಕೇಂದ್ರದವರೆಗೂ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವಂತೆ ಕರ್ನಾಟಕ ರಾಜ್ಯ ರಸ್ತೆ ನಿಗಮ ಆದೇಶವನ್ನು ಹೊರಡಿಸಿದೆ. ಇದರೊಟ್ಟಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹೊರಟ ವಿದ್ಯಾರ್ಥಿಗಳು ಬಸ್ ಪ್ರಯಾಣದ ವೇಳೆ ಕಡ್ಡಾಯವಾಗಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಬೇಕು. ಬಸ್‌ನವರು ಕೂಡ ಕೋರಿಕೆ ನಿಲುಗಡೆಗೆ ಅವಕಾಶ ಮಾಡಿಕೊಡಬೇಕು.ಪರೀಕ್ಷೆ ನಡೆಯುವ ದಿನಗಳಂದು ಕೆ.ಎಸ್.ಆರ್.ಟಿ.ಸಿ ಬಸ್ ಗಳು ಸರಿಯಾದ ಸಮಯದಲ್ಲಿ ನಿಗದಿಪಡಿಸಿರುವ ರೀತಿ ಟ್ರಿಪ್ ಗಳಲ್ಲಿ ಸಂಚರಿಸಬೇಕು. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುವ ಸೂಚನೆಯನ್ನು ನೀಡಲಾಗಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಇರುವುದರಿಂದ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿಯೂ ಇತರೆ ವಿದ್ಯಾಸಂಸ್ಥೆಗಳ ಪರೀಕ್ಷಾ ಕೇಂದ್ರಗಳಿಗೆ ನಿಯೋಜನೆ ಮಾಡಲಾಗಿದೆ. ಇದರಿಂದ ಪರೀಕ್ಷಾ ಅವಧಿಗೆ ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡುವಂತೆ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷರು ಕೋರಿಕೆ ಸಲ್ಲಿಸಿದ ಮೇರೆಗೆ ಈ ಆದೇಶ ಹೊಡಿಸಲಾಗಿದೆ.
ನಿಗದಿಯಂತೆ ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಿಗದಿಯಾಗಿವೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗುವಾಗ ಹಾಗೂ ಹಿಂದಿರುಗುವಾಗ ಎಸ್‌ಎಸ್‌ಎಲ್‌ಸಿ ಪ್ರವೇಶ ಪತ್ರವನ್ನು ತೋರಿಸಿ ನಿಗಮ ವ್ಯಾಪ್ತಿಯ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.
ಈ ಸಂಬಂಧ ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಾನಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಬೇಕು ಎಂದು ಸೂಚನೆ ನೀಡಲಾಗಿದೆ.
ಪ್ರವೇಶ ಪತ್ರದ ಆಧಾರದ ಮೇಲೆ ಬಸ್‌ಗಳ ಕಾರ್ಯಾಚರಣೆ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳು ಇದ್ದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ಮಾಡಲು ಕ್ರಮ ವಹಿಸಬೇಕು ಎಂದು ಸೂಚಿಸಲಾಗಿದೆ.
ಚಾಲನಾ ಸಿಬ್ಬಂದಿಗಳು ಮೇಲಿನ ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು. ಈ ವಿಷಯವನ್ನು ಎಲ್ಲಾ ಘಟಕ ಹಾಗೂ ಬಸ್ ನಿಲ್ದಾಣಗಳ ಸೂಚನಾ ಫಲಕದಲ್ಲಿ ಪ್ರದರ್ಶಿಸಬೇಕು. ಮಕ್ಕಳಿಗೆ ತೊಂದರೆಯಾಗದಂತೆ ಸಹಕರಿಸಬೇಕು. ನಿರ್ದೇಶನಗಳನ್ನು ಜಾರಿಗೊಳಿಸಲು ಕ್ರಮ ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಕೆಎಸ್‌ಆರ್‌ಟಿಸಿ, ವಾಯುವ್ಯ ಸಾರಿಗೆ, ಈಶಾನ್ಯ ಸಾರಿಗೆ ಹಾಗೂ ಬೆಂಗಳೂರಿನ ಬಿಎಂಟಿಸಿಗೆ ಈ ಆದೇಶ ಅನ್ವಯವಾಗಲಿದೆ. ಕಳೆದ ಕೆಲ ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದ್ದು. ಈ ವರ್ಷವೂ ಈ ಉಚಿತ ಸೇವೆ ಮುಂದುವರಿದಿದೆ. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಸೇರಿ ಸುಮಾರು ಹದಿನೈದು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ.
ಈಗಾಗಲೇ ಮುಕ್ತಾಯವಾಗಿರುವ ಪಿಯುಸಿ ಪರೀಕ್ಷೆಗಳಿಗೂ ಕರ್ನಾಟಕ ರಾಜ್ಯದಾದ್ಯಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆಯನ್ನು ಕೆಎಸ್‌ಆರ್‌ಟಿಸಿ ಒದಗಿಸಿತ್ತು. ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು. ಹಲವರು ಬಸ್ ಸೇವೆಯನ್ನು ಉಪಯೋಗಿಸಿಕೊಂಡಿದ್ದರು.

ವಿಭಾಗ