Mangaluru: ತಪ್ಪಿಸಿಕೊಳ್ಳಲು ಯತ್ನಿಸಿದ ಕೋಟೆಕಾರು ಬ್ಯಾಂಕ್ ದರೋಡೆ ಆರೋಪಿ ಮೇಲೆ ಪೊಲೀಸರಿಂದ ಗುಂಡಿನ ದಾಳಿ
ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಡೆದಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.

ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಮಂಗಳವಾರ (ಜ.21) ನಡೆದಿದೆ. ತಲಪಾಡಿಯ ಕಾಟುಂಗರ ಗುಡ್ಡೆ ಬಳಿ ಈ ಘಟನೆ ನಡೆದಿದೆ. ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ತಿಲಕ್ ನಗರ ನಿವಾಸಿ ಕಣ್ಣನ್ ಮಣಿ ಎಂಬಾತನ ಮೇಲೆ ಮಂಗಳೂರು ಸಿಟಿ ಕ್ರೈಂ ಬ್ರ್ಯಾಂಚ್ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಕಾರಣವನ್ನು ಪೊಲೀಸ್ ಕಮೀಷನರ್ ಅನುಪಮ್ ಅಗರವಾಲ್ ತಿಳಿಸಿದ್ದಾರೆ. ತಪಾಸಣೆ ವೇಳೆ ಆರೋಪಿ ಕಣ್ಣನ್ ಮಣಿ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಸ್ಥಳದಲ್ಲಿ ಸಿಕ್ಕ ಒಡೆದ ಬಿಯರ್ ಬಾಟಲಿಯನ್ನು ಬಳಸಿ ಬೆಂಗಾವಲು ಸಿಬ್ಬಂದಿಗಳಾದ ಆಂಜನಪ್ಪ ಮತ್ತು ನಿತಿನ್ ಮೇಲೆ ಹಲ್ಲೆ ನಡೆಸಿದ್ದ ಎಂದು ಹೇಳಿದ್ದಾರೆ.
ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕರ್ನಾಟಕ – ಕೇರಳ ಗಡಿಯ ತಲಪಾಡಿ ಗ್ರಾಮದ ಕಾಟುಂಗರ ಗುಡ್ಡೆ ಬಳಿ ಈ ಘಟನೆ ನಡೆದಿದೆ. ಸ್ಥಳ ಮಹಜರು ಮಾಡುವ ವೇಳೆ ತಪ್ಪಿಸಿಕೊಳ್ಳುವ ಕಣ್ಣನ್ ಮಣಿ ಯತ್ನ ನಡೆಸಿದ್ದ ಎಂದು ವರದಿಯಾಗಿದೆ.
ತ ನಾಡಲ್ಲಿ ಮೂವರ ಬಂಧನ
ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಕೆ.ಸಿ. ರೋಡ್ ಶಾಖೆಯಲ್ಲಿ ಜ. 17ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಕಾರ್ಯಾಚರಣೆ ನಡೆಸಿದ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ತಮಿಳುನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದರು.
ತಿರುನಲ್ವೇಲಿ ಜಿಲ್ಲೆಯ ಪದ್ಮನೇರಿ ಗ್ರಾಮದ ಅಮ್ಮಕೋವಿಲ್ ನಿವಾಸಿ ಮುರುಗಂಡಿ ಥೇವರ್ (36) ನನ್ನು ಆತನ ಮನೆಯಿಂದ ವಶಕ್ಕೆ ಪಡೆಯಲಾಗಿದೆ. ಮುಂಬಯಿಯ ಡೊಂಬಿವಿಲಿ ಪಶ್ಚಿಮ ಗೋಪಿನಾಥ್ ಚೌಕ್ ರಾಮ್ಕಾಭಾಯಿ ನಿವಾಸಿ ಯೋಸುವಾ ರಾಜೇಂದ್ರನ್ (35) ಮತ್ತು ಮುಂಬಯಿ ಚೆಂಬೂರು ತಿಲಕ್‌ನಗರ ನಿವಾಸಿ ಕಣ್ಣನ್ ಮಣಿ (36) ಬಂಧಿತ ಇನ್ನಿಬ್ಬರು ಆರೋಪಿಗಳು. ತಿರುನಲ್ವೇಲಿಯ ಬೇರೆ ಬೇರೆ ಸ್ಥಳಗಳಿಂದ ಈ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತರಿಂದ ಕೃತ್ಯದ ವೇಳೆ ಬಳಸಲಾದ ಫಿಯೆಟ್ ಕಾರು, ಕಳವು ಮಾಡಲಾದ ಎರಡು ಗೋಣಿಚೀಲ ಚಿನ್ನ, ಎರಡು ತಲವಾರು, ಪಿಸ್ತೂಲು, 3 ಸಜೀವ ಮದ್ದು ಗುಂಡುಗಳನ್ನು ಪಡಿಸಿಕೊಳ್ಳಲಾಗಿದೆ.
ಘಟನೆ ಕುರಿತು ಪೊಲೀಸ್ ಕಮೀಷನರ್ ಅನುಪಮ್ ಅಗರವಾಲ್ ಹೇಳುವುದೇನು?
ಕೋಟೆಕಾರು ವ್ಯವಸಾಯ ಪತ್ತಿನ ಸಹಕಾರ ಸಂಘ (ರಿ.)ದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡವು ತಮಿಳುನಾಡಿನ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಈ ಪೈಕಿ ಓರ್ವ ಆರೋಪಿ ಮುಂಬೈನ ಚೆಂಬೂರಿನ ತಿಲಕ್ ನಗರದ ನಿವಾಸಿ ಮಣಿ ಎಂಬವರ ಪುತ್ರ ಕಣ್ಣನ್ ಮಣಿ (36) ಎಂಬಾತನನ್ನು ವಶಕ್ಕೆ ಪಡೆದು ಮಂಗಳೂರಿಗೆ ಕರೆತಂದು ಇಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ಆರೋಪಿಗಳು ನೀಡಿದ ಮಾಹಿತಿಯಂತೆ ಇಂದು, ಸಂಜೆ 4:20 ಗಂಟೆ ಸುಮಾರಿಗೆ ಆಲಂಕಾರು ಗುಡ್ಡೆ, ಕೆ.ಸಿ. ರಸ್ತೆ, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ. ಆರೋಪಿಗಳು ಹಾಗೂ ಉಳ್ಳಾಲ ಠಾಣೆಯ ಪೊಲೀಸ್ ನಿರೀಕ್ಷಕರಾದ ಬಾಲಕೃಷ್ಣ ಹೆಚ್.ಎನ್, ತನಿಖಾ ತಂಡದ ಸದಸ್ಯರ ಸಮ್ಮುಖದಲ್ಲಿ ತಪಾಸಣೆ ನಡೆಸಲಾಯಿತು.
ತಪಾಸಣೆ ವೇಳೆ ಆರೋಪಿ ಕಣ್ಣನ್ ಮಣಿ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ. ಸ್ಥಳದಲ್ಲಿ ಸಿಕ್ಕ ಒಡೆದ ಬಿಯರ್ ಬಾಟಲಿಯನ್ನು ಬಳಸಿ ಬೆಂಗಾವಲು ಸಿಬ್ಬಂದಿಗಳಾದ ಆಂಜನಪ್ಪ ಮತ್ತು ನಿತಿನ್ ಮೇಲೆ ಹಲ್ಲೆ ನಡೆಸಿದ್ದಾರೆ. ಆರೋಪಿಗಳು ತನಿಖಾಧಿಕಾರಿ ಉಳ್ಳಾಲ ಪೊಲೀಸ್ ನಿರೀಕ್ಷಕರನ್ನು ತಳ್ಳಿ ಚಾಕುವಿನಿಂದ ಇರಲು ಯತ್ನಿಸಿದ್ದಾರೆ. ಜೊತೆಗಿದ್ದ ಸಿಸಿಬಿ ಘಟಕದ ಪೊಲೀಸ್ ಇನ್ಸ್‌ಪೆಕ್ಟರ್ ಎಚ್ಚರಿಕೆ ನೀಡಿದರೂ ಆರೋಪಿಗಳು ಹಲ್ಲೆ ಮುಂದುವರಿಸಿ ಪರಾರಿಯಾಗಲು ಯತ್ನಿಸಿದ್ದಾರೆ.
ಇದಕ್ಕೆ ಪ್ರತಿಯಾಗಿ, ಸಿಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ಆರೋಪಿಯ ಕಾಲಿಗೆ ಗುಂಡು ಹಾರಿಸಿ, ಆತನನ್ನು ಬಗ್ಗುಬಡಿದು ಕಸ್ಟಡಿಗೆ ತೆಗೆದುಕೊಂಡರು. ಘಟನೆಯಲ್ಲಿ ಉಳ್ಳಾಲ ಇನ್ಸ್‌ಪೆಕ್ಟರ್ ಬಾಲಕೃಷ್ಣ, ಸಿಸಿಬಿ ಘಟಕದ ಪಿಸಿ ಆಂಜನಪ್ಪ ಮತ್ತು ಉಳ್ಳಾಲ ಠಾಣೆಯ ಪಿಸಿ ನಿತಿನ್ ಅವರಿಗೆ ಗಾಯಗಳಾಗಿವೆ.
ಗಾಯಗೊಂಡ ಸಿಬ್ಬಂದಿ ಮತ್ತು ಆರೋಪಿಗಳನ್ನು ತಕ್ಷಣ ದೇರಳಕಟ್ಟೆ ಯೆನೆಪೊಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
ಜೊತೆಗಿದ್ದ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರು ಗಾಳಿಯಲ್ಲಿ ಎಚ್ಚರಿಕೆ ಗುಂಡು ಹಾರಿಸಿದ ಎಚ್ಚರಿಕೆಯ ಹೊರತಾಗಿಯೂ, ಆರೋಪಿಯು ತನ್ನ ಹಲ್ಲೆಯನ್ನು ಮುಂದುವರಿಸಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ. ಈ ಕಾರಣದಿಂದ ಸಿಸಿಬಿ ಪೊಲೀಸ್ ನಿರೀಕ್ಷಕರು ಆರೋಪಿಯ ಕಾಲಿಗೆ ಗುಂಡು ಹಾರಿಸಿ, ಅವನನ್ನು ನಿಗ್ರಹಿಸಿ ವಶಕ್ಕೆ ಪಡೆದರು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಘಟನೆ ಕುರಿತು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ತಿಳಿಸಿದ್ದಾರೆ.
ವರದಿ: ಹರೀಶ್ ಮಾಂಬಾಡಿ
