ಟಿಎಸ್‍ಆರ್-ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ; 10 ಹಿರಿಯ ಪತ್ರಕರ್ತರಿಗೆ ಉನ್ನತ ಪ್ರಶಸ್ತಿ
ಟಿಎಸ್‌ಆರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಮತ್ತು ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಈ ಎರಡೂ ಪ್ರಶಸ್ತಿಗಳು ತಲಾ 2 ಲಕ್ಷ ರೂಪಾಯಿ ನಗದು ಬಹುಮಾನವನ್ನು ಒಳಗೊಂಡಿವೆ. ಹಿರಿಯ ಪತ್ರಕರ್ತರು ಪ್ರಶಸ್ತಿ ಪಡೆಯಲಿದ್ದಾರೆ.
ಕನ್ನಡ ಪತ್ರಿಕೋದ್ಯಮದಲ್ಲಿ ಅನನ್ಯ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ನೀಡುವ ಟಿಎಸ್ ರಾಮಚಂದ್ರರಾವ್ (ಟಿಎಸ್‍ಆರ್) ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಕನ್ನಡ ಪತ್ರಿಕೆ ಅಥವಾ ಪತ್ರಿಕಾ ಸಮೂಹವನ್ನು ಕಟ್ಟಿ ಬೆಳೆಸಿದ ಪತ್ರಕರ್ತರ ಸಾಧನೆ ಗುರುತಿಸಿ ನೀಡುವ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಕೋವಿಡ್ ಸೇರಿ ವಿವಿಧ ಕಾರಣಗಳಿಂದ ವಿಳಂಬವಾಗಿದ್ದ 2019ರಿಂದ 2023ನೇ ಸಾಲಿನ ಒಟ್ಟು 5 ವರ್ಷಗಳ ಅವಧಿಯ ಪ್ರಶಸ್ತಿಗಳನ್ನು ಒಂದೇ ಬಾರಿ ಘೋಷಿಸಲಾಗಿದೆ.
5 ವರ್ಷಗಳ ಟಿಎಸ್‌ಆರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಮತ್ತು ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರನ್ನು ಆಯ್ಕೆ ಮಾಡಲು ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಾಧೀಶರಾದ ನ್ಯಾ.ಪಿಎನ್ ದೇಸಾಯಿ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಲಾಗಿತ್ತು. ಅದರಂತೆ, ಅರ್ಜಿಗಳು ಮತ್ತು ನಾಮನಿರ್ದೇಶನಗಳ ಸಮಗ್ರ ಪರಿಶೀಲನೆ ನಡೆಸಿ, ಈ ಎರಡೂ ಪ್ರಶಸ್ತಿಗಳಿಗೆ ಆಯ್ಕೆ ಮಾಡಿ ಸರ್ಕಾರಕ್ಕೆ ವರದಿ ನೀಡಲಾಗಿತ್ತು. ಸರ್ಕಾರವು ಪತ್ರಕರ್ತರ ಹೆಸರುಗಳನ್ನು ಅನುಮೋದಿಸಿದೆ. ಎರಡೂ ಪ್ರಶಸ್ತಿಗಳು ತಲಾ 2.00 ಲಕ್ಷ ರೂಪಾಯಿ ನಗದು ಬಹುಮಾನವನ್ನು ಒಳಗೊಂಡಿವೆ.
2018ರವರೆಗೆ 26 ಜನ ಹಿರಿಯ ಪತ್ರಕರ್ತರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕನ್ನಡ ಪತ್ರಿಕೋದ್ಯಮದಲ್ಲಿ ಅವಿರತ ಸೇವೆ ಸಲ್ಲಿಸುವ ಪತ್ರಕರ್ತರೊಬ್ಬರಿಗೆ ಟಿಎಸ್‌ಆರ್ ಪತ್ರಿಕೋದ್ಯಮ ಪ್ರಶಸ್ತಿಯನ್ನು 1993ರಿಂದ ಕರ್ನಾಟಕ ಸರ್ಕಾರ ಪ್ರತಿ ವರ್ಷ ನೀಡುತ್ತಾ ಬಂದಿದೆ.
ಕನ್ನಡ ಪತ್ರಿಕಾ ರಂಗದ ಭೀಷ್ಮ ಎಂದೇ ಹೆಸರಾದ ಮೊಹರೆ ಹಣಮಂತರಾಯರ ಅವರ ಹೆಸರಿನಲ್ಲಿ ಮೋಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈವರೆಗೂ 9 ಪತ್ರಕರ್ತರು ಈ ಪ್ರಶಸ್ತಿಯನ್ನು ಪಡೆದಿದ್ದಾರೆ. ಕನ್ನಡ ಪತ್ರಿಕೋದ್ಯಮವನ್ನು ಬೆಳೆಸಿದ ಪತ್ರಕರ್ತರ ಸಾಧನೆಯನ್ನು ಗುರುತಿಸಿ ಹಣಮಂತರಾಯ ಅವರ ಸ್ಮರಣಾರ್ಥ ಈ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರವು 2010ರಿಂದ ನೀಡುತ್ತಾ ಬರುತ್ತಿದೆ.
ಟಿಎಸ್‌ಆರ್ ಪತ್ರಿಕೋದ್ಯಮ ಪ್ರಶಸ್ತಿ
1. 2019ನೇ ಸಾಲಿಗೆ ಶಿವಾಜಿ ಎಸ್ ಗಣೇಶನ್
2. 2020ನೇ ಸಾಲಿಗೆ ಶ್ರೀಕಾಂತಾಚಾರ್ಯ ಆರ್ ಮಣೂರ
3. 2021ನೇ ಸಾಲಿಗೆ ಡಾ.ಆರ್ ಪೂರ್ಣಿಮಾ
4. 2022ನೇ ಸಾಲಿಗೆ ಪದ್ಮರಾಜ ದಂಡಾವತಿ
5. 2023ನೇ ಸಾಲಿಗೆ ಡಾ.ಸರಜೂ ಕಾಟ್ಕರ್
ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ
1. 2019ನೇ ಸಾಲಿಗೆ ರಾಜೀವ್ ಕಿದಿಯೂರ
2. 2020ನೇ ಸಾಲಿಗೆ ಇಂದೂಧರ ಹೊನ್ನಾಪುರ
3. 2021ನೇ ಸಾಲಿಗೆ ಎನ್ ಮಂಜುನಾಥ
4. 2022ನೇ ಸಾಲಿಗೆ ಚಂದ್ರಶೇಖರ್ ಪಾಲೆತ್ತಾಡಿ
5. 2023ನೇ ಸಾಲಿಗೆ ಶಿವಲಿಂಗಪ್ಪ ದೊಡ್ಡಮನಿ