ಕನ್ನಡ ಸುದ್ದಿ  /  ಕರ್ನಾಟಕ  /  Tumkur News: ಜಟಕಾ ಗಾಡಿಗೆ ಬೈಕ್ ಕಟ್ಟಿ ಬಿಜೆಪಿ ಪ್ರತಿಭಟನೆ; ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಆಕ್ರೋಶ

Tumkur News: ಜಟಕಾ ಗಾಡಿಗೆ ಬೈಕ್ ಕಟ್ಟಿ ಬಿಜೆಪಿ ಪ್ರತಿಭಟನೆ; ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಆಕ್ರೋಶ

ಕಾಂಗ್ರೆಸ್ ಸರ್ಕಾರದಲ್ಲಿ ಒಂದು ವರ್ಷದಿಂದ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. ಒಂದು ಅಡಿ ರಸ್ತೆ ಮಾಡಲೂ ಅನುದಾನವಿಲ್ಲ ಎಂದು ಬಿಜೆಪಿ ನಾಯಕರು ದೂರಿದರು.

ತುಮಕೂರಿನಲ್ಲಿ ಸೋಮವಾರ ಪೆಟ್ರೋಲ್, ಡೀಸೆಲ್ ಬೆಲೆಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ತುಮಕೂರಿನಲ್ಲಿ ಸೋಮವಾರ ಪೆಟ್ರೋಲ್, ಡೀಸೆಲ್ ಬೆಲೆಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ತುಮಕೂರು: ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಸೋಮವಾರ ಜಿಲ್ಲಾ ಬಿಜೆಪಿ ಮುಖಂಡರು ಜಟಕಾ ಗಾಡಿಗೆ ದ್ವಿಚಕ್ರ ವಾಹನ ಕಟ್ಟಿ, ಸೈಕಲ್ ಸವಾರಿ ಮಾಡಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಭದ್ರಮ್ಮ ವೃತ್ತದ ಜಿಲ್ಲಾ ಬಿಜೆಪಿ ಕಚೇರಿಯಿಂದ ಬಿಜಿಎಸ್ ವೃತ್ತದವರೆಗೆ ಶಾಸಕ ಜಿ.ಬಿ.ಜ್ಯೋತಿ ಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಬ್ಯಾಟರಂಗೇಗೌಡ ಅವರು ಸೈಕಲ್ ಸವಾರಿ ಮಾಡಿದರೆ, ಕೆಲವು ಮುಖಂಡರು ಜಟಕಾ ಗಾಡಿಯಲ್ಲಿ ಕುಳಿತು, ಜಟಕಾಗೆ ಬೈಕ್‌ಗಳನ್ನು ಕಟ್ಟಿಕೊಂಡು ಸಂಚರಿಸಿದರು. ಕೆಲವರು ಪಾದಯಾತ್ರೆ ನಡೆಸಿ ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿದರು.

ಬಿಜಿಎಸ್ ವೃತ್ತದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು, ಈ ವೇಳೆ ಮಾತನಾಡಿದ ಶಾಸಕ ಬಿ.ಬಿ.ಜ್ಯೋತಿಗಣೇಶ್, ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎಲ್ಲಾ ರಂಗಗಳಲ್ಲೂ ಸಂಪೂರ್ಣ ವಿಫಲವಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿ ರಾಜ್ಯದ ಜನರಿಗೆ ಮಕ್ಮಲ್ ಟೋಪಿ ಹಾಕುತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ದಿನಬಳಕೆ ಪದಾರ್ಥಗಳ ಬೆಲೆ, ಬಸ್, ಆಟೋಗಳ ಪ್ರಯಾಣ ದರ ಹೆಚ್ಚಾಗಿ ಜನ ಸಾಮಾನ್ಯರಿಗೆ ಮತ್ತಷ್ಟು ಹೊರೆಯಾಗುತ್ತದೆ ಎಂದರು.

ಕಾಂಗ್ರೆಸ್ ಸರ್ಕಾರದಲ್ಲಿ ಒಂದು ವರ್ಷದಿಂದ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. ಒಂದು ಅಡಿ ರಸ್ತೆ ಮಾಡಲೂ ಅನುದಾನವಿಲ್ಲ. ನಮ್ಮ ಬಿಜೆಪಿ ಸರ್ಕಾರದಲ್ಲಿ ನೀಡಿದ್ದ ಹಣದಲ್ಲಿ ರಸ್ತೆ ಗುಂಡಿಗಳಿಗೆ ತೇಪೆ ಹಾಕುವಂತಹ ಪರಿಸ್ಥಿತಿ ಬಂದಿದೆ. ತಮ್ಮ ವೈಫಲ್ಯ ಮರೆಮಾಚಲು ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಚಪಲ ಬೆಳೆಸಿಕೊಂಡಿದ್ದಾರೆ ಎಂದು ಟೀಕಿಸಿದರು.

ಟ್ರೆಂಡಿಂಗ್​ ಸುದ್ದಿ

ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ ಮಾತನಾಡಿ, ಇದು ಕೇವಲ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾತ್ರವಲ್ಲ. ಈ ಏರಿಕೆಯಿಂದ ಎಲ್ಲಾ ಪದಾರ್ಥಗಳ ಬೆಚ್ಚಳವಾಗುತ್ತದೆ, ಸಂಕಷ್ಟದಲ್ಲಿರುವ ಜನಸಾಮಾನ್ಯರ ಮೇಲೆ ಸರ್ಕಾರ ಮತ್ತಷ್ಟು ಹೊರೆ ಹೊರಿಸಿ ಗಾಯದ ಮೇಲೆ ಬರೆ ಎಳೆಯುತ್ತಿದೆ ಎಂದರು. ಆವರಿಗೆ ಶುದ್ಧ ಕುಡಿಯುವ ನೀರು ನೀಡಲಾಗದ ಈ ಸರ್ಕಾರಕ್ಕೆ ರಾಜ್ಯದ ಜನರ ಹಿತ ಬೇಕಾಗಿಲ್ಲ, ಆಮಿಷಗಳ ಮೂಲಕ ಚುನಾವಣೆ ಗೆಲ್ಲಲು ಗ್ಯಾರಂಟಿ ಯೋಜನೆ ಬಳಸಿಕೊಳ್ಳುತ್ತಿದೆ, ಸರ್ಕಾರ ಈ ಕೂಡಲೇ ಏರಿಕೆಯಾಗಿರುವ ಪೆಟ್ರೋಲ್, ಡೀಸೆಲ್ ದರವನ್ನು ವಾಪಸ್ ಪಡೆಯಬೇಕು, ತಪ್ಪಿದಲ್ಲಿ ಬಿಜೆಪಿ ಹೋಬಳಿ, ಮಂಡಲ ಮಟ್ಟದಲ್ಲೂ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ರೈತ ಮೋರ್ಚಾ ಮಾಜಿ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದ್ದಕ್ಕೆ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿ ಜನರ ಮೇಲೆ ಹಗೆ ತೀರಿಸಿಕೊಳ್ಳುವ ಹೀನಕೃತ್ಯಕ್ಕೆ ಇಳಿದಿದೆ ಎಂದು ಆರೋಪಿಸಿದರು.