ಕುಂಚಿಟಿಗರಿಗೆ ಒಬಿಸಿ ಮೀಸಲಾತಿ ಕಲ್ಪಿಸಲು ಪ್ರಯತ್ನ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಭರವಸೆ
ಕನ್ನಡ ಸುದ್ದಿ  /  ಕರ್ನಾಟಕ  /  ಕುಂಚಿಟಿಗರಿಗೆ ಒಬಿಸಿ ಮೀಸಲಾತಿ ಕಲ್ಪಿಸಲು ಪ್ರಯತ್ನ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಭರವಸೆ

ಕುಂಚಿಟಿಗರಿಗೆ ಒಬಿಸಿ ಮೀಸಲಾತಿ ಕಲ್ಪಿಸಲು ಪ್ರಯತ್ನ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಭರವಸೆ

ಈಗಾಗಲೇ ನಮ್ಮ ತಂದೆಯವರು ಕಾಡುಗೊಲ್ಲರಿಗೆ ಎಸ್‌ಟಿ ಮೀಸಲಾತಿ ಕಲ್ಪಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದ್ದು, ನಾನು ಕೂಡ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಕಾಡುಗೊಲ್ಲರ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡುತ್ತೇನೆ ಎಂದರು.

ತುಮಕೂರಿನಲ್ಲಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ.
ತುಮಕೂರಿನಲ್ಲಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ.

ತುಮಕೂರು: ಕುಂಚಿಟಿಗ ಸಮುದಾಯಕ್ಕೆ ಒಬಿಸಿ ಮೀಸಲಾತಿ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. ಜಿಲ್ಲೆಯ ಶಿರಾ ತಾಲ್ಲೂಕು ಪಟ್ಟನಾಯಕನಹಳ್ಳಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದಲ್ಲಿ ಶ್ರೀನಂಜಾವಧೂತ ಸ್ವಾಮೀಜಿ ಆರ್ಶೀವಾದ ಪಡೆದ ನಂತರ ಮಾತನಾಡಿದರು. ಕ್ಷೇತ್ರದಲ್ಲಿ ಶ್ರೀಓಂಕಾರೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದರು.

ರಾಜ್ಯದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸಿ ಗ್ರಾಮೀಣ ಪ್ರದೇಶದ ಯುವಕ, ಯುವತಿಯರಿಗೆ ಉದ್ಯೋಗ ನೀಡುತ್ತೇನೆ. ನಂಜಾವಧೂತ ಶ್ರೀಗಳ ಸಲಹೆಯಂತೆ ಕುಂಚಿಟಿಗ ಸಮುದಾಯಕ್ಕೆ ಓಬಿಸಿ ಮೀಸಲಾತಿ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ನಾನು ಕೃಷಿ ಸಚಿವನಾಗದಿದ್ದರೂ ರಾಜ್ಯದ ರೈತರ ಏಳಿಗೆಗಾಗಿ ಶ್ರಮಿಸುತ್ತೇನೆ. ಈಗಾಗಲೇ ನಮ್ಮ ತಂದೆಯವರು ಕಾಡುಗೊಲ್ಲರಿಗೆ ಎಸ್‌ಟಿ ಮೀಸಲಾತಿ ಕಲ್ಪಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದ್ದು, ನಾನು ಕೂಡ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಕಾಡುಗೊಲ್ಲರ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡುತ್ತೇನೆ ಎಂದರು.

ಇದೇ ಸಂದರ್ಭದಲ್ಲಿ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ ಮತ್ತು ಕಾಡುಗೊಲ್ಲ ಮುಖಂಡರು, ಕಾಡುಗೊಲ್ಲರಿಗೆ ಎಸ್‌ಟಿ ಮೀಸಲಾತಿ ಕಲ್ಪಿಸಿ ಕೊಡುವಂತೆ ಕುಮಾರ ಸ್ವಾಮಿ ಅವರಿಗೆ ಮಾನವಿ ಪತ್ರ ನೀಡಿದರು.

ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀನಂಜಾವಧೂತ ಸ್ವಾಮೀಜಿ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರು ಸ್ಥಾಪಿಸಿದ ಮೈಸೂರು ಮಿಲ್ಸ್, ಭದ್ರಾವತಿ ಉಕ್ಕಿನ ಕಾರ್ಖಾನೆ ಪುನಃಶ್ಚೇತ ಗೊಳಿಸುವುದರ ಜೊತೆಗೆ ರಾಜ್ಯದಲ್ಲಿರುವ ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆಗಳಲ್ಲಿ ನಮ್ಮ ರಾಜ್ಯದವರಿಗೆ ಉದ್ಯೋಗ ನೀಡುವಂತಹ ಮಹತ್ವ ನಿರ್ಧಾರವನ್ನು ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ತೆಗೆದುಕೊಳ್ಳುವ ಅವಶ್ಯಕತೆ ಇದೆ. ಕುಂಚಿಟಿಗ ಸಮುದಾಯವನ್ನು ಕೇಂದ್ರ ಒಬಿಸಿ ಮೀಸಲು ಪಟ್ಟಿಯಲ್ಲಿ ಸೇರಿಸಬೇಕೆಂಬ ಕಡತ ಕೇಂದ್ರ ಸರ್ಕಾರದ ಮುಂದಿದ್ದು ಒಕ್ಕಲಿಗ ಉಪ ಜಾತಿಯಡಿಯಲ್ಲಿ ಕುಂಚಿಟಿಗರಿಗೆ ಒಬಿಸಿ ಮೀಸಲಾತಿ ಕಲ್ಪಿಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಪ್ರಗತಿ ಸಾಧಿಸಲು ಅನುವು ಮಾಡಿಕೊಡಬೇಕು ಎಂದು ಸಲಹೆ ಮಾಡಿದರು.

ಶಿರಾ ಮತ್ತು ತುಮಕೂರು ವಸಂತ ನರಸಾಪುರ ಕೈಗಾರಿಕಾ ವಲಯ ಪ್ರದೇಶಗಳಲ್ಲಿ ಬೃಹತ್ ಕೈಗಾರಿಕೆ ಸ್ಥಾಪಿಸುವ ಮೂಲಕ ಚಿತ್ರದುರ್ಗ, ಕೋಲಾರ, ತುಮಕೂರು ಚಿಕ್ಕಬಳ್ಳಾಪುರ ಬಯಲು ಸೀಮೆಯ ನಿರುದ್ಯೋಗ ಯುವಕರಿಗೆ ಉದ್ಯೋಗ ನೀಡುವಂತಹ ಕೆಲಸ ಮಾಡಬೇಕು. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಶೀಘ್ರ ಪೂರ್ಣಗೊಳಿಸುವುದರ ಜೊತೆಗೆ ಯೋಜನೆಯಲ್ಲಿ ಕೈಬಿಟ್ಟಿರುವ ಮಧುಗಿರಿ ಮತ್ತು ಕೊರಟಗೆರೆ ತಾಲೂಕುಗಳನ್ನು ಸೇರ್ಪಡೆಗೊಳಿಸಿ ಅಲ್ಲಿನ ರೈತರಿಗೆ ನ್ಯಾಯ ಒದಗಿಸಿಕೊಡಬೇಕು ಎನ್ನುವುದೂ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಗಮನ ಸೆಳೆದರು.

ತುಮಕೂರಿನಲ್ಲೂ ಎಚ್‌ಡಿಕೆಗೆ ಅದ್ಧೂರಿ ಸ್ವಾಗತ

ತುಮಕೂರು ನಗರದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೊಬ್ಬರಿ ಹಾರ ಹಾಕಿ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಕೇಂದ್ರ ಸಂಪುಟ ದರ್ಜೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತುಮಕೂರಿಗೆ ಆಗಮಿಸಿದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಜೆಡಿಎಸ್ ಕಾರ್ಯಕರ್ತರು ಸಂಭ್ರಮದಿಂದ ಬರ ಮಾಡಿಕೊಂಡರು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಜೆಡಿಎಸ್ ಕಾರ್ಯಕರ್ತರು ಎಚ್.ಡಿ ಕುಮಾರಸ್ವಾಮಿ ಅವರಿಗೆ ಬೃಹತ್ ಗಾತ್ರದ ಕೊಬ್ಬರಿ ಹಾರ ಹಾಕಿ ಸ್ವಾಗತಿಸುವ ಮೂಲಕ ಕಲ್ಪತರು ನಾಡಿಗೆ ಸ್ವಾಗತ ಕೋರಿದರು. ಕಾರ್ಯಕರ್ತರ ಅದ್ದೂರಿ ಸ್ವಾಗತ ಸ್ವೀಕರಿಸಿದ ಕುಮಾರಸ್ವಾಮಿ ಅವರು ಸಿದ್ಧಗಂಗಾ ಮಠಕ್ಕೆ ತೆರಳಿ ಶಿವಕುಮಾರ ಸ್ವಾಮಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಬಳಿಕ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮಿಗಳ ಆಶೀರ್ವಾದ ಪಡೆದುಕೊಂಡರು.

Whats_app_banner