ಮುಂದಿನ 6 ದಿನಗಳ ಕಾಲ ಕರ್ನಾಟಕದಾದ್ಯಂತ ಹಲವೆಡೆ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ಮುಂದಿನ 6 ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಮೇ 11 ರಿಂದ 16ರವರೆಗೂ ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯಾಗಲಿದೆ. ಇಂದು (ಮೇ 10 ಕರಾವಳಿ ಭಾಗದ ಕೆಲವೆಡೆ ತುಂತುರು ಮಳೆಯಾಗಿದೆ.

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 13ರಂದು ನೈಋತ್ಯ ಮಾನ್ಸೂನ್ ದಕ್ಷಿಣ ಅಂಡಮಾನ್ ಸಮುದ್ರ, ಆಗ್ನೇಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ನಿಕೋಬಾರ್ ದ್ವೀಪಗಳಿಗೆ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇತ್ತ ರಾಜ್ಯದಾದ್ಯಂತ ವರುಣಾಗಮನವಾಗುವ ಮುನ್ಸೂಚನೆ ಕೊಟ್ಟಿದೆ. ಕರಾವಳಿ ಮಾತ್ರವಲ್ಲದೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.
ನಾಳೆ (ಮೇ 11ರ ಭಾನುವಾರ) ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಪ್ರಮಾಣದ ಮಳೆಯಾಗಲಿದೆ. ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅತ್ತ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ವಿಜಯನಗರ, ಮೈಸೂರು, ಕೋಲಾರ, ಮಂಡ್ಯ, ವಿಜಯನಗರ, ಮೈಸೂರು ಸೇರಿದಂತೆ ಕೆಲವು ಕಡೆ ಗುಡುಗು ಹಾಗೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಎನ್. ಪುವಿಯರಸನ್ ಹೇಳಿದ್ದಾರೆ.
ಐದು ದಿನಗಳ ಕಾಲ ಮಳೆ
ಮೇ 12ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿಯೂ ಮಧ್ಯಮ ಅಥವಾ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ. ಅತ್ತ ದಕ್ಷಿಣ ಒಳನಾಡಿನ ಕೆಲವೆಡೆ ಗುಡುಗು ಸಹಿತ ಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮೇ 13 ರಿಂದ 16ರವರೆಗೂ ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ನಾಳೆಯಿಂದ (ಮೇ 11) ಮುಂದಿನ 5 ದಿನಗಳವರೆಗೆ ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನದಲ್ಲಿ ತುಸು ಇಳಿಕೆ ಪ್ರವೃತ್ತಿ ಕಾಣಲಿದ್ದು. ದೊಡ್ಡ ಬದಲಾವಣೆಗಳಿಲ್ಲ.
ಬೆಂಗಳೂರಿನಲ್ಲಿಯೂ ವರುಣಾಗಮನ
ರಾಜಧಾನಿ ಬೆಂಗಳೂರು ಸುತ್ತಮುತ್ತ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಬಿರುಗಾಳಿಯೊಂದಿಗೆ ಹಗುರ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 33 ಡಿಗ್ರಿ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆ ಇದೆ.