ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ
Karnataka Weather: ಜುಲೈನಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿತ್ತು. ಆದರೆ ಆಗಸ್ಟ್ನಲ್ಲಿ ಮಳೆ ಪೂರ್ತಿಯಾಗಿ ಕೈಕೊಟ್ಟಿತು. ಇದರಿಂದ ರೈತರು ಚಿಂತೆಗೀಡಾಗಿದ್ದರು. ಸೆಪ್ಟೆಂಬರ್ ಆರಂಭದಿಂದ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುತ್ತಿದೆ.
ಬೆಂಗಳೂರು: ಮಳೆ ಇಲ್ಲದೇ ಕಂಗೆಟ್ಟಿದ್ದ ಕರ್ನಾಟಕದ ಜನರಿಗೆ ಸಮಾಧಾನಕರ ಸುದ್ದಿಯೊಂದಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆದರೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವುದಿಲ್ಲ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ವರುಣ ಕೃಪೆ ತೋರಲಿದ್ದಾನೆ. ಈ ಮೂರು ಕರಾವಳಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಒಳನಾಡಿನ ಕೊಪ್ಪಳ, ಬೀದರ್, ರಾಯಚೂರು, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ.
ಉಳಿದಂತೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರರದಲ್ಲಿ ಸಾಧಾರಣ ಮಳೆಯಾಗಬಹುದು. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜುಲೈನಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿತ್ತು. ಆದರೆ ಆಗಸ್ಟ್ನಲ್ಲಿ ಮಳೆ ಪೂರ್ತಿಯಾಗಿ ಕೈಕೊಟ್ಟಿತು. ಇದರಿಂದ ರೈತರು ಚಿಂತೆಗೀಡಾಗಿದ್ದರು. ಸೆಪ್ಟೆಂಬರ್ ಆರಂಭದಿಂದ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಆದರೆ ಇದು ಸಾಕಾಗುವುದಿಲ್ಲ.
ಬೀದರನಲ್ಲಿ ಧಾರಾಕಾರ ಮಳೆಯಾಗಿದ್ದು, 7.69 ಟಿಎಂಸಿ ಸಾಮರ್ಥ್ಯದ ಕಾರಂಜ ಜಲಾಶಯ ಸಂಪೂರ್ಣ ತುಂಬಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಲಾಶಯದಿಂದ 7,500 ಕ್ಯೂಸೆಕ್ ನೀರನ್ನು ಬುಧವಾರ ಬಿಡುಗಡೆಮಾಡಲಾಗಿದೆ. ಕೆಆರ್‌ಎಸ್, ತುಂಗಭದ್ರಾ, ಭದ್ರಾ ಡ್ಯಾಂಗಳು ಇನ್ನೂ ತುಂಬಿಯೇ ಇಲ್ಲ.