Bhupendra Patel as Gujarat CM: ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಮುಂದುವರಿಕೆ; ಪ್ರಮಾಣ ವಚನಕ್ಕೂ ಮುಹೂರ್ತ ನಿಗದಿ
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Bhupendra Patel As Gujarat Cm: ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಮುಂದುವರಿಕೆ; ಪ್ರಮಾಣ ವಚನಕ್ಕೂ ಮುಹೂರ್ತ ನಿಗದಿ

Bhupendra Patel as Gujarat CM: ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಮುಂದುವರಿಕೆ; ಪ್ರಮಾಣ ವಚನಕ್ಕೂ ಮುಹೂರ್ತ ನಿಗದಿ

ಡಿಸೆಂಬರ್ 12ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಹಾಲಿ ಸಿಎಂ ಭೂಪೇಂದ್ರ ಪಟೇಲ್ ಮತ್ತೊಂದು ಅವಧಿಗೆ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಿ ಆರ್ ಪಾಟೀಲ್ ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಗುಜರಾತ್‌ ಸಿಎಂ ಆಗಿ ಭೂಪೇಂದ್ರ ಪಟೇಲ್ ಮುಂದುವರಿಕೆ
ಗುಜರಾತ್‌ ಸಿಎಂ ಆಗಿ ಭೂಪೇಂದ್ರ ಪಟೇಲ್ ಮುಂದುವರಿಕೆ

ಗಾಂಧಿನಗರ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ದಾಖಲೆ ಸಂಖ್ಯೆಯ ಸ್ಥಾನಗಳೊಂದಿಗೆ ಪ್ರಚಂಡ ವಿಜಯ ಸಾಧಿಸಲು ಆಡಳಿತಾರೂಢ ಬಿಜೆಪಿ ಸಜ್ಜಾಗಿದೆ. ಈಗಾಗಲೇ ಬಹುಮತದ ಗಡಿ ದಾಟಿರುವ ಬಿಜೆಪಿ, ಗೆಲ್ಲುವುದು ಖಚಿತವಾಗಿದೆ. ಹಲವು ಕ್ಷೇತ್ರಗಳಲ್ಲಿ ಪಕ್ಷ ಮುನ್ನಡೆಯಲ್ಲಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಈ ನಡುವೆ ಹೊಸ ವಿಧಾಸಭಾ ಅವಧಿಗೆ ಪದಗ್ರಹಣದ ಮುಹೂರ್ತ ಕೂಡಾ ನಿಗದಿಯಾಗಿದೆ.

ಹಾಲಿ ಸಿಎಂ ಭೂಪೇಂದ್ರ ಪಟೇಲ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಪಕ್ಷ ಘೋಷಿಸಿದೆ. ಈಗಾಗಲೇ ಭಾರಿ ದಿಗ್ವಿಜಯ ಸಾಧಿಸಿರುವ ರಾಜ್ಯ ಬಿಜೆಪಿಗೆ, ಹೈಕಮಾಂಡ್‌ ಹಿರಿಯರು ಅಭಿನಂದನೆ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತಾ ಶಾ ಸೇರಿದಂತೆ ಪಕ್ಷದ ಹಿರಿಯರು ಸಿಎಂಗೆ ಕರೆ ಮಾಡಿ ಶುಭಾಶಯ ಕೋರಿದ್ದಾರೆ.

ಈ ಬಗ್ಗೆ ಸಿಎಂ ಪಟೇಲ್ ಟ್ವೀಟ್ ಮಾಡಿದ್ದು, “ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗೌರವಾನ್ವಿತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ವಿಜಯಕ್ಕಾಗಿ ಭಾರತೀಯ ಜನತಾ ಪಕ್ಷವನ್ನು ಅಭಿನಂದಿಸಿದ್ದಾರೆ. ಇದು ರಾಜ್ಯದಲ್ಲಿ ಉತ್ತಮ ಆಡಳಿತ ನೀಡಿದ ಬಿಜೆಪಿ ಸರ್ಕಾರದ ಮೇಲೆ ಜನರ ಅಚಲ ನಂಬಿಕೆಯ ಗೆಲುವು. ಧನ್ಯವಾದಗಳು ಗುಜರಾತ್!”, ಎಂದು ಟ್ವೀಟ್ ಮಾಡಿದ್ದಾರೆ.

ಅಹಮದಾಬಾದ್‌ನ ಬಿಜೆಪಿ ಕೇಂದ್ರದಲ್ಲಿ ಬಿಜೆಪಿಯ ರಾಜ್ಯ ಮುಖ್ಯಸ್ಥ ಸಿ ಆರ್ ಪಾಟೀಲ್ ಅವರನ್ನು ಭೇಟಿಯಾದ ಸಿಎಂ ಪಟೇಲ್, ಪರಸ್ಪರ ಅಭಿನಂದಿಸಿದರು. ಪಕ್ಷದ ಕಾರ್ಯಕರ್ತರಿಗೆ ಸಿಹಿ ಹಂಚಿ ಸಂಭ್ರಮಿಸಿದರು.

ಇದೇ ಡಿಸೆಂಬರ್ 12ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಹಾಲಿ ಸಿಎಂ ಭೂಪೇಂದ್ರ ಪಟೇಲ್ ಮತ್ತೊಂದು ಅವಧಿಗೆ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಿ ಆರ್ ಪಾಟೀಲ್ ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ಭೂಪೇಂದ್ರ ಪಟೇಲ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಡಿಸೆಂಬರ್ 12 ರಂದು ನಡೆಯಲಿದೆ” ಎಂದು ಪಾಟೀಲ್ ಹೇಳಿದರು.

“ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಮರು ಆಯ್ಕೆ ಮಾಡಲು ರಾಜ್ಯದ ಜನರು ಮನಸ್ಸು ಮಾಡಿದ್ದಾರೆ. ಇದು ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಉತ್ತಮ ಆಡಳಿತ ಮತ್ತು ಅಭಿವೃದ್ಧಿಯ ವಿಜಯವಾಗಿದೆ. ಕಾಂಗ್ರೆಸ್ ಪಕ್ಷದವರು ಜನಬೆಂಬಲವನ್ನು ಏಕೆ ಕಳೆದುಕೊಳ್ಳುತ್ತಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇತರ ಪಕ್ಷಗಳು ಎಂದಿಗೂ ಈಡೇರಿಸಲಾಗದ ಭರವಸೆಗಳನ್ನು ನೀಡುವ ಮೂಲಕ ಗುಜರಾತ್‌ನ ಜನರನ್ನು ಮರುಳು ಮಾಡಲು ಪ್ರಯತ್ನಿಸಿದವು. ಆದರೆ ಈಗ ಅವುಗಳಿಗೆ ತಕ್ಕ ಉತ್ತರ ಸಿಕ್ಕಿದೆ” ಎಂದು ಬಿಜೆಪಿ ನಾಯಕ ಹೇಳಿದ್ದಾರೆ.

ಸತತ ಏಳನೇ ಅವಧಿಗೆ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಉಳಿಸಿಕೊಳ್ಳಲು ಗುಜರಾತ್‌ನಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವತ್ತ ಮುನ್ನಡೆದಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ, ಬಿಜೆಪಿಯು ಈ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿಯುವ ಸಾಧ್ಯತೆಯಿದೆ. ಐದು ಸುತ್ತಿನ ಮತ ಎಣಿಕೆಯ ಬಳಿಕ, ಸದ್ಯದ ಟ್ರೆಂಡ್‌ ಪ್ರಕಾರ ರಾಜ್ಯದ 182 ವಿಧಾನಸಭಾ ಸ್ಥಾನಗಳಲ್ಲಿ 155 ಕ್ಷೇತ್ರಗಳಲ್ಲಿ ಪಕ್ಷವು ಮುನ್ನಡೆ ಸಾಧಿಸಿದೆ. ಬಿಜೆಪಿಗೆ ಪ್ರಬಲ ಪೈಪೋಟಿ ನೀಡಲು ಸಜ್ಜಾಗಿದ್ದ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ವಿಫಲವಾಗಿದೆ.

Whats_app_banner
ಭಾರತ ಮತ್ತು ವಿಶ್ವದ ಇತರ ದೇಶಗಳ ತಾಜಾ ಸುದ್ದಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದಲ್ಲಿ ಓದಿ.